ತುಮಕೂರು : ಮಾಜಿ ಸಚಿವ ಹಾಗೂ ಮಧುಗಿರಿ ಶಾಸಕ ಕೆ.ಎನ್. ರಾಜಣ್ಣ ಅವರನ್ನು ಕರ್ನಾಟಕ ರಾಜ್ಯ ಸಹಕಾರ ಅಪೆಕ್ಸ್ ಬ್ಯಾಂಕ್ನ ಅಧ್ಯಕ್ಷರನ್ನಾಗಿ ನೇಮಕ ಮಾಡುವ ಮೂಲಕ ತುಮಕೂರು ಜಿಲ್ಲೆಯ ಹಿಂದುಳಿದ ವರ್ಗಗಳಿಗೆ ನ್ಯಾಯ ಒದಗಿಸಬೇಕು ಎಂದು ಆಹಿಂದ ಒಕ್ಕೂಟದ ಜಿಲ್ಲಾಧ್ಯಕ್ಷ ಧನಯಾ ಕುಮಾರ್ ಆಗ್ರಹಿಸಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಅವರು, ರಾಜಣ್ಣ ಅವರು ಜಿಲ್ಲೆಯ ಹಿಂದುಳಿದ ವರ್ಗಗಳು ಸೇರಿದಂತೆ ಎಲ್ಲ ಸಮುದಾಯಗಳ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಹಿಂದುಳಿದವರು, ಅಲ್ಪಸಂಖ್ಯಾತರು ಹಾಗೂ ದಲಿತ ವರ್ಗದವರ ಪರವಾಗಿ ಹಲವು ರೀತಿಯ ಸಹಾಯ ಮತ್ತು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದಾರೆ ಎಂದು ತಿಳಿಸಿದ್ದಾರೆ.
ಹಿಂದೆ ಯಾವುದೇ ಕಾರಣವಿಲ್ಲದೆ ರಾಜಣ್ಣ ಅವರನ್ನು ಸಚಿವ ಸ್ಥಾನದಿಂದ ಕೆಳಗಿಳಿಸಿರುವುದು ತುಮಕೂರು ಜಿಲ್ಲೆಗೆ ಮಾಡಿದ ಅನ್ಯಾಯವಾಗಿದೆ. ಈ ಹಿನ್ನೆಲೆಯಲ್ಲಿ ಹಿಂದುಳಿದ ವರ್ಗದವರು ಪ್ರತಿಭಟನೆ ನಡೆಸಿದ್ದರೂ ಇದುವರೆಗೂ ಸೂಕ್ತ ನ್ಯಾಯ ದೊರೆತಿಲ್ಲ ಎಂದು ಅವರು ಆರೋಪಿಸಿದ್ದಾರೆ.
ಮಧುಗಿರಿಯಲ್ಲಿ ಇತ್ತೀಚೆಗೆ ‘ಅಕ್ಷರ ಅಮೃತ’ ಯೋಜನೆಯಡಿ ಪದವಿ ಕಾಲೇಜಿನ ವಿದ್ಯಾರ್ಥಿಗಳಿಗೆ ಪ್ರತಿದಿನ ಸುಮಾರು 1,500 ಮಕ್ಕಳಿಗೆ ಉಚಿತ ಮಧ್ಯಾಹ್ನದ ಊಟದ ವ್ಯವಸ್ಥೆ ಮಾಡಿರುವುದು ಸೇರಿದಂತೆ ತಾಲ್ಲೂಕಿನ ಮೂಲಸೌಕರ್ಯ ಅಭಿವೃದ್ಧಿಗೂ ರಾಜಣ್ಣ ಅವರು ಆದ್ಯತೆ ನೀಡಿದ್ದಾರೆ ಎಂದು ಹೇಳಿದ್ದಾರೆ.
ಇಂದು ಅಪೆಕ್ಸ್ ಬ್ಯಾಂಕ್ಗೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ, ಅಧ್ಯಕ್ಷ ಸ್ಥಾನಕ್ಕೆ ಕೆ.ಎನ್. ರಾಜಣ್ಣ ಅವರನ್ನು ನೇಮಕ ಮಾಡುವ ಮೂಲಕ ತುಮಕೂರು ಜಿಲ್ಲೆಯ ಹಿಂದುಳಿದ ವರ್ಗಗಳ ಬೇಡಿಕೆಗೆ ಸ್ಪಂದಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ರಾಜಣ್ಣ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡದಿದ್ದರೆ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸಲಾಗುವುದು ಎಂದು ಧನಯಾ ಕುಮಾರ್ ಎಚ್ಚರಿಸಿದ್ದಾರೆ.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
