ತುಮಕೂರು: ದೇಶದಲ್ಲಿ ನಿರುದ್ಯೋಗ ಸಮಸ್ಯೆಯನ್ನು ನಿವಾರಣೆ ಮಾಡುವ ನಿಟ್ಟಿನಲ್ಲಿ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗುತ್ತಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವರ್ಚುಯಲ್ ಉಪಸ್ಥಿತಿಯಲ್ಲಿ ರೋಜ್ ಗಾರ್ ಮೇಳದ ಮೂಲಕ ದೇಶದಾದ್ಯಂತ ಸರ್ಕಾರಿ ಹುದ್ದೆಗಳಿಗೆ ನೇಮಕಗೊಂಡ 51ಸಾವಿರ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ಪತ್ರವನ್ನು ನೀಡಲಾಗಿದೆ ಎಂದು ಕೇಂದ್ರ ಸರಕಾರದ ಜಲಶಕ್ತಿ ಹಾಗೂ ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದರು.
ಮೈಸೂರಿನ ಮಾನಸ ಗಂಗೋತ್ರಿ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯ ವಿಜ್ಞಾನ ಭವನದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಸರಕಾರಿ ಉದ್ಯೋಗಕ್ಕೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ಪತ್ರಗಳ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕರ್ನಾಟಕ ರಾಜ್ಯದ 85 ಅಭ್ಯರ್ಥಿಗಳು ಹಾಗೂ ಇತರೆ ರಾಜ್ಯದ 86 ಅಭ್ಯರ್ಥಿಗಳು ಸೇರಿದಂತೆ ಒಟ್ಟು 171 ಫಲಾನುಭವಿಗಳಿಗೆ ರೋಜ್‌ಗಾರ್ ಮೇಳದಲ್ಲಿ ನೇಮಕಾತಿ ಆದೇಶ ಪತ್ರವನ್ನು ನೀಡಲಾಗಿದೆ ಎಂದರು.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ರಾಷ್ಟ್ರದ ನಿರುದ್ಯೋಗ ಸಮಸ್ಯೆಯನ್ನು ನೀಗಿಸುವ ನಿಟ್ಟಿನಲ್ಲಿ 2022ರ ಅಕ್ಟೋಬರ್ ತಿಂಗಳಿನಲ್ಲಿ ರಾಷ್ಟ್ರೀಯ ರೋಜ್‌ಗಾರ್ ಮೇಳ(ಉದ್ಯೋಗ ಮೇಳ)ವನ್ನು ಪ್ರಾರಂಭಿಸಿ, 10ಲಕ್ಷ ಉದ್ಯೋಗ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಿದ್ದರು. ರಾಷ್ಟ್ರದ ನಿರುದ್ಯೋಗ ಸಮಸ್ಯೆಯನ್ನು ನಿವಾರಿಸುವ ನಿಟ್ಟಿನಲ್ಲಿ ಮತ್ತೊಂದು ಹೆಜ್ಜೆಯೇ ಈ ರೋಜ್ ಗಾರ್ ಮೇಳ ಎಂದು ತಿಳಿಸಿದರು.
ಸ್ವಾತಂತ್ರ‍್ಯ ಭಾರತದ 75ನೇ ವರ್ಷದ ಅಮೃತ ಕಾಲದಲ್ಲಿ 75000 ನೇಮಕಾತಿ ಆದೇಶ ಪತ್ರಗಳನ್ನು ಮೊದಲ ಹಂತದಲ್ಲಿ ಬಿಡುಗಡೆ ಮಾಡಿದ್ದು, ಮುಂದಿನ ದಿನಗಳಲ್ಲಿ ಹೆಚ್ಚಿನ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ಪತ್ರವನ್ನು ನೀಡುವ ಮೂಲಕ ನಿರುದ್ಯೋಗ ಸಮಸ್ಯೆಯನ್ನು ನಿವಾರಣೆ ಮಾಡಲಾಗುವುದು ಎಂದರು.
ಭಾರತದಲ್ಲಿ ಉದ್ಯೋಗ ಸೃಷ್ಟಿಯ ಪ್ರಮುಖ ಇಲಾಖೆಗಳಲ್ಲಿ ಒಂದಾದ ರೈಲ್ವೆ ಇಲಾಖೆಯೂ ಸಹ ಪ್ರಧಾನ ಮಂತ್ರಿಗಳ ಆಶಯದಂತೆ “ಮಿಷನ್ ಮೋಡ್ ರೆಕ್ರೂಟ್‌ಮೆಂಟ್ ಡ್ರೆöÊವ್”ನಲ್ಲಿ 2014 ರಿಂದ 2024ರ ಅವಧಿಯಲ್ಲಿ 5.02 ಲಕ್ಷ ಯುವಕ/ಯುವತಿಯರಿಗೆ ಉದ್ಯೋಗವನ್ನು ಕಲ್ಪಸಲಾಗಿದೆ. ನೇಮಕಾತಿ ಪ್ರಕ್ರಿಯೆಯಲ್ಲಿ ರೈಲ್ವೆ ಇಲಾಖೆಯು ಅತ್ಯಂತ ಪಾರದರ್ಶಕ ವ್ಯವಸ್ಥೆಯನ್ನು ಅಳವಡಿಸಿದ್ದು, ಜನರ ಪ್ರಶಂಸೆಗೆ ಪಾತ್ರವಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಮೈಸೂರು ಸಂಸದ ಯದುವೀರ್ ಕೃಷ್ಣ ದತ್ತ ಚಾಮರಾಜ ಒಡೆಯರ್, ಶಾಸಕ ಟಿ.ಎಸ್.ಶ್ರೀವತ್ಸ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q