ತುಮಕೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಕೃಷಿ ಇಲಾಖೆಯ ಸಹಯೋಗದಲ್ಲಿ ಜನವರಿ 13 ಮತ್ತು 14ರಂದು ನಗರದ ಬಿ.ಹೆಚ್.ರಸ್ತೆಯಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ “ಜಿಲ್ಲಾ ಮಟ್ಟದ ಸಿರಿಧಾನ್ಯ ಹಬ್ಬ ಹಾಗೂ ಸಿರಿಧಾನ್ಯ ಉತ್ಪಾದಕರು ಮತ್ತು ಮಾರುಕಟ್ಟೆದಾರರ ರಾಜ್ಯ ಮಟ್ಟದ ಕಾರ್ಯಾಗಾರ”ವನ್ನು ಆಯೋಜಿಸಲಾಗಿದೆ.
ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಖಾತೆ ರಾಜ್ಯ ಸಚಿವ ಹಾಗೂ ಸಂಸದ ವಿ.ಸೋಮಣ್ಣ ಅವರ ಘನ ಉಪಸ್ಥಿತಿಯಲ್ಲಿ ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ಸಿರಿಧಾನ್ಯ ಹಬ್ಬವನ್ನು ಉದ್ಘಾಟಿಸುವರು. ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ವಸ್ತುಪ್ರದರ್ಶನ ಉದ್ಘಾಟಿಸುವರು. ಸಹಕಾರ ಸಚಿವ ಕೆ.ಎನ್.ರಾಜಣ್ಣ ಸಿರಿಧಾನ್ಯಗಳ ರಾಶಿ ಉದ್ಘಾಟಿಸುವರು.
ಮರುದಿನ ಜನವರಿ 14ರಂದು ಬೆಳಿಗ್ಗೆ 11 ಗಂಟೆಗೆ ಸಿರಿಧಾನ್ಯಗಳ ಸಂಸ್ಕರಣೆ, ಮೌಲ್ಯವರ್ಧನೆ ಹಾಗೂ ಮಾರುಕಟ್ಟೆ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ನಡೆಯಲಿದೆ.
ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಚುನಾಯಿತ ಪ್ರತಿನಿಧಿಗಳು, ಗಣ್ಯರು, ಅಧಿಕಾರಿಗಳು ಸೇರಿದಂತೆ ಮತ್ತಿತರರು ಭಾಗವಹಿಸುವರು.
ಸಾರ್ವಜನಿಕರು ಸಿರಿಧಾನ್ಯ ಹಬ್ಬದಲ್ಲಿ ಪಾಲ್ಗೊಂಡು ಉತ್ಪನ್ನಗಳನ್ನು ಖರೀದಿಸಿ ಉಪಯೋಗಿಸುವುದರ ಮೂಲಕ ತಮ್ಮ ಆರೋಗ್ಯ ವೃದ್ಧಿಯ ಜೊತೆಗೆ ಸಿರಿಧಾನ್ಯ ಉತ್ಪಾದಕರು ಮತ್ತು ಸಿರಿಧಾನ್ಯ ಉತ್ಪನ್ನಗಳ ಉದ್ದಿಮೆದಾರರಿಗೆ ಪ್ರೋತ್ಸಾಹ ನೀಡಬೇಕು. ಜಿಲ್ಲೆಯ ರೈತರು, ಸಾರ್ವಜನಿಕರು ಹಾಗೂ ಶಾಲಾ ಮಕ್ಕಳು/ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸಿರಿಧಾನ್ಯ ಹಬ್ಬ ಕಾರ್ಯಕ್ರಮದಲ್ಲಿ ಭಾಗವಹಿಸಿ ಇದರ ಸದುಪಯೋಗಪಡೆದುಕೊಳ್ಳಲು ಜಂಟಿ ಕೃಷಿ ನಿರ್ದೇಶಕ ರಮೇಶ್ ಮನವಿ ಮಾಡಿದ್ದಾರೆ.
ಸಿರಿಧಾನ್ಯ ಹಬ್ಬದಲ್ಲಿ ಪಾಲ್ಗೊಳ್ಳಲು ಮನವಿ:
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಕೃಷಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಜನವರಿ 13 ಮತ್ತು 14ರಂದು ತುಮಕೂರು ನಗರದ ಬಿ.ಹೆಚ್ ರಸ್ತೆಯಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ 2 ದಿನಗಳ ಕಾಲ ಆಯೋಜಿಸಲಾಗಿರುವ “ಜಿಲ್ಲಾ ಮಟ್ಟದ ಸಿರಿಧಾನ್ಯ ಹಬ್ಬ ಹಾಗೂ ಸಿರಿಧಾನ್ಯ ಉತ್ಪಾದಕರು ಮತ್ತು ಮಾರುಕಟ್ಟೆದಾರರ ರಾಜ್ಯ ಮಟ್ಟದ ಕಾರ್ಯಗಾರ” ದಲ್ಲಿ ಪಾವಗಡ ತಾಲ್ಲೂಕಿನ ಎಲ್ಲಾ ನೋಂದಾಯಿತ ಸ್ವಸಹಾಯ ಗುಂಪು, ರೈತ ಉತ್ಪಾದಕ ಸಂಸ್ಥೆ, ಖಾಸಗಿ ಉದ್ದಿಮೆದಾರರು, ಆಹಾರ ಘಟಕಗಳ ಉದ್ದಿಮೆಯಲ್ಲಿ ಕಾರ್ಯನಿರತರಾದವರು, ರೈತ ಬಾಂಧವರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಸಹಾಯಕ ಕೃಷಿ ನಿರ್ದೇಶಕ ಅಜಯ್ ಕುಮಾರ್ ಆರ್. ಮನವಿ ಮಾಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx