ಚಿಕ್ಕನಾಯಕನಹಳ್ಳಿ: ವೈದ್ಯರು ಸಮಯಕ್ಕೆ ಸರಿಯಾಗಿ ಕರ್ತವ್ಯಕ್ಕೆ ಹಾಜರಾಗಿ, ಆಸ್ಪತ್ರೆಗೆ ಬರುವ ರೋಗಿಗಳೊಂದಿಗೆ ಸೌಜನ್ಯದಿಂದ ವರ್ತಿಸಬೇಕು. ರೋಗಿಗಳಿಗೆ ತುರ್ತು ಸಂದರ್ಭದಲ್ಲಿ ಅಗತ್ಯ ಚಿಕಿತ್ಸೆ ನೀಡುವುದೇ ವೈದ್ಯರ ಮೊದಲ ಆದ್ಯತೆಯಾಗಬೇಕು. ಅದರಲ್ಲೂ ಗಡಿ ಭಾಗದ ಆಸ್ಪತ್ರೆಗಳಲ್ಲಿ ಯಾವುದೇ ತೊಂದರೆಯಾಗದಂತೆ ವೈದ್ಯರು ಸಮರ್ಪಕವಾಗಿ ಸೇವೆ ಸಲ್ಲಿಸಬೇಕು ಎಂದು ಶಾಸಕ ಸಿ.ಬಿ. ಸುರೇಶ್ ಬಾಬು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದ ಆರೋಗ್ಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಗಣಿಬಾಧಿತ ಪ್ರದೇಶ ಅಭಿವೃದ್ಧಿ ಅನುದಾನದಡಿ ತಾಲೂಕಿನ ಆಸ್ಪತ್ರೆಗಳಿಗೆ ಅಗತ್ಯವಿರುವ ಕಟ್ಟಡ ನಿರ್ಮಾಣ ಹಾಗೂ ವೈದ್ಯಕೀಯ ಉಪಕರಣಗಳ ಖರೀದಿಗಾಗಿ ₹16 ಕೋಟಿ ಅನುದಾನದ ಕ್ರಿಯಾಯೋಜನೆ ರೂಪಿಸಿ ಮಂಜೂರಾತಿಗೆ ಕಳುಹಿಸಲಾಗಿದೆ. ಆಸ್ಪತ್ರೆಗಳಿಗೆ ಅಗತ್ಯವಿರುವ ಆಂಬುಲೆನ್ಸ್ ಹಾಗೂ ಮೊಬೈಲ್ ತುರ್ತು ಚಿಕಿತ್ಸಾ ವಾಹನಗಳ ಕುರಿತು ವೈದ್ಯಾಧಿಕಾರಿಗಳು ಕ್ರಿಯಾಯೋಜನೆ ಸಲ್ಲಿಸಿದರೆ ಮಂಜೂರಾತಿಗೆ ಕ್ರಮ ಕೈಗೊಳ್ಳಲಾಗುವುದು ಎಂದರು.
ಸುಮಾರು 15 ವರ್ಷಗಳ ಹಿಂದೆಯೇ ತುರುವೇಕೆರೆ, ಚಿಕ್ಕನಾಯಕನಹಳ್ಳಿ ಹಾಗೂ ತಿಪಟೂರು ತಾಲೂಕುಗಳ ಜನರಿಗೆ ಅನುಕೂಲವಾಗುವಂತೆ ಕೆ.ಬಿ. ಕ್ರಾಸ್ ಬಳಿ 50 ಎಕರೆ ಪ್ರದೇಶದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸುವ ಪ್ರಸ್ತಾವನೆ ರೂಪಿಸಲಾಗಿತ್ತು. ಮೈಸೂರು, ಚಿತ್ರದುರ್ಗ, ಶಿವಮೊಗ್ಗ ಹಾಗೂ ಬೆಂಗಳೂರು ಭಾಗಗಳ ಜನರಿಗೆ ಅನುಕೂಲವಾಗುವ ಉದ್ದೇಶದಿಂದ ಈ ಯೋಜನೆ ಸಿದ್ಧಪಡಿಸಲಾಗಿತ್ತು. ಆದರೆ ಅದು ಕಾರ್ಯರೂಪಕ್ಕೆ ಬರಲಿಲ್ಲ. ಇದೀಗ ಗಣಿಬಾಧಿತ ಪ್ರದೇಶಗಳಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸುವುದು ನಮ್ಮ ಆದ್ಯತೆಯಾಗಿದೆ ಎಂದು ತಿಳಿಸಿದರು.
ವೈದ್ಯರು ಉತ್ತಮ ಚಿಕಿತ್ಸೆ ನೀಡುವುದರ ಜತೆಗೆ ಆಸ್ಪತ್ರೆಗಳ ಸ್ವಚ್ಛತೆಗೂ ಹೆಚ್ಚಿನ ಗಮನಹರಿಸಬೇಕು. ಆಯಾ ಗ್ರಾಮ ಪಂಚಾಯಿತಿ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿ ಅಧಿಕಾರಿಗಳು ವಾರಕ್ಕೊಮ್ಮೆ ಆಸ್ಪತ್ರೆಗಳ ಸುತ್ತಮುತ್ತ ಸ್ವಚ್ಛತಾ ಕಾರ್ಯ ಕೈಗೊಂಡು ನೈರ್ಮಲ್ಯ ಕಾಪಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ತಾಲೂಕು ವೈದ್ಯಾಧಿಕಾರಿ ಡಾ. ದಿಲೀಪ್ ಮಾತನಾಡಿ, ತಾಲೂಕಿನ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು ಲಭ್ಯವಿದ್ದಾರೆ. ಹುಳಿಯಾರು ಆಸ್ಪತ್ರೆಗೆ ಹೆಚ್ಚಿನ ಸಂಖ್ಯೆಯಲ್ಲಿ ರೋಗಿಗಳು ಬರುತ್ತಿರುವುದರಿಂದ ಹೆಚ್ಚುವರಿ ಸಿಬ್ಬಂದಿ ನಿಯೋಜಿಸುವ ಅಗತ್ಯವಿದೆ. ಚಿಕ್ಕನಾಯಕನಹಳ್ಳಿ ಸಾರ್ವಜನಿಕ ಆಸ್ಪತ್ರೆಗೆ ನಿರಂತರ ವಿದ್ಯುತ್ ಪೂರೈಕೆ ವ್ಯವಸ್ಥೆ ಕಲ್ಪಿಸಬೇಕು. ಸಂಕ್ರಾಮಿಕ ರೋಗಗಳ ನಿಯಂತ್ರಣ ಹಾಗೂ ಸಾರ್ವಜನಿಕರಲ್ಲಿ ಆರೋಗ್ಯ ಜಾಗೃತಿ ಮೂಡಿಸಲು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದರು.
ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ನಟರಾಜ್ ಮಾತನಾಡಿ, ರಾತ್ರಿ ವೇಳೆ ಕರ್ತವ್ಯ ನಿರ್ವಹಿಸುವ ಆಸ್ಪತ್ರೆ ಸಿಬ್ಬಂದಿಗೆ ಸೂಕ್ತ ಭದ್ರತೆ ಒದಗಿಸಬೇಕು. ಪ್ರಸ್ತುತ ಔಷಧಿ ಖರೀದಿಗೆ ನೀಡಲಾಗುತ್ತಿರುವ ₹10 ಸಾವಿರ ಅನುದಾನವನ್ನು ₹25 ಸಾವಿರಕ್ಕೆ ಹೆಚ್ಚಿಸಿದರೆ ತುರ್ತು ಸಂದರ್ಭಗಳಲ್ಲಿ ಅಗತ್ಯ ಔಷಧಿ ಹಾಗೂ ಚುಚ್ಚುಮದ್ದುಗಳನ್ನು ಖರೀದಿಸಲು ಅನುಕೂಲವಾಗಲಿದೆ. ಜತೆಗೆ ಆಂಬುಲೆನ್ಸ್ ಸಮಸ್ಯೆ ಬಗೆಹರಿಸಬೇಕು ಎಂದು ಶಾಸಕರಲ್ಲಿ ಮನವಿ ಮಾಡಿದರು.
ಸಭೆಯಲ್ಲಿ ಗ್ರೇಡ್-2 ತಹಸೀಲ್ದಾರ್ ಪ್ರಸಾದ್, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶಿವರಾಜಯ್ಯ, ಪುರಸಭೆ ಮುಖ್ಯಾಧಿಕಾರಿ ಮಂಜಮ್ಮ, ಹಿರಿಯ ವೈದ್ಯರಾದ ಡಾ. ಕುಮಾರಸ್ವಾಮಿ, ಡಾ. ನಟರಾಜ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ವೈದ್ಯಕೀಯ ಸಿಬ್ಬಂದಿ ಉಪಸ್ಥಿತರಿದ್ದರು.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
