- ಕೇಂದ್ರದ ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಡಿ.1ರಿಂದ 3ರವರೆಗೆ ದೆಹಲಿಯಲ್ಲಿ ಸಿಐಟಿಯು ‘ಸಂಸತ್ ಚಲೋ’
ತುಮಕೂರು : ಕನಿಷ್ಠ ವೇತನ ₹42 ಸಾವಿರ, ಪಿಂಚಣಿ ₹21 ಸಾವಿರ ನಿಗದಿಪಡಿಸುವುದು, ಗುತ್ತಿಗೆ ಕಾರ್ಮಿಕರನ್ನು ಖಾಯಂಗೊಳಿಸುವುದು, ಸಮಾನ ಕೆಲಸಕ್ಕೆ ಸಮಾನ ವೇತನ, ಸ್ಕೀಂ ನೌಕರರ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಡಿಸೆಂಬರ್ 1ರಿಂದ 3ರವರೆಗೆ ನವದೆಹಲಿಯಲ್ಲಿ ಬೃಹತ್ ಸಂಸತ್ ಚಲೋ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ಸಿಐಟಿಯು ರಾಜ್ಯ ಕಾರ್ಯದರ್ಶಿ ಸೈಯದ್ ಮುಜೀಬ್ ತಿಳಿಸಿದರು.
ನಗರದ ಪತ್ರಿಕಾ ಭವನದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ವಿವಿಧ ರಾಜ್ಯಗಳಿಂದ ಒಂದು ಲಕ್ಷಕ್ಕೂ ಅಧಿಕ ಕಾರ್ಮಿಕರು ಹಾಗೂ ವಿವಿಧ ಯೋಜನೆಗಳ ನೌಕರರು ಹೋರಾಟದಲ್ಲಿ ಪಾಲ್ಗೊಳ್ಳಲಿದ್ದಾರೆ. ತುಮಕೂರು ಜಿಲ್ಲೆಯಿಂದ 500ಕ್ಕೂ ಹೆಚ್ಚು ಕಾರ್ಮಿಕರು ದೆಹಲಿಗೆ ತೆರಳಿ ಹೋರಾಟದಲ್ಲಿ ಭಾಗವಹಿಸಲಿದ್ದಾರೆ ಎಂದರು.
ಕೇಂದ್ರ ಸರ್ಕಾರದ ಕಾರ್ಮಿಕ ನೀತಿಗಳು ದುಡಿಯುವ ವರ್ಗದ ಹಿತಾಸಕ್ತಿಗೆ ವಿರುದ್ಧವಾಗಿವೆ. ಕಾರ್ಮಿಕರ ಹಕ್ಕುಗಳ ರಕ್ಷಣೆಗಾಗಿ ಜಾರಿಯಲ್ಲಿದ್ದ 29 ಕಾರ್ಮಿಕ ಕಾಯ್ದೆಗಳನ್ನು ರದ್ದುಗೊಳಿಸಿ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ಜಾರಿಗೆ ತಂದಿರುವುದು ಕಾರ್ಮಿಕರಲ್ಲಿ ಆತಂಕ ಮೂಡಿಸಿದೆ. ಗುತ್ತಿಗೆ ಪದ್ಧತಿ ಹಾಗೂ ನಿಗದಿತ ಅವಧಿಯ ಉದ್ಯೋಗ ವ್ಯವಸ್ಥೆಯಿಂದ ಕಾರ್ಮಿಕರ ಉದ್ಯೋಗ ಭದ್ರತೆ ಮತ್ತು ಸಾಮಾಜಿಕ ಭದ್ರತೆಗೆ ಧಕ್ಕೆಯಾಗುತ್ತಿದೆ ಎಂದು ಆರೋಪಿಸಿದರು.
ಕಾರ್ಮಿಕರಿಗೆ ಕನಿಷ್ಠ ವೇತನ, ಪಿಂಚಣಿ, ಉದ್ಯೋಗ ಭದ್ರತೆ ಹಾಗೂ ಸುರಕ್ಷಿತ ಕೆಲಸದ ವಾತಾವರಣ ಕಲ್ಪಿಸಬೇಕು. ಗುತ್ತಿಗೆ ಕಾರ್ಮಿಕರನ್ನು ಖಾಯಂಗೊಳಿಸಬೇಕು. ಎಲ್ಲ ಗುತ್ತಿಗೆ ಕಾರ್ಮಿಕರಿಗೆ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು. ಕೆಲಸದ ಸ್ಥಳದಲ್ಲಿ ಸುರಕ್ಷತೆ ಮತ್ತು ಮುಷ್ಕರದ ಹಕ್ಕನ್ನು ರಕ್ಷಿಸಬೇಕು. ಜಲ, ಜಮೀನು ಮತ್ತು ಅರಣ್ಯ ಸಂಪನ್ಮೂಲಗಳನ್ನು ಸಂರಕ್ಷಿಸಬೇಕು ಎಂಬ ಬೇಡಿಕೆಗಳನ್ನು ಹೋರಾಟದಲ್ಲಿ ಮುಂದಿಡಲಾಗುವುದು ಎಂದು ತಿಳಿಸಿದರು.
ಕನಿಷ್ಠ ವೇತನ ಪರಿಷ್ಕರಣೆಗೆ ಆಗ್ರಹ
ರಾಜ್ಯದ ಸುಮಾರು ಒಂದೂವರೆ ಕೋಟಿ ಕಾರ್ಮಿಕರಿಗೆ ಸಂಬಂಧಿಸಿದ ಕನಿಷ್ಠ ವೇತನ ಪರಿಷ್ಕರಣೆ ವಿಳಂಬವಾಗುತ್ತಿದೆ. ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅಧ್ಯಕ್ಷತೆಯ ಸಮಿತಿಯು ಮಾರುಕಟ್ಟೆಯ ಬೆಲೆ ಏರಿಕೆಯನ್ನು ಪರಿಗಣಿಸಿ ಕನಿಷ್ಠ ವೇತನ ಹೆಚ್ಚಳಕ್ಕೆ ಶೀಘ್ರ ಕ್ರಮ ಕೈಗೊಳ್ಳಬೇಕು. ಬೆಲೆ ಏರಿಕೆಯಿಂದ ತತ್ತರಿಸಿರುವ ಕಾರ್ಮಿಕರಿಗೆ ನ್ಯಾಯಯುತ ವೇತನ ದೊರೆಯುವಂತಾಗಬೇಕು ಎಂದು ಸೈಯದ್ ಮುಜೀಬ್ ಒತ್ತಾಯಿಸಿದರು.
ಸ್ಕೀಂ ನೌಕರರ ವೇತನ ಹೆಚ್ಚಳಕ್ಕೆ ಒತ್ತಾಯ
ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಕಮಲ ಮಾತನಾಡಿ, ಅಂಗನವಾಡಿ, ಆಶಾ ಹಾಗೂ ಬಿಸಿಯೂಟ ನೌಕರರು ಕಡಿಮೆ ವೇತನದಲ್ಲಿ ದುಡಿಯುತ್ತಿದ್ದು, ಬೆಲೆ ಏರಿಕೆಯಿಂದ ಜೀವನ ನಿರ್ವಹಣೆ ಕಷ್ಟಕರವಾಗಿದೆ. ಕೇಂದ್ರ ಸರ್ಕಾರವು ಯೋಜನೆಗಳಿಗೆ ನೀಡುವ ಅನುದಾನವನ್ನು ಕಡಿತಗೊಳಿಸುತ್ತಿರುವುದರಿಂದ ನೌಕರರು ಸಂಕಷ್ಟ ಎದುರಿಸುತ್ತಿದ್ದಾರೆ. ಸ್ಕೀಂ ನೌಕರರ ವೇತನ ಹೆಚ್ಚಿಸುವುದರ ಜತೆಗೆ ಯೋಜನೆಗಳಿಗೆ ಅಗತ್ಯ ಅನುದಾನ ಒದಗಿಸಬೇಕು ಎಂದರು.
ಚುನಾವಣಾ ಪೂರ್ವದಲ್ಲಿ ಅಂಗನವಾಡಿ ನೌಕರರಿಗೆ ಮಾಸಿಕ ₹15 ಸಾವಿರ, ಬಿಸಿಯೂಟ ನೌಕರರಿಗೆ ₹10 ಸಾವಿರ ಹಾಗೂ ಆಶಾ ಕಾರ್ಯಕರ್ತೆಯರಿಗೆ ₹8 ಸಾವಿರ ವೇತನ ನೀಡುವುದಾಗಿ ಭರವಸೆ ನೀಡಲಾಗಿತ್ತು. ಆದರೆ ಈವರೆಗೂ ಭರವಸೆ ಈಡೇರಿಲ್ಲ. 2027-28ನೇ ಸಾಲಿನ ಕೇಂದ್ರ ಮತ್ತು ರಾಜ್ಯ ಬಜೆಟ್ನಲ್ಲಿ ಸ್ಕೀಂ ನೌಕರರ ವೇತನ ಹೆಚ್ಚಳಕ್ಕೆ ಕ್ರಮ ಕೈಗೊಳ್ಳದಿದ್ದರೆ ತೀವ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.
ಸಿಐಟಿಯು ಜಿಲ್ಲಾ ಖಜಾಂಚಿ ಎನ್.ಕೆ.ಸುಬ್ರಮಣ್ಯ ಮಾತನಾಡಿ, ರಾಜ್ಯ ಸರ್ಕಾರ ಕಾರ್ಮಿಕರ ಬಹುದಿನಗಳ ಬೇಡಿಕೆಯಾಗಿರುವ ಕನಿಷ್ಠ ವೇತನ ಪರಿಷ್ಕರಣೆಯನ್ನು ತಕ್ಷಣ ಜಾರಿಗೆ ತರಬೇಕು. ಬೆಲೆ ಏರಿಕೆಗೆ ಅನುಗುಣವಾಗಿ ವೇತನ ಹೆಚ್ಚಳ ಮಾಡುವುದು ಅನಿವಾರ್ಯವಾಗಿದೆ ಎಂದು ಹೇಳಿದರು.
ಖಾಲಿ ಹುದ್ದೆಗಳ ಭರ್ತಿ, ಗುತ್ತಿಗೆ ಕಾರ್ಮಿಕ ಪದ್ಧತಿ ರದ್ದು, ಕಾರ್ಮಿಕರ ಕೆಲಸದ ಸ್ಥಳದ ಸುರಕ್ಷತೆ, ಮುಷ್ಕರದ ಹಕ್ಕಿನ ರಕ್ಷಣೆ, ಎಸ್ಐಆರ್ ಪ್ರಕ್ರಿಯೆ ರದ್ದು ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಸಂಸತ್ ಚಲೋ ಹೋರಾಟ ನಡೆಸಲಾಗುವುದು ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಅಂಗನವಾಡಿ ನೌಕರರ ಸಂಘದ ಜಿಲ್ಲಾ ಖಜಾಂಚಿ ಗಂಗಾ, ಕಸದ ವಾಹನ ಚಾಲಕರು ಮತ್ತು ಲೋಡರ್ಸ್ ಸಂಘದ ಪ್ರಧಾನ ಕಾರ್ಯದರ್ಶಿ ಮಾರುತಿ, ಪೌರ ಕಾರ್ಮಿಕರ ಸಂಘದ ಖಜಾಂಚಿ ಮಂಜುನಾಥ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
