ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವ ರೋಗಿಗಳಿಗೆ ಗುಣಮಟ್ಟದ ಡಯಾಲಿಸಿಸ್ ಸೇವೆ ಒದಗಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಮಹತ್ವದ ಯೋಜನೆ ರೂಪಿಸುತ್ತಿದೆ. ರೋಗಿಗಳಿಗೆ ಮನೆಬಾಗಿಲಲ್ಲೇ ಡಯಾಲಿಸಿಸ್ ಸೇವೆ ಲಭ್ಯವಾಗುವಂತೆ ಮಾಡುವ ಉದ್ದೇಶದಿಂದ ಸೇವೆಗಳ ನಿರ್ವಹಣೆ ಮತ್ತು ಅನುಷ್ಠಾನಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ. ಆರೋಗ್ಯ ಸೇವೆಗಳ ಲಭ್ಯತೆಯನ್ನು ಹೆಚ್ಚಿಸಿ, ರೋಗಿಗಳಿಗೆ ಉತ್ತಮ ಚಿಕಿತ್ಸೆ ಒದಗಿಸುವುದು ಸರ್ಕಾರದ ಗುರಿಯಾಗಿದೆ.
ರಾಜ್ಯದಲ್ಲಿ 750 ನೂತನ ಆ್ಯಂಬುಲೆನ್ಸ್ಗಳನ್ನು ಲೋಕಾರ್ಪಣೆ ಮಾಡಲು ಆರೋಗ್ಯ ಇಲಾಖೆ ಸಿದ್ಧತೆ ನಡೆಸಿದೆ. ಈ ಕುರಿತು ಆರೋಗ್ಯ ಸಚಿವ ಯು.ಟಿ. ಖಾದರ್ ಮಾಹಿತಿ ನೀಡಿದ್ದು, ಗ್ರಾಮೀಣ ಪ್ರದೇಶಗಳಿಗೆ ಕೇವಲ 20 ನಿಮಿಷಗಳಲ್ಲಿ ಆ್ಯಂಬುಲೆನ್ಸ್ ತಲುಪುವ ಗುರಿ ಹೊಂದಲಾಗಿದೆ ಎಂದು ತಿಳಿಸಿದ್ದಾರೆ. ನಿಗದಿತ ಸಮಯದಲ್ಲಿ ಆ್ಯಂಬುಲೆನ್ಸ್ ತಲುಪದಿದ್ದರೆ 3,000 ರೂ. ದಂಡ ವಿಧಿಸುವ ಯೋಜನೆಯೂ ಇದೆ ಎಂದು ಅವರು ಹೇಳಿದ್ದಾರೆ.
ಇದಲ್ಲದೆ, ಪ್ರತಿ ತಾಲೂಕು ಆಸ್ಪತ್ರೆಯಲ್ಲೂ ಐದು ಐಸಿಯು ಹಾಸಿಗೆಗಳನ್ನು ನಿರ್ಮಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಹೊಸ ಆಸ್ಪತ್ರೆಗಳನ್ನು ಹೆಚ್ಚಿಸುವುದಕ್ಕಿಂತ ಈಗಿರುವ ಆಸ್ಪತ್ರೆಗಳಲ್ಲೇ ಗುಣಮಟ್ಟದ ವೈದ್ಯಕೀಯ ಸೇವೆ ಒದಗಿಸುವುದಕ್ಕೆ ಸರ್ಕಾರ ಆದ್ಯತೆ ನೀಡಲಿದೆ ಎಂದು ಸಚಿವರು ತಿಳಿಸಿದ್ದಾರೆ.
ಮಹಿಳೆಯರ ಆರೋಗ್ಯಕ್ಕೆ ಹೆಚ್ಚಿನ ಆದ್ಯತೆ ನೀಡುವ ಉದ್ದೇಶದಿಂದ ರಾಜ್ಯದಲ್ಲಿ ಮಹಿಳಾ ಆರೋಗ್ಯ ನೀತಿಯನ್ನು ಶೀಘ್ರದಲ್ಲೇ ಜಾರಿಗೆ ತರಲಾಗುವುದು ಎಂದು ಯು.ಟಿ. ಖಾದರ್ ಹೇಳಿದ್ದಾರೆ. ಮಹಿಳೆಯರ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸುವುದು ಅಗತ್ಯ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಕ್ಯಾನ್ಸರ್ ಔಷಧಿಗಳನ್ನು ಕಡಿಮೆ ದರದಲ್ಲಿ ಲಭ್ಯವಾಗುವಂತೆ ಮಾಡುವಲ್ಲಿ ಮಾಧ್ಯಮಗಳ ಸಹಕಾರ ಮಹತ್ವದ್ದಾಗಿದೆ ಎಂದು ತಿಳಿಸಿದ ಸಚಿವರು, ಜನಸಾಮಾನ್ಯರಿಗೆ ಕೈಗೆಟುಕುವ ದರದಲ್ಲಿ ಔಷಧಿಗಳು ದೊರೆಯುವಂತೆ ಕೇಂದ್ರ ಸರ್ಕಾರವೂ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಹೆಚ್ಚಿನ ಬೆಲೆಯ ಔಷಧಿಗಳ ದರ ನಿಯಂತ್ರಣಕ್ಕೆ ಕೇಂದ್ರ ಆರೋಗ್ಯ ಇಲಾಖೆ ಗಮನಹರಿಸಬೇಕು. ಪ್ರತಿಯೊಂದು ವಿಚಾರದಲ್ಲೂ ಸುಪ್ರೀಂ ಕೋರ್ಟ್ ಮಧ್ಯಪ್ರವೇಶಿಸುವ ಪರಿಸ್ಥಿತಿ ಏಕೆ ಎದುರಾಗಬೇಕು ಎಂಬ ಪ್ರಶ್ನೆಯನ್ನೂ ಅವರು ಎತ್ತಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
