ತುಮಕೂರು: ಕಂದಾಯ ಇಲಾಖೆ ವ್ಯಾಪ್ತಿಗೆ ಬರುವ ಸಾಗುವಳಿ ಚಿಟಿ, ಬಗರ್ ಹುಕುಂ, ಆಧಾರ್ ಸೀಡಿಂಗ್, ಪಿಂಚಣಿ, ಸೇರಿದಂತೆ ವಿವಿಧ ಸೌಲಭ್ಯಕ್ಕಾಗಿ ಸಾರ್ವಜನಿಕರು ಸಲ್ಲಿಸಿರುವ ಅರ್ಜಿಗಳನ್ನು ಶೀಘ್ರವಾಗಿ ವಿಲೇವಾರಿ ಮಾಡುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿ ಕೇಸ್ವಾನ್ ಸಭಾಂಗಣದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸೋಮವಾರ ಸಭೆ ನಡೆಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಜನಸ್ನೇಹಿ ಆಡಳಿತವನ್ನು ಬಲ ಪಡಿಸುವ ನಿಟ್ಟಿನಲ್ಲಿ ಸಾರ್ವಜನಿಕರಿಂದ ಸ್ವೀಕೃತವಾದ ಅರ್ಜಿಗಳನ್ನು ವಿಳಂಬ ಮಾಡದೆ ನಿಗದಿತ ಅವಧಿಯೊಳಗೆ ವಿಲೇವಾರಿ ಮಾಡುವಂತೆ ಸೂಚನೆ ನೀಡಿದರು.
ಜಿಲ್ಲೆಯು ಆಧಾರ್ ಸೀಡಿಂಗ್‌ನಲ್ಲಿ ಶೇಕಡಾ 85.9 ಗುರಿ ಸಾಧಿಸಿದ್ದು, ಬಾಕಿ ಇರುವ ಆಧಾರ್ ಸೀಡಿಂಗ್ ಅರ್ಜಿಗಳನ್ನು ವಿಲೇವಾರಿ ಮಾಡಬೇಕು. ಬಗರ್ ಹುಕುಂ ಸಂಬಂಧಿಸಿದಂತೆ 496, ಸಕಾಲಕ್ಕೆ ಸಂಬಂಧಿಸಿದಂತೆ 281, ಪಿಂಚಣಿ 1284, ಆರ್ ಟಿಸಿ ತಿದ್ದುಪಡಿ 2932 ಅರ್ಜಿಗಳು ಬಾಕಿ ಇದ್ದು ಕಾನೂನು ತೊಡಕಿಲ್ಲದ ಅರ್ಜಿಗಳನ್ನು ವಿಳಂಬ ಮಾಡದೆ ವಿಲೇವಾರಿ ಮಾಡುವಂತೆ ತಿಳಿಸಿದರು.
ಸಾಗುವಳಿ ಮಾಡುತ್ತಿರುವ ದುರಸ್ತಿಯಾಗದ ಸರ್ಕಾರಿ ಭೂಮಿ(ನಮೂನೆ 1–5)ಗೆ ಸಂಬಂಧಿಸಿದಂತೆ ಕಂದಾಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪ್ರತಿ ದಿನ ಸುಮಾರು 10 ಗ್ರಾಮಗಳ ಸರ್ವೇ ಕಾರ್ಯವನ್ನು ಕೈಗೊಳ್ಳಬೇಕು. ಉಪವಿಭಾಗಾಧಿಕಾರಿಗಳ ಸಿಬ್ಬಂದಿ ವರ್ಗ ಗ್ರಾಮವಾರು/ಹೋಬಳಿವಾರು ಭೇಟಿ ನೀಡಿ ಪರಿಶೀಲಿಸಿ, ವರದಿ ಸಲ್ಲಿಸಬೇಕು ಎಂದು ಎಲ್ಲಾ ಉಪವಿಭಾಗಾಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಪಿಂಚಣಿ ಅದಾಲತ್ ಆಂದೋಲನಕ್ಕೆ ಸೂಚನೆ :
ಮುಂದಿನ ವಾರದಿಂದ ಜಿಲ್ಲೆಯ ಪ್ರತಿ ಗ್ರಾಮ ಪಂಚಾಯತಿಯಲ್ಲಿ ಪಿಂಚಣಿ ಅದಾಲತ್ ಆಂದೋಲನ ಹಮ್ಮಿಕೊಳ್ಳಬೇಕು. ಅದಾಲತ್ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಆಟೋ ಪ್ರಚಾರಕ್ಕೆ ಕ್ರಮ ಕೈಗೊಳ್ಳಬೇಕು. ಗ್ರಾಮ ಪಂಚಾಯಿತಿಗಳ ಪ್ರತಿ ಮನೆಗೂ ಭೇಟಿ ನೀಡಿ ಪಿಂಚಣಿ ಸೌಲಭ್ಯದಿಂದ ವಂಚಿತರಾದ ಫಲಾನುಭವಿಗಳಿದ್ದಲ್ಲಿ ಪತ್ತೆ ಹಚ್ಚಿ ಅರ್ಹ ಫಲಾನುಭವಿಗಳಿಗೆ ಸೌಲಭ್ಯ ಒದಗಿಸಬೇಕೆಂದು ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ :-
ಭಾರತೀಯ ಹವಾಮಾನ ಇಲಾಖೆ ವರದಿಯಂತೆ ಜಿಲ್ಲೆಯಲ್ಲಿ ಮುಂದಿನ 5 ದಿನಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಆರೆಂಜ್ ಮತ್ತು ಯೆಲ್ಲೊ ಅಲರ್ಟ್ ಘೋಷಿಸಲಾಗಿದ್ದು, ತುರ್ತು ಸಂದರ್ಭದಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಅವರು ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಮಳೆಯಿಂದ ಯಾವುದೇ ಜನ, ಜಾನುವಾರುಗಳಿಗೆ ಜೀವ ಹಾನಿಯಾಗದಂತೆ ನದಿ, ಹಳ್ಳ ಕೆರೆ ದಡಗಳಲ್ಲಿ ಬಟ್ಟೆ ತೊಳೆಯುವುದು, ಈಜಾಡುವುದು, ದನ, ಕರುಗಳನ್ನು ಮೇಯಿಸುವುದು ಹಾಗೂ ಅಪಾಯವಿರುವ ಸೇತುವೆಗಳ ಮೇಲೆ ಸಂಚರಿಸುವುದು ಮತ್ತು ಇತರೆ ಚಟುವಟಿಕೆ ನಡೆಸದಂತೆ ಕ್ರಮ ವಹಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ನದಿ ದಡಗಳಲ್ಲಿ ಅಪಾಯವಿರುವ ಸೇತುವೆಗಳಲ್ಲಿ ಫೋಟೋ, ಸೆಲ್ಪಿಗಳನ್ನು ತೆಗೆಯದಂತೆ ಯುವಕ, ಯುವತಿಯರಿಗೆ ಮತ್ತು ಸಾರ್ವಜನಿಕರಿಗೆ ತಿಳಿ ಹೇಳಬೇಕು. ಭಾರಿ ಮಳೆ ಪ್ರವಾಹದಿಂದ ಯಾವುದೇ ಅಹಿತಕರ ಘಟನೆಯಾಗದಂತೆ ಪ್ರತಿ ಗ್ರಾಮಗಳಲ್ಲಿ ಡಂಗೂರ ಸಾರಬೇಕು ಹಾಗೂ ಧ್ವನಿ ವರ್ಧಕದ ಮೂಲಕ ಜಾಗೃತಿ ಮೂಡಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.
ನಿರಂತರ ಮಳೆಯಿಂದ ಅಪಾಯವಿರುವ ಮನೆ, ಗೋಡೆ ಇತರೆ ಕಟ್ಟಡಗಳು ಕುಸಿದು ಸಾವು– ನೋವುಗಳು ಸಂಭವಿಸುವುದರಿಂದ ಸಾರ್ವಜನಿಕರು ಸುರಕ್ಷಿತ ಸ್ಥಳಗಳಲ್ಲಿರುವಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ರಾಜ್ಯ, ಜಿಲ್ಲಾಡಳಿತ, ತಾಲೂಕು ಆಡಳಿತದಿಂದ ನೀಡುವ ಹವಾಮಾನದ ಮುನ್ನೆಚ್ಚರಿಕೆಯನ್ನು ಪ್ರತಿ ಗ್ರಾಮ ಪಂಚಾಯತಿ ಮಟ್ಟದಲ್ಲಿ ವಿಪತ್ತು ನಿರ್ವಹಣಾ ಸಮಿತಿಗಳು ನೀಡುವ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಹೆಚ್ಚು ಪ್ರಚಾರ ಕೈಗೊಂಡು ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು ಎಂದು ನಿರ್ದೇಶಿಸಿದರು.
ಕೆರೆ–ಕಟ್ಟೆ, ಏರಿ, ಬಂಡು, ಕೋಡಿಗಳಲ್ಲಿ ನೀರು ಸೋರಿಕೆ ಕಂಡು ಬಂದಲ್ಲಿ, ರಸ್ತೆಗಳ ಮೇಲೆ ಅಪಾಯಕಾರಿ ಮಟ್ಟದಲ್ಲಿ ನೀರು ಹರಿಯುತ್ತಿದ್ದಲ್ಲಿ/ ನಿಂತಿದ್ದಲ್ಲಿ ಮರಬಿದ್ದು ವಾಹನ ಸಂಚಾರ ಸ್ಥಗಿತವಾಗಿದ್ದಲ್ಲಿ, ವಿದ್ಯುತ್ ಮಾರ್ಗ/ಕಂಬ ಬಿದ್ದಿದ್ದಲ್ಲಿ ಮನೆಯೊಳಗೆ ನೀರು ನುಗ್ಗಿದರೆ. ಮನೆಗೋಡೆ/ ಮೇಲ್ಚಾವಣಿ ಬಿದ್ದರೆ, ಬೆಳೆ ನಷ್ಟ ಮತ್ತಿತರ ತುರ್ತು ಪರಿಸ್ಥಿತಿಯಲ್ಲಿ ಸಹಾಯವಾಣಿ ಸಂಖ್ಯೆ: 7304975519 ಅಥವಾ ದೂರವಾಣಿ ಸಂಖ್ಯೆ : 0816-2213400, 0816-155304 ಅಥವಾ ವಾಟ್ಸಪ್ ಸಂಖ್ಯೆ: 7304975519ನ್ನು ಸಂಪರ್ಕಿಸಬೇಕೆಂದು ಸಾರ್ವಜನಿಕರಿಗೆ ಮಾಹಿತಿ ನೀಡಬೇಕೆಂದು ಸೂಚಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ಎನ್. ತಿಪ್ಪೇಸ್ವಾಮಿ, ಉಪವಿಭಾಗಾಧಿಕಾರಿ ಗೌರವ್ ಕುಮಾರ್ ಶೆಟ್ಟಿ, ಚುನಾವಣೆ ತಹಶೀಲ್ದಾರ್ ರೇಷ್ಮಾ, ತಹಶೀಲ್ದಾರಗಳಾದ ರಾಜೇಶ್ವರಿ, ವರದರಾಜು, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296