ತುಮಕೂರು: ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣ ಉಲ್ಬಣವಾಗುತ್ತಿರುವ ಹಿನ್ನೆಲೆಯಲ್ಲಿ ಜ್ವರದ ಲಕ್ಷಣ ಸೇರಿದಂತೆ ಡೆಂಗ್ಯೂ ರೋಗ ಲಕ್ಷಣಗಳು ಕಂಡು ಬಂದವರ ರಕ್ತ ಮಾದರಿ ಪರೀಕ್ಷೆ ಪ್ರಮಾಣವನ್ನು ಹೆಚ್ಚಿಸಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮಲೇರಿಯಾ ಅಧಿಕಾರಿ ಡಾ. ಚಂದ್ರಶೇಖರ್‌ಗೆ ಸೂಚನೆ ನೀಡಿದರು.
ಜಿಲ್ಲಾ ಆಸ್ಪತ್ರೆ ಡೆಂಗ್ಯೂ ವಾರ್ಡಿಗೆ ಭೇಟಿ ನೀಡಿ ಪರಿಶೀಲಿಸಿ ಮಾತನಾಡಿದ ಅವರು, ರಕ್ತ ಮಾದರಿ ಪರೀಕ್ಷೆ ಪ್ರಮಾಣವನ್ನು ಹೆಚ್ಚಿಸುವುದರಿಂದ ಡೆಂಗ್ಯೂ ದೃಢಪಟ್ಟ ಪ್ರಕರಣಗಳಿಗೆ ಸಕಾಲದಲ್ಲಿ ಚಿಕಿತ್ಸೆ ನೀಡಲು ಅನುಕೂಲವಾಗುತ್ತದೆ. ನಂತರ ರೋಗಿಗಳ ಆರೋಗ್ಯ ಪರಿಸ್ಥಿತಿ, ರಕ್ತದ ಒತ್ತಡದ ಮಾಹಿತಿಯನ್ನು ಪಡೆದ ಅವರು, ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿರುವ ಖಾಸಗಿ ಆಸ್ಪತ್ರೆಗಳಲ್ಲಿ ಡೆಂಗಿ ದೃಢಪಟ್ಟವರಿಗೆ ಚಿಕಿತ್ಸೆ ನೀಡಲು ನಿರ್ದೇಶನ ನೀಡಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.
ಬಳಿಕ ಮಕ್ಕಳ ವಾರ್ಡಿಗೆ ಭೇಟಿ ನೀಡಿ ಅವರಿಗೆ ನೀಡುತ್ತಿರುವ ಚಿಕಿತ್ಸೆ ಬಗ್ಗೆ ಪರಿಶೀಲಿಸಿದರು. ಮಕ್ಕಳಿಗೆ ಸೊಳ್ಳೆ ಕಚ್ಚದಂತೆ ಸೊಳ್ಳೆ ಪರದೆ ವ್ಯವಸ್ಥೆ ಮಾಡಬೇಕು ಎಂದರಲ್ಲದೆ, ಜಿಲ್ಲಾ ಆಸ್ಪತ್ರೆಗೆ ಎಷ್ಟು ಬಾರಿ ಭೇಟಿ ನೀಡಿ ಸೂಚನೆ ನೀಡಿದ್ದರೂ ಸ್ವಚ್ಛತೆ ಕಾಪಾಡುವಲ್ಲಿ ಇನ್ನೂ ಸುಧಾರಿಸಿಕೊಂಡಿಲ್ಲ. ಜಿಲ್ಲಾಸ್ಪತ್ರೆಯಲ್ಲಿ ಸ್ವಚ್ಛತಾ ಕಾರ್ಯ ಮಾಡುವ ನೌಕರರ ಪಟ್ಟಿ ಹಾಗೂ ಅವರಿಗ ಪಾವತಿ ಮಾಡಿರುವ ವೇತನದ ವಿವರವನ್ನು ಕೂಡಲೇ ನನ್ನ ಗಮನಕ್ಕೆ ತರಬೇಕು ಎಂದು ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಕುಟುಂಬ ಕಲ್ಯಾಣ ಅಧಿಕಾರಿ ಡಾ. ರೇಖಾ, ವೈದ್ಯಾಧಿಕಾರಿ ಡಾ. ಚೇತನ್ ಸೇರಿದಂತೆ ಮತ್ತಿತರರು ಹಾಜರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA