ಬೀದರ್: ಜಿಲ್ಲೆಯಲ್ಲಿ ಪ್ರಸ್ತುತ ತಲೆದೂರಿರುವ ಬರಗಾಲದ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಗ್ರಾಮೀಣ ಭಾಗದ ಕೂಲಿ ಕಾರ್ಮಿಕರು ಉದ್ಯೋಗಕ್ಕಾಗಿ ನಗರ ಪ್ರದೇಶಗಳಿಗೆ ವಲಸೆ ಹೋಗುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ತಿಳಿಸಿದ್ದಾರೆ. ಗ್ರಾಮ ಪಂಚಾಯಿತಿಗಳಲ್ಲಿ ಜಾರಿಯಲ್ಲಿರುವ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆಯಡಿ ಸ್ಥಳೀಯ ಮಟ್ಟದಲ್ಲೇ ಉದ್ಯೋಗಾವಕಾಶಗಳನ್ನು ಕಲ್ಪಿಸಲಾಗಿದ್ದು, ಆಸಕ್ತರು ತಮ್ಮ ಗ್ರಾಮ ಪಂಚಾಯಿತಿ ಕಚೇರಿಯನ್ನು ಸಂಪರ್ಕಿಸಿ ಯೋಜನೆಯ ಸೌಲಭ್ಯವನ್ನು ಪಡೆಯಬಹುದು ಎಂದು ಅವರು ಪ್ರಕಟಣೆಯಲ್ಲಿ ಕರೆ ನೀಡಿದ್ದಾರೆ.
ಈ ಯೋಜನೆಯಡಿ ಕೇವಲ ಉದ್ಯೋಗ ನೀಡುವುದಷ್ಟೇ ಅಲ್ಲದೆ, ಗ್ರಾಮೀಣ ಭಾಗದಲ್ಲಿ ಶಾಶ್ವತ ಮತ್ತು ಬಾಳಿಕೆ ಬರುವ ಮೂಲಸೌಕರ್ಯಗಳ ನಿರ್ಮಾಣಕ್ಕೂ ಹೆಚ್ಚಿನ ಆದ್ಯತೆ ನೀಡಲಾಗಿದೆ. ಫಲಾನುಭವಿಗಳು ತಮ್ಮ ಜೀವಿತಾವಧಿಯಲ್ಲಿ 5 ಲಕ್ಷ ರೂಪಾಯಿವರೆಗೆ ವೈಯಕ್ತಿಕ ಕಾಮಗಾರಿಗಳನ್ನು ಕೈಗೊಳ್ಳುವ ಅವಕಾಶವಿದ್ದು, ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಅನುಮೋದಿತ ಕಾಮಗಾರಿಗಳಲ್ಲಿ ಈಗಾಗಲೇ ಕೂಲಿಕಾರರು ಕೆಲಸ ನಿರ್ವಹಿಸುತ್ತಿದ್ದಾರೆ ಎಂದು ತಿಳಿಸಲಾಗಿದೆ.
ಯೋಜನೆಯಡಿ ವೈಯಕ್ತಿಕ ಹಾಗೂ ಸಮುದಾಯ ಕಾಮಗಾರಿಗಳಿಗೆ ಮುಕ್ತ ಅವಕಾಶ ಕಲ್ಪಿಸಲಾಗಿದೆ. ವೈಯಕ್ತಿಕ ಕಾಮಗಾರಿಗಳಲ್ಲಿ ಜಾನುವಾರು ಶೆಡ್, ಎರೆಹುಳು ತೊಟ್ಟಿ ಘಟಕ, ತೋಟಗಾರಿಕೆ ಪ್ರದೇಶ ವಿಸ್ತರಣೆ, ತೆರೆದ ಬಾವಿ ಮತ್ತು ಕೃಷಿ ಹೊಂಡ (ಫಾರ್ಮ್ ಪಾಂಡ್) ಸೇರಿದಂತೆ ಹಲವು ಪ್ರಮುಖ ಕಾಮಗಾರಿಗಳು ಸೇರಿವೆ.
ಅದೇ ರೀತಿ ಸಮುದಾಯ ಕಾಮಗಾರಿಗಳಲ್ಲಿ ಬರಗಾಲ ನಿಯಂತ್ರಣ ಕಾಮಗಾರಿಗಳು, ಮಣ್ಣಿನ ಚೆಕ್ ಡ್ಯಾಂ, ಮುಖ್ಯ ಕಾಲುವೆ ನಿರ್ಮಾಣ, ಪ್ರವಾಹ ತಿರುವು ಚರಂಡಿ ನಿರ್ಮಾಣ, ಸಮುದಾಯ ಮೆಟ್ಟಿಲು ಬಾವಿ ಪುನಶ್ಚೇತನ, ಜಲ ಕೊಯ್ಲು ಹೊಂಡ ನಿರ್ಮಾಣ, ನೀರಾವರಿ ಬಾವಿ ನಿರ್ಮಾಣ ಹಾಗೂ ಕ್ರಾಸ್ ಡ್ರೈನೇಜ್ ಕಾಮಗಾರಿಗಳನ್ನು ಕೈಗೊಳ್ಳಬಹುದಾಗಿದೆ. ಇದರೊಂದಿಗೆ ಸರ್ಕಾರಿ ಶಾಲೆಗಳ ಕಂಪೌಂಡ್ ಗೋಡೆ, ಅಡುಗೆ ಕೋಣೆ, ಶೌಚಾಲಯ ನಿರ್ಮಾಣ ಹಾಗೂ ದುರಸ್ತಿ, ಆಟದ ಮೈದಾನ ಅಭಿವೃದ್ಧಿ ಮತ್ತು ಸಮುದಾಯ ಸ್ಮಶಾನ ನಿರ್ಮಾಣ ಸೇರಿದಂತೆ ವಿವಿಧ ಅನುಮೋದಿತ ಕಾಮಗಾರಿಗಳಲ್ಲಿ ಸ್ಥಳೀಯರು ಕೆಲಸ ಮಾಡಿ ಯೋಜನೆಯ ಲಾಭ ಪಡೆಯಬಹುದು ಎಂದು ಜಿಲ್ಲಾಧಿಕಾರಿಗಳು ವಿವರಿಸಿದ್ದಾರೆ.
ಯೋಜನೆಯ ಹೆಚ್ಚಿನ ಮಾಹಿತಿಗಾಗಿ ಸಾರ್ವಜನಿಕರು ತಮ್ಮ ಹತ್ತಿರದ ಗ್ರಾಮ ಪಂಚಾಯಿತಿಯನ್ನು ಸಂಪರ್ಕಿಸಬಹುದು. ಅಲ್ಲದೆ, ಸಾರ್ವಜನಿಕರ ಅನುಕೂಲಕ್ಕಾಗಿ ಉಚಿತ ಸಹಾಯವಾಣಿ ಸಂಖ್ಯೆ 8277506000 ಅನ್ನು ನೀಡಲಾಗಿದ್ದು, ಈ ಸಂಖ್ಯೆಗೆ ಕರೆ ಮಾಡುವ ಮೂಲಕವೂ ಅಗತ್ಯ ಮಾಹಿತಿ ಪಡೆಯಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


