ತುಮಕೂರು: ಜಿಲ್ಲಾಡಳಿತದ ವತಿಯಿಂದ ನವೆಂಬರ್ 1ರಂದು ಆಚರಿಸಲಾಗುತ್ತಿರುವ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡದ ಜ್ಞಾನಪೀಠ ಪುರಸ್ಕೃತರು, ಕನ್ನಡ ನಾಡು–ನುಡಿಗಾಗಿ ಹೋರಾಡಿದ ಜಿಲ್ಲೆಯ ಹೆಸರಾಂತ ಕವಿ/ಸಾಹಿತಿಗಳ ಕುರಿತು ವಿದ್ಯಾರ್ಥಿಗಳಿಗೆ ಪರಿಚಯಿಸುವ ಉದ್ದೇಶದಿಂದ ಆಯ್ದ ಶಾಲೆಗಳಲ್ಲಿ ಸಾಹಿತ್ಯವಾರ ಹಮ್ಮಿಕೊಳ್ಳುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಕನ್ನಡ ರಾಜ್ಯೋತ್ಸವ ಆಚರಣಾ ಸಮಿತಿಯ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಶಾಲೆಗಳಲ್ಲಿ ಸಾಹಿತ್ಯವಾರ ಆಚರಣೆ ಮಾಡುವುದರಿಂದ ವಿದ್ಯಾರ್ಥಿಗಳಲ್ಲಿ ಸಾಹಿತ್ಯಾಸಕ್ತಿ ಮೂಡುವುದಲ್ಲದೆ, ಕನ್ನಡ ಸಾಹಿತ್ಯ ಮತ್ತು ಕನ್ನಡ ಕವಿಗಳ ಇತಿಹಾಸದ ಪರಿಚಯವಾಗುತ್ತದೆ. ಭಾರತದ ಇತರೆ ಭಾಷೆಗಳಿಗಿಂತ ಕನ್ನಡ ಭಾಷೆ ಶ್ರೀಮಂತ ಭಾಷೆಯಾಗಿದ್ದು, ಜಿಲ್ಲೆಯಲ್ಲಿ ಕನ್ನಡ ರಾಜ್ಯೋತ್ಸವನ್ನು ಹಬ್ಬದ ರೀತಿಯಲ್ಲಿ ಆಚರಿಸಲು ಅಗತ್ಯ ಪೂರ್ವ ಸಿದ್ಧತೆಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದರು.
ರಾಜ್ಯೋತ್ಸವ ದಿನದಂದು ಕನ್ನಡ ತಾಯಿ ಶ್ರೀ ಭುವನೇಶ್ವರಿ ದೇವಿಯ ಪ್ರತಿಮೆಯನ್ನು ಅಲಂಕೃತ ಬೆಳ್ಳಿರಥದಲ್ಲಿರಿಸಿ ಸಾಂಸ್ಕೃತಿಕ ಕಲಾತಂಡಗಳು ಹಾಗೂ ವಿವಿಧ ಇಲಾಖೆಗಳ ಸ್ತಬ್ಧಚಿತ್ರದೊಂದಿಗೆ ಮೆರವಣಿಗೆ ಏರ್ಪಡಿಸಬೇಕು. ಮೆರವಣಿಗೆಯಲ್ಲಿ ಸರ್ಕಾರದ 5 ಗ್ಯಾರಂಟಿಗಳ ಜೊತೆಗೆ ಜಿಲ್ಲಾ ಪಂಚಾಯತ್, ಕೃಷಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಸಮಾಜ ಕಲ್ಯಾಣ, ಆಹಾರ, ಮೀನುಗಾರಿಕೆ, ತೋಟಗಾರಿಕೆ, ಹಿಂದುಳಿದ ವರ್ಗಗಳ ಕಲ್ಯಾಣ, ಶಿಕ್ಷಣ, ಪಶುವೈದ್ಯಕೀಯ, ರೇಷ್ಮೆ ಇಲಾಖೆಗಳ ಪ್ರಸ್ತುತ ಯೋಜನೆಗಳು ಮತ್ತು ಸಾಧನೆಗಳ ಮಾಹಿತಿಯುಳ್ಳ ಉತ್ತಮ ಸ್ತಬ್ಧಚಿತ್ರಗಳನ್ನು ಸೃಜನಾತ್ಮಕವಾಗಿ ರೂಪಿಸಬೇಕು ಎಂದು ನಿರ್ದೇಶಿಸಿದರು.
ಮೆರವಣಿಗೆಯಲ್ಲಿ ಕಡ್ಡಾಯವಾಗಿ ಎಲ್ಲಾ ಇಲಾಖಾಧಿಕಾರಿಗಳು, ಶಾಲಾ–ಕಾಲೇಜು ವಿದ್ಯಾರ್ಥಿಗಳು ಪಾಲ್ಗೊಳ್ಳಬೇಕು. ನಾಡಿನ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕವಿಗಳು ಹಾಗೂ ಜಿಲ್ಲೆಯ ಹೆಸರಾಂತ ಸಾಹಿತಿ ಹಾಗೂ ಕವಿಗಳ ಭಾವಚಿತ್ರದೊಂದಿಗೆ ಸಮಾಜಮುಖಿ ಚಿಂತನೆಯುಳ್ಳ ಅವರ ಬರಹದ ಸಾಲುಗಳ ಘೋಷ ವಾಕ್ಯಗಳ ಫಲಕಗಳನ್ನು ವಿದ್ಯಾರ್ಥಿಗಳು ಪ್ರದರ್ಶಿಸುವಂತೆ ಕ್ರಮ ಕೈಗೊಳ್ಳಬೇಕು. ಇದರಿಂದ ವಿದ್ಯಾರ್ಥಿಗಳಿಗೂ ಕನ್ನಡ ನಾಡು-ನುಡಿಗೆ ಸೇವೆ ಸಲ್ಲಿಸಿದವರ ಪರಿಚಯ ಮಾಡಿದಂತಾಗುತ್ತದೆ ಎಂದು ತಿಳಿಸಿದರು.
ಮೆರವಣಿಗೆಯಲ್ಲಿ ಭಾಗವಹಿಸುವ ಅಧಿಕಾರಿಗಳು, ವಿದ್ಯಾರ್ಥಿಗಳು, ಸ್ತಬ್ಧಚಿತ್ರಗಳು ನವೆಂಬರ್ 1ರ ಬೆಳಿಗ್ಗೆ 7:30 ಗಂಟೆಗೆ ಟೌನ್‌ಹಾಲ್ ವೃತ್ತದ ಬಳಿ ಹಾಜರಿರಬೇಕು. ಮೆರವಣಿಗೆಯು ಟೌನ್‌ಹಾಲ್ ವೃತ್ತದ ಮುಂಭಾಗದಿಂದ ಪ್ರಾರಂಭಗೊಂಡು ಮಹಾತ್ಮಗಾಂಧಿ ಕ್ರೀಡಾಂಗಣಕ್ಕೆ ತಲುಪಲಿದೆ ಎಂದು ತಿಳಿಸಿದರು.
ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಬೆಳಿಗ್ಗೆ 9 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನೆರವೇರಿಸಿ ಗೌರವರಕ್ಷೆ ಸ್ವೀಕರಿಸಲಿದ್ದಾರೆ. ಧ್ವಜಸ್ತಂಭ, ಗೌರವರಕ್ಷೆ ಸ್ವೀಕಾರ ಸೇರಿದಂತೆ ಕಾರ್ಯಕ್ರಮ ನಡೆಸಲು ಅಗತ್ಯ ವೇದಿಕೆ, ಗಣ್ಯರಿಗೆ ಆಸನ ವ್ಯವಸ್ಥೆ, ಅಲಂಕಾರಿಕ ಹೂಕುಂಡಗಳ ವ್ಯವಸ್ಥೆ, ನಾಡಗೀತೆಯ ಗಾಯನದ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಮಾಡಬೇಕೆಂದು ಸಂಬಂಧಪಟ್ಟ ಇಲಾಖಾಧಿಕಾರಿಗಳಿಗೆ ಸೂಚಿಸಿದರು.
ಧ್ವಜಾರೋಹಣದ ನಂತರ ಸಾಂಸ್ಕೃತಿಕ ಕಾರ್ಯಕ್ರಮ ನೀಡಲು ಮಕ್ಕಳ ತಂಡಗಳನ್ನು ಸಿದ್ಧಪಡಿಸಿಕೊಂಡು ತಾಲೀಮು ನಡೆಸಲು ಹಾಗೂ ಕಾರ್ಯಕ್ರಮವನ್ನು ಸಂಘಟಿಸಲು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ಸೂಚಿಸಿದರು.
ಜಿಲ್ಲಾಡಳಿತದ ವತಿಯಿಂದ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಮಾಡಿದ ಸಾಧಕರನ್ನು ಗುರುತಿಸಿ ಸನ್ಮಾನಿಸಲು ಅಧಿಕಾರಿಗಳು/ ವಿವಿಧ ಕ್ಷೇತ್ರಗಳ ಗಣ್ಯರನ್ನೊಳಗೊಂಡ ಸಮಿತಿಯ ಮೂಲಕ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಸಾಧಕರನ್ನು ಆಯ್ಕೆ ಮಾಡಿ, ಪಟ್ಟಿ ಸಿದ್ಧಪಡಿಸಿ ಜಿಲ್ಲಾಡಳಿತಕ್ಕೆ ಸಲ್ಲಿಸಬೇಕೆಂದು ನಿರ್ದೇಶಿಸಿದರು.
ಸಂಜೆಯ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಶಾಲಾ ಮಕ್ಕಳಿಂದ ಕನ್ನಡ ಭಾಷೆಯ ಹಿರಿಮೆ–ಗರಿಮೆಗಳನ್ನು ಸಾರುವಂತಹ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು/ ಅಧೀನ ಅಧಿಕಾರಿಗಳು/ಸಿಬ್ಬಂದಿಗಳು ತಪ್ಪದೇ ಹಾಜರಾಗಲು ಸೂಚಿಸಿದರು.
ಸಭೆಯಲ್ಲಿ ಉಪ ವಿಭಾಗಾಧಿಕಾರಿ ಗೌರವ್ ಕುಮಾರ್ ಶೆಟ್ಟಿ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಮನಮೋಹನ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಬಾಲಗುರುಮೂರ್ತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾರ್ಯಕ್ರಮ ನಿರೂಪಣಾಧಿಕಾರಿ ದಿನೇಶ್, ಕೃಷಿ ಇಲಾಖೆ ಜಂಟಿ ನಿರ್ದೇಶಕ ರಮೇಶ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಅಂಜಿನಪ್ಪ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಜಂಟಿ ನಿರ್ದೇಶಕ ಮಂಟೇಸ್ವಾಮಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಸೋನಿಯಾ ವರ್ಣೇಕರ್, ಮುಜರಾಯಿ ಇಲಾಖೆ ತಹಶೀಲ್ದಾರ್ ಸವಿತಾ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರೋಹಿತ್ ಗಂಗಾಧರ್, ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q