ತುಮಕೂರು: ಅಮೂಲ್ಯವಾದ ಜೀವವನ್ನು ಉಳಿಸಲು 18 ವರ್ಷ ತುಂಬಿದವರು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಬೇಕು. ರಕ್ತದಾನ ಮಾಡುವುದರಿಂದ ರಕ್ತದಾನಿಗೂ ಪ್ರಯೋಜನವಾಗುತ್ತದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಚಂದ್ರಶೇಖರ್ ಅಭಿಪ್ರಾಯಪಟ್ಟರು.
ರಾಷ್ಟ್ರೀಯ ಸ್ವಯಂ ಪ್ರೇರಿತ ರಕ್ತದಾನ ದಿನಾಚರಣೆ ಅಂಗವಾಗಿ ಇಂದು ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿಗಳ ಕಚೇರಿಯಿಂದ ಜಿಲ್ಲಾಸ್ಪತ್ರೆಯವರೆಗೆ ಹಮ್ಮಿಕೊಂಡಿದ್ದ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ರಕ್ತದಾನ ಶ್ರೇಷ್ಠದಾನವಾಗಿದ್ದು, ಪ್ರತಿಯೊಬ್ಬರೂ ರಕ್ತದಾನ ಮಾಡುವ ಮೂಲಕ ಜೀವಗಳನ್ನು ಉಳಿಸಬಹುದು ಎಂದು ತಿಳಿಸಿದರು.
ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ.ಮೋಹನ್ ದಾಸ್ ಆರ್.ವಿ ಮಾತನಾಡಿ, ಜನರಲ್ಲಿ ರಕ್ತದಾನ ಬಗ್ಗೆ ಅರಿವು ಮೂಡಿಸುವುದು ಹಾಗೂ ಎಲ್ಲರನ್ನು ಸ್ವಯಂ ಪ್ರೇರಿತ ರಕ್ತದಾನಿಗಳನ್ನಾಗಿ ಪರಿವರ್ತಿಸುವುದು ಈ ದಿನಾಚರಣೆಯ ಉದ್ದೇಶವಾಗಿದೆ. ಎಲ್ಲರೂ ಸ್ವಯಂ ಪ್ರೇರಿತ ರಕ್ತದಾನಿಗಳಾಗೋಣ ಎಂದು ಕರೆ ಕೊಟ್ಟರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೆಡ್ ಕ್ರಾಸ್ ಸಂಸ್ಥೆ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ ಹಾಗೂ ರಕ್ತನಿಧಿ ಕೇಂದ್ರಗಳ ಸಹಯೋಗದಲ್ಲಿ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಚಂದ್ರಪ್ಪ, ಚಿದಾನಂದ್, ಜಿಲ್ಲಾ ಐಸಿಟಿಸಿ ಮೇಲ್ವಿಚಾರಕಿ ಮೋಹನಕುಮಾರಿ ಬಿ.ಎಮ್., ಡ್ಯಾಪ್ಕೋ ಸಿಬ್ಬಂದಿ, ಎನ್.ಟಿ.ಇ.ಪಿ ಸಿಬ್ಬಂದಿ, ಜಿಲ್ಲಾ ಆಸ್ಪತ್ರೆ ನರ್ಸಿಂಗ್ ಕಾಲೇಜು ಬೋಧಕ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296