ತುಮಕೂರು: ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಪ್ರಯುಕ್ತ ಏಪ್ರಿಲ್ 14ರಂದು ನಗರದ ಟೌನ್‌ಹಾಲ್ ವೃತ್ತದಿಂದ ಮಧ್ಯಾಹ್ನ 12 ಗಂಟೆಯಿಂದ ವಿವಿಧ ಜಾನಪದ ಕಲಾತಂಡಗಳೊಂದಿಗೆ ಭವ್ಯ ಮೆರವಣಿಗೆಯನ್ನು ಏರ್ಪಡಿಸಲು ಸಕಲ ಸಿದ್ಧತೆಗಳನ್ನು ಕೈಗೊಳ್ಳಬೇಕೆಂದು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಎಸ್.ಕೃಷ್ಣಪ್ಪ ಅವರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ನಿರ್ದೇಶನ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ಸೋಮವಾರ ರಾತ್ರಿ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದ ಅವರು, ಹಸಿರುಕ್ರಾಂತಿ ಹರಿಕಾರ ಬಾಬು ಜಗಜೀವನ್ ರಾಂ ಹಾಗೂ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರದ ಮೆರವಣಿಗೆಯನ್ನು ಏರ್ಪಡಿಸಬೇಕು. ಮೆರವಣಿಗೆಯಲ್ಲಿ ಜಿಲ್ಲೆಯ ಸಾಂಸ್ಕೃತಿಕ ಪರಂಪರೆಯನ್ನು ಪ್ರತಿಬಿಂಬಿಸುವ ಸ್ಥಳೀಯ ಕಲಾ ತಂಡಗಳಿಂದ ಪ್ರದರ್ಶನ ಏರ್ಪಡಿಸಬೇಕು ಎಂದು ತಿಳಿಸಿದರು.
ನಂತರ ಮಹಾನಗರಪಾಲಿಕೆ ಆವರಣದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಅವರ 1000 ಕೆ.ಜಿ. ಕಂಚಿನ ಪ್ರತಿಮೆ ಅನಾವರಣಗೊಳಿಸಲು ತಯಾರಿ ಮಾಡಿಕೊಳ್ಳಬೇಕು. ದೇಶದ ಮಹಾನ್ ನಾಯಕರಿಗೆ ಗೌರವ ಸೂಚಿಸುವ ಮಹತ್ವದ ಕಾರ್ಯಕ್ರಮ ಇದಾಗಿದ್ದು, ಸ್ಥಳೀಯ ಸಮುದಾಯ, ಶಾಲಾ–ಕಾಲೇಜು ವಿದ್ಯಾರ್ಥಿಗಳು, ಸಂಘಗಳು ಸೇರಿದಂತೆ ವಿವಿಧ ಸಂಘಟನೆಗಳು ಪಾಲ್ಗೊಳ್ಳುವಂತೆ ವ್ಯವಸ್ಥೆ ಮಾಡಬೇಕು ಎಂದರಲ್ಲದೆ, ಮೆರವಣಿಗೆ ಸಮಯದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ತುರ್ತು ಚಿಕಿತ್ಸಾ ವಾಹನ, ಅಗ್ನಿಶಾಮಕ ವಾಹನ ವ್ಯವಸ್ಥೆ ಮಾಡಬೇಕೆಂದು ಸೂಚಿಸಿದರು.
ಸಭೆಯಲ್ಲಿ ಪುತ್ಥಳಿ ಅನಾವರಣ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಪ್ರಮುಖವಾಗಿ ಆಹಾರ ಸಮಿತಿ, ವೇದಿಕೆ ಸಮಿತಿ, ಮೆರವಣಿಗೆ ಸಮಿತಿ, ಸನ್ಮಾನ ಸಮಿತಿ ಸೇರಿದಂತೆ ವಿವಿಧ ಸಮಿತಿಗಳನ್ನು ರಚಿಸಿ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಸಮಿತಿ ಅಧ್ಯಕ್ಷರು ಹಾಗೂ ಸದಸ್ಯರನ್ನಾಗಿ ನೇಮಿಸಿ ಜವಾಬ್ದಾರಿಗಳನ್ನು ನೀಡಲಾಯಿತು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ, ಜಿಲ್ಲಾ ಪಂಚಾಯತಿ ಉಪಕಾರ್ಯದರ್ಶಿ ಸಂಜೀವಪ್ಪ, ಉಪವಿಭಾಗಾಧಿಕಾರಿ ಗೌರವ್ ಕುಮಾರ್ ಶೆಟ್ಟಿ, ಜಂಟಿ ಕೃಷಿ ನಿರ್ದೇಶಕ ರಮೇಶ್, ನಿರ್ಮಿತಿ ಕೇಂದ್ರದ ವ್ಯವಸ್ಥಾಪಕ ರಾಜಶೇಖರ್, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕ ಮಂಟೇಸ್ವಾಮಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಚಂದ್ರಶೇಖರ್, ಪಂಚಾಯತ್ ರಾಜ್ ಮತ್ತು ಇಂಜಿನಿಯರಿಂಗ್ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ತಿಮ್ಮರಾಯಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಚೇತನ್ ಕುಮಾರ್ ಹಾಗೂ ಕಾರ್ಯಕ್ರಮ ನಿರೂಪಣಾಧಿಕಾರಿ ದಿನೇಶ್, ತಾಲ್ಲೂಕು ಪಂಚಾಯತಿ ಕಾರ್ಯನಿರ್ವಹಣಾಧಿಕಾರಿ ಹರ್ಷಕುಮಾರ್ ಸೇರಿದಂತೆ ಮತ್ತಿತರರು ಹಾಜರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW