ತುಮಕೂರು: ಜಿಲ್ಲೆಯಲ್ಲಿ ಡೆಂಗ್ಯೂ ಹಾಗೂ ಚಿಕನ್ ಗುನ್ಯಾ ರೋಗಗಳನ್ನು ನಿಯಂತ್ರಿಸಲು ಸಹಕರಿಸಬೇಕೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಚಂದ್ರಶೇಖರ್ ಜನರಲ್ಲಿ ಮನವಿ ಮಾಡಿದರು.
ಡೆಂಗ್ಯೂ ವಿರೋಧಿ ಮಾಸಾಚರಣೆ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಾನಗರಪಾಲಿಕೆ ಸಂಯುಕ್ತಾಶ್ರಯದಲ್ಲಿ ಬುಧವಾರ ನಗರದ ಮಹಾನಗರಪಾಲಿಕೆ ಆವರಣದಿಂದ ಆಯೋಜಿಸಲಾಗಿದ್ದ ಜನ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಡೆಂಗ್ಯೂ ಹಾಗೂ ಚಿಕನ್ ಗುನ್ಯಾ ರೋಗವು ವೈರಾಣುಗಳಿಂದ ಬರುವ ಕಾಯಿಲೆಗಳಾಗಿದ್ದು, ಸೊಳ್ಳೆ ಕಡಿತದಿಂದ ಒಬ್ಬರಿಂದ ಒಬ್ಬರಿಗೆ ಹರಡುತ್ತದೆ. ಮಳೆಗಾಲದಲ್ಲಿ ಹೆಚ್ಚಾಗಿ ಕಂಡು ಬರುವ ಈ ರೋಗವನ್ನು ನಿಯಂತ್ರಿಸಲು ಜನ ಸಮುದಾಯದ ಸಹಭಾಗಿತ್ವ ಅಗತ್ಯ. ಮಳೆ ನೀರು ಸಂಗ್ರಹದ ಸ್ಥಳದಲ್ಲಿ ಸೊಳ್ಳೆಗಳ ಉತ್ಪತ್ತಿ ಹೆಚ್ಚುತ್ತದೆ. ಈ ನಿಟ್ಟಿನಲ್ಲಿ ಜನಸಮುದಾಯ ತಮ್ಮ ಮನೆಯ ಸುತ್ತಮುತ್ತ ಮಳೆ ನೀರು ಸಂಗ್ರಹವಾಗದಂತೆ ಸ್ವಚ್ಛತೆಯನ್ನು ಕಾಪಾಡುವ ಮೂಲಕ ಇಲಾಖೆಯೊಂದಿಗೆ ಸಹಕರಿಸಬೇಕು ಎಂದು ಮನವಿ ಮಾಡಿದರು.
ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಹಂಸ ಟಿ.ಸ್ವಾಮಿ ಮಾತನಾಡಿ, ಹಠಾತ್ತನೆ ಬರುವ ತೀವ್ರ ಜ್ವರ, ವಿಪರೀತ ತಲೆನೋವು, ಕಣ್ಣುಗಳ ಹಿಂಭಾಗದಲ್ಲಿ ತೀವ್ರತೆ ನೋವು, ಮಾಂಸಖಂಡ ಮತ್ತು ಕೀಲುಗಳಲ್ಲಿ ವಿಪರೀತ ನೋವು, ವಾಕರಿಕೆ ಮತ್ತು ವಾಂತಿ ಲಕ್ಷಣಗಳು ಕಂಡು ಬಂದರೆ ಕೂಡಲೇ ಹತ್ತಿರದ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರಿಂದ ಪರೀಕ್ಷೆ ಮಾಡಿಸಿ ಸೂಕ್ತ ಚಿಕಿತ್ಸೆ ಪಡೆಯಬೇಕೆಂದು ಜನರಲ್ಲಿ ಜಾಗೃತಿ ಮೂಡಿಸಿದರು.
ಸೊಳ್ಳೆಗಳ ನಿಯಂತ್ರಣಕ್ಕಾಗಿ ಇಲಾಖೆಯಿಂದ ಲಾರ್ವಾ ಸಮೀಕ್ಷೆ ಕೈಗೊಂಡು ಸೊಳ್ಳೆಗಳ ಉತ್ಪತ್ತಿ ತಾಣವನ್ನು ಪತ್ತೆಹಚ್ಚಿ ಕ್ರಮ ಕೈಗೊಳ್ಳಲಾಗುತ್ತಿದೆ. ಪ್ರಸಕ್ತ ವರ್ಷ ಆಡೆಂಗಿ ಸೋಲಿಸಲು ಹೆಜ್ಜೆಗಳು: ಪರಿಶೀಲಿಸಿ, ಸ್ವಚ್ಛಗೊಳಿಸಿ, ಮುಚ್ಚಿಡಿ ಎನ್ನುವ ಘೋಷ ವಾಕ್ಯದೊಂದಿಗೆ ಡೆಂಗ್ಯೂ ವಿರೋಧಿ ಮಾಸಾಚರಣೆಯನ್ನು ಆಚರಿಸಲಾಗುತ್ತಿದ್ದು, ಡೆಂಗ್ಯೂ ಹಾಗೂ ಚಿಕನ್ಗುನ್ಯಾ ರೋಗವನ್ನು ನಿಯಂತ್ರಿಸಲು ಆರೋಗ್ಯ ಇಲಾಖೆಯಿಂದ ಕೈಗೊಳ್ಳಲಾಗುವ ಕ್ರಮಗಳಿಗೆ ಸಹಕರಿಸಬೇಕೆಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು.
ಮಹಾನಗರಪಾಲಿಕೆ ಆವರಣ (ಟೌನ್ ಹಾಲ್ )ದಿಂದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯವರೆಗೆ ಸಾಗಿದ ಜಾಥಾ ಕಾರ್ಯಕ್ರಮದಲ್ಲಿ ಸರ್ಕಾರಿ ನರ್ಸಿಂಗ್ ಕಾಲೇಜು/ನೀಲಗಂಗಾ ಪ್ಯಾರಾಮೆಡಿಕಲ್ ವಿದ್ಯಾರ್ಥಿಗಳು ಪಾಲ್ಗೊಂಡು ಜನರಲ್ಲಿ ಜಾಗೃತಿ ಮೂಡಿಸಿದರು. ತಾಲೂಕು ಆರೋಗ್ಯ ಅಧಿಕಾರಿ ಡಾ.ಲಕ್ಷ್ಮಿಕಾಂತ್, ಆರೋಗ್ಯ ಮೇಲ್ವಿಚಾರಣಾ ಅಧಿಕಾರಿ ಲಕ್ಷ್ಮೀಕಾಂತಯ್ಯ, ಕೀಟ ಶಾಸ್ತ್ರಜ್ಞರಾದ ಸುನಂದಾ ಒ. ಹಾಗೂ ಸಿದ್ದಪ್ಪ ಸ್ವಾಮಿ, ಹಿರಿಯ ಆರೋಗ್ಯ ನಿರೀಕ್ಷಕ ಅಧಿಕಾರಿಗಳಾದ ಸತೀಶ್ ಬಾಬು ಜಿ.ಜಿ., ನಾಗೇಶ್, ತಿಮ್ಮಯ್ಯ, ಮಂಜೇಗೌಡ, ನರೇಂದ್ರ, ಮೋಹನ್, ಚಂದ್ರಶೇಖರ್, ಕೀಟ ಸಂಗ್ರಾಹಕ ಅರುಣ್ ಕುಮಾರ್ ಹಾಗೂ ಮತ್ತಿತರರು ಹಾಜರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


