‘ಆಟೊ ಮತ್ತು ಟ್ಯಾಕ್ಸಿ ಚಾಲಕರ ಆದಾಯಕ್ಕೆ ಮಾರಕವಾಗಿರುವ ಅಕ್ರಮ ವೈಟ್ ಬೋರ್ಡ್ ಬೈಕ್ ಟ್ಯಾಕ್ಸಿ ಹಾಗೂ ಸರ್ಕಾರದ ಶಕ್ತಿ ಯೋಜನೆಯಿಂದ ನಷ್ಟ ಅನುಭವಿಸುತ್ತಿರುವ ಆಟೊ ಚಾಲಕರಿಗೆ ಸರ್ಕಾರ ಪ್ರತಿ ತಿಂಗಳು 10 ಸಾವಿರ ಪರಿಹಾರ ನೀಡಬೇಕು’ ಎಂದು ಬೆಂಗಳೂರು ಆಟೊ ಚಾಲಕರ ಸಂಘಟನೆಗಳ ಒಕ್ಕೂಟ ಒತ್ತಾಯಿಸಿದೆ.
ಬುಧವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆದರ್ಶ ಆಟೊ ಮತ್ತು ಟ್ಯಾಕ್ಸಿ ಡ್ರೈವರ್ಸ್ ಯೂನಿಯನ್ ಅಧ್ಯಕ್ಷ ಎಂ. ಮಂಜುನಾಥ್, ‘ನಗರದಲ್ಲಿ ಆಟೊ ಸೇವೆಯು ಬಿಎಂಟಿಸಿ ನಂತರದ ಸ್ಥಾನದಲಿದ್ದು, ನಿತ್ಯ ಲಕ್ಷಾಂತರ ಜನರಿಗೆ ಸಾರಿಗೆ ಸೇವೆ ಒದಗಿಸುತ್ತಿದೆ. ಕಳೆದ ಎರಡು ವರ್ಷಗಳಿಂದ ಕೆಲವು ಆಯಪ್ ಆಧಾರಿತ ಅನಧಿಕೃತ ಅಕ್ರಮ ವೈಟ್‌ಬೋರ್ಡ್ ಟ್ಯಾಕ್ಸಿಗಳ ಹಾವಳಿ ಮತ್ತು ಸರ್ಕಾರದ ಶಕ್ತಿ ಯೋಜನೆಯಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದೇವೆ ಕೂಡಲೇ ಸರ್ಕಾರ ನಮಗೆ ಪರಿಹಾರ ಘೋಷಿಸಬೇಕು’ ಎಂದು ಒತ್ತಾಯಿಸಿದರು.
‘ಅಸಂಘಟಿತ ವಾಣಿಜ್ಯ ಚಾಲಕರ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು. ಚಾಲಕರ ಪುನಶ್ಚತನಕ್ಕೆ ಕಡಿಮೆ ಬಡ್ಡಿ ದರದಲ್ಲಿ ಜಾತಿವಾರು ನಿಗಮಗಳಿಂದ ನೇರಸಾಲ ಯೋಜನೆ ಅಡಿಯಲ್ಲಿ ಆಟೊ, ಟ್ಯಾಕ್ಸಿ ಚಾಲಕರಿಗೆ 2 ಲಕ್ಷದ ಸಾಲ ಸೌಲಭ್ಯ ನೀಡಬೇಕು. ಎಲೆಕ್ಟ್ರಿಕ್ ಆಟೊಗಳನ್ನು ರಾಪಿಡೊ ಓಲಾ, ಊಬರ್ ಕಂಪನಿ ಹೆಸರಿಗೆ ನೋಂದಣಿ ಮಾಡುತ್ತಿರುವುದನ್ನು ನಿಯಂತ್ರಿಸಬೇಕು. ಈ ಎಲ್ಲ ಬೇಡಿಕೆಗಳನ್ನು ಏಳು ದಿನಗಳ ಒಳಗಾಗಿ ಸರ್ಕಾರ ಸ್ಪಂದಿಸಬೇಕು. ಇಲ್ಲದಿದ್ದರೆ ರಾಜ್ಯದಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.
ಆಟೊರಿಕ್ಷಾ ಡ್ರೈವರ್ಸ್ ಯೂನಿಯನ್ ಅಧ್ಯಕ್ಷ ಸಿ. ಎನ್. ಶ್ರೀನಿವಾಸ್, ಪೀಸ್ ಆಟೊ ಮತ್ತು ಟ್ಯಾಕ್ಸಿ ಡ್ರೈವರ್ಸ್ ಅಸೋಸಿಯೇಷನ್ ಅಧ್ಯಕ್ಷ ರಘು ನಾರಾರಣ ಗೌಡ ಇದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


