ಬೆಂಗಳೂರು: ಕರ್ನಾಟಕ ವಿಧಾನಸಭೆಯ ವಿಶೇಷ ಅಧಿವೇಶನದ ವೇಳೆ ನಡೆದ ಬೆಳವಣಿಗೆಗಳನ್ನು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ತೀವ್ರವಾಗಿ ಖಂಡಿಸಿದ್ದು, ಇಂದು ಕರ್ನಾಟಕ ಶಾಸಕಾಂಗ ಇತಿಹಾಸದಲ್ಲೇ ಒಂದು ‘ಕರಾಳ ದಿನ’ ಎಂದು ಬಣ್ಣಿಸಿದ್ದಾರೆ.
ಗುರುವಾರ ಆರಂಭವಾದ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ಸರ್ಕಾರ ನೀಡಿದ ಭಾಷಣದ ಬದಲು, ಕೇವಲ ಒಂದು ವಾಕ್ಯವನ್ನು ಓದಿ ನಿರ್ಗಮಿಸಿದರು. ಈ ವೇಳೆ ಕಾಂಗ್ರೆಸ್ ಸದಸ್ಯರು ರಾಜ್ಯಪಾಲರನ್ನು ಅಡ್ಡಗಟ್ಟಿ ಅಗೌರವ ತೋರಿದ್ದಾರೆ ಎಂದು ಅಶೋಕ್ ಆರೋಪಿಸಿದ್ದಾರೆ. ಕಾಂಗ್ರೆಸ್ ನಾಯಕರ ಈ ವರ್ತನೆಯನ್ನು ‘ಗೂಂಡಾಗಿರಿ’ ಎಂದು ಕರೆದಿರುವ ಅವರು, ಇದು ಸಂವಿಧಾನಕ್ಕೆ ಮಾಡಿದ ಅವಮಾನ ಎಂದಿದ್ದಾರೆ.
ಈ ಘಟನೆಗೆ ಸಂಬಂಧಿಸಿದಂತೆ ಸ್ಪೀಕರ್ ಯು.ಟಿ. ಖಾದರ್ ಅವರಿಗೆ ಅಧಿಕೃತ ದೂರು ನೀಡಿರುವ ಅಶೋಕ್, ನಿಯಮ 27ರ ಉಲ್ಲಂಘನೆಯಡಿ ತಪ್ಪಿತಸ್ಥ ಶಾಸಕರ ವಿರುದ್ಧ ಕಠಿಣ ಶಿಸ್ತು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ರಾಜ್ಯಪಾಲರು ತಮ್ಮ ಸಾಂವಿಧಾನಿಕ ಕರ್ತವ್ಯ ನಿರ್ವಹಿಸುವಾಗ ಅಡ್ಡಿಪಡಿಸುವುದು ಸದನದ ನಿಯಮಗಳ ಗಂಭೀರ ಉಲ್ಲಂಘನೆಯಾಗಿದೆ ಎಂದು ಅವರು ದೂರಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕೂಡ ಸರ್ಕಾರದ ವಿರುದ್ಧ ಕಿಡಿಕಾರಿದ್ದು, ಕಾಂಗ್ರೆಸ್ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುತ್ತಿದೆ ಎಂದು ಟೀಕಿಸಿದ್ದಾರೆ. ಒಟ್ಟಾರೆ, ರಾಜ್ಯಪಾಲರ ಭಾಷಣದ ವಿಚಾರ ಸದನದಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ತೀವ್ರ ಸಂಘರ್ಷಕ್ಕೆ ಕಾರಣವಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


