ಶ್ರವಣಬೆಳಗೊಳ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಗ್ರಾಮಗಳ ಅಭಿವೃದ್ಧಿ, ಆರ್ಥಿಕ ಸ್ವಾವಲಂಬನೆ, ಸಾಮಾಜಿಕ ಅಭಿವೃದ್ಧಿಗೆ ಪ್ರೋತ್ಸಾಹ ಹಾಗೂ ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸುತ್ತಿದೆ ಎಂದು ಯೋಜನೆಯ ಜಿಲ್ಲಾ ನಿರ್ದೇಶಕ ಕೇಶವ ದೇವಾಂಗ ಹೇಳಿದರು.
ಶ್ರೀಕ್ಷೇತ್ರ ಶ್ರವಣಬೆಳಗೊಳ ಮತ್ತು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ.ಟ್ರಸ್ಟ್ ವತಿಯಿಂದ ಶ್ರವಣಬೆಳಗೊಳದ ಯೋಜನೆಯ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಸುಜ್ಞಾನ ನಿಧಿ ಶಿಷ್ಯವೇತನ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಣದಿಂದ ನೈತಿಕತೆ, ಸಂಸ್ಕಾರ ಹಾಗೂ ಉತ್ತಮ ಮಾನವೀಯ ಮೌಲ್ಯಗಳನ್ನು ವಿದ್ಯರ‍್ಥಿಗಳಿಗೆ ಬಾಲ್ಯದಿಂದಲೇ ಕಲಿಸಬೇಕು ಎಂದರು
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಗ್ರಾಮಗಳಲ್ಲಿ ಸ್ವಸಹಾಯ ಸಂಘಗಳನ್ನು ಸ್ಥಾಪಿಸಿ, ಸಾಮಾಜಿಕ ಚಳುವಳಿಯನ್ನು ಮಾಡುತ್ತಿದ್ದು, ಕುಟುಂಬದ ಹಾಗೂ ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತಿದೆ. ಸಂಸ್ಥೆಯು ಸ್ವಸಹಾಯ ಸಂಘ ಮತ್ತು ರಾಷ್ಟ್ರೀಕೃತ ಬ್ಯಾಂಕ್ ಗಳ ನಡುವಿನ ಕೊಂಡಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ಒದಗಿಸಿ, ಹೈನುಗಾರಿಕೆ, ಸಣ್ಣ ಉದ್ಯಮ ಸ್ಥಾಪಿಸಲು ಪ್ರೇರಣೆ ನೀಡುತ್ತಿದೆ. ಮಹಿಳೆಯರು ಆರ್ಥಿಕ ಸ್ವಾವಲಂಬಿಗಳಾಗಲು ಶ್ರಮಿಸುತ್ತಿದೆ ಎಂದರು.
ಅಂತರ್ಜಲ ವೃದ್ಧಿಸುವ ಸಲುವಾಗಿ ನಮ್ಮ ಊರು ನಮ್ಮ ಕೆರೆ ಯೋಜನೆ ಅಡಿಯಲ್ಲಿ ಕೆರೆಗಳ ಹೂಳು ತೆಗೆಸಿ, ಕೆರೆಗಳ ದುರಸ್ತಿ ಮಾಡಲಾಗುತ್ತಿದ್ದು, ಈ ಭಾಗದಲ್ಲಿ ಈಗಾಗಲೇ ಸುಮಾರು ೧೦೦ ಕೆರೆಗಳ ದುರಸ್ತಿ ಮಾಡಲಾಗಿದೆ. ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪನೆ, ಸಮುದಾಯ ಭವನ, ಗುರುಭವನ, ದೇವಸ್ಥಾನಗಳ ಜೀರ್ಣೋದ್ಧಾರ, ಕಡು ಬಡವರಿಗೆ ಮನೆ ನಿರ್ಮಾಣ ಹಾಗೂ ಅಂಗವಿಕಲರಿಗೆ ಮಾಸಾಶನ ಮತ್ತು ಸಲಕರಣೆಗಳನ್ನು ನೀಡಲಾಗುತ್ತಿದೆ. ಸರ್ಕಾರಿ ಶಾಲೆಗಳಿಗೆ ಪೀಠೋಪಕರಣ, ಅವಶ್ಯವಿರುವ ಶಾಲೆಗಳಿಗೆ ಗೌರವಧನ ನೀಡಿ ಶಿಕ್ಷಕರ ನೇಮಕ, ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ಸೇರಿದಂತೆ ಹಲವಾರು ಯೋಜನೆಗಳನ್ನು ರೂಪಿಸಲಾಗಿದೆ ಎಂದು ತಿಳಿಸಿದರು.
ಗ್ರಾಮೀಣ ಭಾಗದ ಶಾಲೆಗಳಲ್ಲಿ ಕ್ರೀಡಾಂಗಣ, ರಂಗಮಂಟಪ, ಕಂಪ್ಯೂಟರ್ ತರಬೇತಿ ಕೇಂದ್ರ, ಶೌಚಗೃಹ, ವಿದ್ಯುತ್ ದೀಪ ಅಳವಡಿಕೆ ಸೇರಿದಂತೆ ವೃತ್ತಿಪರ ಶಿಕ್ಷಣ, ತಾಂತ್ರಿಕ ಶಿಕ್ಷಣ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ
ಪ್ರಗತಿಪರ ಕೃಷಿಕ ಬೆಕ್ಕ ರಾಘವೇಂದ್ರ ಮಾತನಾಡಿ, ರ‍್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಗ್ರಾಮಗಳ ಮೂಲಭೂತ ಸೌಕರ್ಯಗಳಿಗೆ ಹಲವಾರು ಯೋಜನೆಗಳನ್ನು ತಂದು ಜನಪರ ಕಾರ್ಯಕ್ರಮಗಳನ್ನು ರೂಪಿಸುತ್ತಿರುವುದು ಶ್ಲಾಘನೀಯ, ಸರ್ಕಾರ ಮಾಡುವ ಕೆಲಸವನ್ನು ಪೂಜ್ಯ ಶ್ರೀಗಳು ಕಾರ್ಯರೂಪಕ್ಕೆ ತರುತ್ತಿದ್ದಾರೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಶ್ರವಣಬೆಳಗೊಳ ವ್ಯಾಪ್ತಿಯ ೧೩೨ ವಿದ್ಯಾರ್ಥಿಗಳಿಗೆ ಸುಜ್ಞಾನ ಶಿಷ್ಯವೇತನ ಯೋಜನೆ ಅಡಿಯಲ್ಲಿ ಮಂಜೂರಾತಿ ಪಾತ್ರ ನೀಡಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷ ಜಯರಾಮ್ ತೋಟಿ, ಸದಸ್ಯೆ ಶಾಲಿನಿ ದೇವೇಂದ್ರಕುಮಾರ್, ಕನ್ನಡ ಸಾಹಿತ್ಯ ಪರಿಷತ್ ಹೋಬಳಿ ಘಟಕದ ಅಧ್ಯಕ್ಷ ನಾಗೇಂದ್ರ ರಾಯ, ಯೋಜನಾಧಿಕಾರಿ ಸದಾಶಿವ ಕುಲಾಲ್ ಹಾಗೂ ವಿದ್ಯಾರ್ಥಿ ಮತ್ತು ಪೋಷಕರು ಉಪಸ್ಥಿತರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


