ತುಮಕೂರು: ಸರ್ಕಾರಿ ವಿದ್ಯಾರ್ಥಿ ನಿಲಯಗಳಲ್ಲಿ ಕಡ್ಡಾಯವಾಗಿ ಮೆನು ಚಾರ್ಚ್ ಗಳನ್ನು ಪ್ರದರ್ಶಿಸಬೇಕು. ಮೆನು ಚಾರ್ಟ್ ನಲ್ಲಿರುವಂತೆ ವಿದ್ಯಾರ್ಥಿಗಳಿಗೆ ಪ್ರತಿನಿತ್ಯ ಉಪಹಾರ, ಭೋಜನ ವ್ಯವಸ್ಥೆ ಮಾಡಬೇಕೆಂದು ಅಪರ ಜಿಲ್ಲಾಧಿಕಾರಿ ಹಾಗೂ ತುಮಕೂರು ತಾಲ್ಲೂಕು ವಿದ್ಯಾರ್ಥಿ ನಿಲಯಗಳ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ತಿಪ್ಪೇಸ್ವಾಮಿ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಕೆಸ್ವಾನ್ ಸಭಾಂಗಣದಲ್ಲಿ ಮಂಗಳವಾರ ನಡೆದ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪಾಲಕರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವಿದ್ಯಾರ್ಥಿನಿಲಯಗಳಲ್ಲಿ ಮೂಲಭೂತ ಸೌಕರ್ಯ ಒದಗಿಸುವುದರ ಜೊತೆಗೆ ಸುರಕ್ಷತೆ ಮತ್ತು ಸ್ವಚ್ಛತೆಗೆ ಹೆಚ್ಚು ಆದ್ಯತೆ ನೀಡಬೇಕು. ವಿದ್ಯಾರ್ಥಿನಿಲಯಗಳಲ್ಲಿ ಗುಣಮಟ್ಟದ ಆಹಾರ, ಗ್ರಂಥಾಲಯ, ಕ್ರೀಡಾಕಿಟ್, ಶೌಚಾಲಯ, ವಿದ್ಯುತ್ ಸಂಪರ್ಕ, ಸಮವಸ್ತ್ರ, ಸಿಸಿ ಕ್ಯಾಮರಾ, ಕಂಪ್ಯೂಟರ್, ಕುಡಿಯುವ ನೀರಿನ ವ್ಯವಸ್ಥೆಯನ್ನು ಕಲ್ಪಿಸಬೇಕು. ಎಲ್ಲಾ ಸರ್ಕಾರಿ ವಿದ್ಯಾರ್ಥಿನಿಲಯಗಳ ನಿಲಯ ಪಾಲಕರು ಕೇಂದ್ರ ಸ್ಥಾನದಲ್ಲಿದ್ದು, ವಿದ್ಯಾರ್ಥಿನಿಲಯಗಳಲ್ಲಿ ಯಾವುದೇ ಸಮಸ್ಯೆಗಳು ತಲೆದೋರದಂತೆ ಎಚ್ಚರಿಕೆವಹಿಸಬೇಕೆಂದು ನಿರ್ದೇಶನ ನೀಡಿದರು.
ಬಾಲಕಿಯರ ವಿದ್ಯಾರ್ಥಿ ನಿಲಯಗಳಲ್ಲಿರುವ ವಿದ್ಯಾರ್ಥಿನಿಯರಿಗೆ ಪ್ರತಿ ಮಾಹೆ ಸ್ಯಾನಿಟರಿ ನ್ಯಾಪ್‌ಕಿನ್ ನೀಡಬೇಕು. ವಿದ್ಯಾರ್ಥಿ ನಿಲಯಗಳ ಒಳಾಂಗಣ ಮತ್ತು ಹೊರಾಂಗಣದಲ್ಲಿ ಶುಚಿತ್ವ ಕಾಪಾಡಬೇಕು ಎಂದು ತಿಳಿಸಿದರಲ್ಲದೆ, ತಾಲ್ಲೂಕು ಮಟ್ಟದ ಸಮಾಜ ಕಲ್ಯಾಣ, ಪರಿಶಿಷ್ಟ ವರ್ಗಗಳ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಡಿ ನಡೆಯುತ್ತಿರುವ ವಿದ್ಯಾರ್ಥಿ ನಿಲಯಗಳಿಗೆ ಅನಿರೀಕ್ಷಿತವಾಗಿ ಭೇಟಿ ನೀಡಲಾಗುವುದು. ಭೇಟಿ ಸಂದರ್ಭದಲ್ಲಿ ಸಂಬಂಧಿಸಿದ ವಿದ್ಯಾರ್ಥಿ ನಿಲಯಗಳ ಮೇಲ್ವಿಚಾರಕರು ಹಾಗೂ ಸಿಬ್ಬಂದಿ ಕಡ್ಡಾಯವಾಗಿ ಹಾಜರಿರಬೇಕು ಎಂದು ನಿರ್ದೇಶನ ನೀಡಿದರು.
ತಿಂಗಳಿಗೊಮ್ಮೆ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ನಡೆಸಬೇಕೆಂದು ಸೂಚನೆ ನೀಡಿದ ಅವರು ನಿಲಯಗಳಲ್ಲಿ ಯಾವುದಾದರು ಸಮಸ್ಯೆಗಳಿದ್ದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತರಬೇಕು ಎಂದು ತಿಳಿಸಿದರು.
ಸಭೆಯಲ್ಲಿ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ವಿ.ಎಸ್. ಶಿವಣ್ಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿಸ್ತರಣಾಧಿಕಾರಿ ರಂಗಸ್ವಾಮಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಿಸ್ತರಣಾಧಿಕಾರಿ ತಿಪ್ಪೇಸ್ವಾಮಿ ಸೇರಿದಂತೆ ತಾಲೂಕಿನ ವಿವಿಧ ವಿದ್ಯಾರ್ಥಿ ನಿಲಯಗಳ ಪಾಲಕರು ಹಾಜರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx