ಬೆಂಗಳೂರು: ಪಡಿತರ ಚೀಟಿದಾರರಿಗೆ ಇ-ಕೆವೈಸಿ (e-KYC) ಮಾಡಿಸಲು ಹಣಕ್ಕೆ ಬೇಡಿಕೆ ಇಟ್ಟ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ, ಬೆಂಗಳೂರಿನ ನ್ಯಾಯಬೆಲೆ ಅಂಗಡಿಯೊಂದರ ಪರವಾನಗಿಯನ್ನು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಮಾನತುಗೊಳಿಸಿದೆ.
ವಿಜಯನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಚೋಳೂರು ಪಾಳ್ಯ ಮಹಿಳಾ ಕ್ಷೇಮಾಭಿವೃದ್ಧಿ ಸಂಘದ ನ್ಯಾಯಬೆಲೆ ಅಂಗಡಿ ಸಿಬ್ಬಂದಿ, ಇ-ಕೆವೈಸಿ ಪ್ರಕ್ರಿಯೆಗಾಗಿ ಪಡಿತರ ಚೀಟಿದಾರರಿಂದ ಹಣ ಕೇಳುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.
ಪರಿಶೀಲನೆ ಬೆನ್ನಲ್ಲೇ ಕಠಿಣ ಕ್ರಮ ವೈರಲ್ ವಿಡಿಯೋ ಆಧರಿಸಿ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದಾಗ, ಸಿಬ್ಬಂದಿ ಹಣಕ್ಕೆ ಬೇಡಿಕೆ ಇಟ್ಟಿರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಪಶ್ಚಿಮ ವಲಯದ ಜಂಟಿ ನಿರ್ದೇಶಕರು ಶುಕ್ರವಾರದಿಂದಲೇ ಜಾರಿಗೆ ಬರುವಂತೆ ಸದರಿ ನ್ಯಾಯಬೆಲೆ ಅಂಗಡಿಯ ಪರವಾನಗಿಯನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.
ಆಹಾರ ನಿರೀಕ್ಷಕರಿಗೆ ಕಾರಣ ಕೇಳಿ ನೋಟಿಸ್ ಇಂತಹ ಅಕ್ರಮಗಳನ್ನು ತಡೆಯುವಲ್ಲಿ ವಿಫಲವಾದ ಸಂಬಂಧಪಟ್ಟ ಆಹಾರ ನಿರೀಕ್ಷಕರಿಗೂ (Food Inspector) ಇಲಾಖೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಿದ್ದು, ಮೂರು ದಿನಗಳೊಳಗೆ ಉತ್ತರಿಸುವಂತೆ ಗಡುವು ನೀಡಿದೆ. ಇ-ಕೆವೈಸಿ ಪ್ರಕ್ರಿಯೆಯಲ್ಲಿ ಯಾವುದೇ ಲೋಪವಾಗದಂತೆ ಮತ್ತು ಸಾರ್ವಜನಿಕರಿಂದ ಹಣ ಪಡೆಯದಂತೆ ಹಲವು ಬಾರಿ ಸ್ಪಷ್ಟ ನಿರ್ದೇಶನ ನೀಡಿದ್ದರೂ, ಅಧಿಕಾರಿ ನಿರ್ಲಕ್ಷ್ಯ ತೋರಿ ಕರ್ತವ್ಯಲೋಪ ಎಸಗಿದ್ದಾರೆ ಎಂದು ನೋಟಿಸ್ನಲ್ಲಿ ಉಲ್ಲೇಖಿಸಲಾಗಿದೆ.
ಸಚಿವ ರಿಜ್ವಾನ್ ಅರ್ಷದ್ ಎಚ್ಚರಿಕೆಈ ಪ್ರಕರಣದ ಕುರಿತು ಪ್ರತಿಕ್ರಿಯಿಸಿರುವ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ರಿಜ್ವಾನ್ ಅರ್ಷದ್, “ಇ-ಕೆವೈಸಿ ಮಾಡಿಸಲು ಪಡಿತರ ಚೀಟಿದಾರರಿಂದ ಹಣಕ್ಕೆ ಬೇಡಿಕೆ ಇಡುವ ನ್ಯಾಯಬೆಲೆ ಅಂಗಡಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ” ಎಂದು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
