ತುಮಕೂರು: ಮಧುಗಿರಿ ತಾಲ್ಲೂಕಿನ ಮಿಡಿಗೇಶಿ ಹೋಬಳಿಯ ಚಿನ್ನೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೀಲಿಹಳ್ಳಿ ಗ್ರಾಮಕ್ಕೆ ಜಿಲ್ಲಾಧಿಕಾರಿಗಳು ಭೇಟಿ ನೀಡಿ, ಕುಡಿಯುವ ನೀರಿನ ಸಮಸ್ಯೆಯನ್ನು ಪರಿಶೀಲಿಸಿದರು. ಈ ವೇಳೆ ಗ್ರಾಮಸ್ಥರಿಂದ ನೀರಿನ ಕೊರತೆ ಕುರಿತು ಮಾಹಿತಿ ಪಡೆದು, ಸಮಸ್ಯೆ ಪರಿಹರಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಗ್ರಾಮದಲ್ಲಿ ಸಿಎಪಿ ಯೋಜನೆಯಡಿ ಕೊರೆದ ಕೊಳವೆ ಬಾವಿ ವಿಫಲವಾಗಿರುವುದರಿಂದ, ಪಕ್ಕದ ಗ್ರಾಮದ ಖಾಸಗಿ ಕೊಳವೆಬಾವಿಯಿಂದ ಪೈಪ್ಲೈನ್ ಮೂಲಕ ನೀರು ಪೂರೈಸಲಾಗುತ್ತಿದೆ. ಆದರೂ ಗ್ರಾಮಸ್ಥರು ಹಾಗೂ ಜಾನುವಾರುಗಳಿಗೆ ಅಗತ್ಯ ಪ್ರಮಾಣದ ನೀರು ಲಭ್ಯವಾಗದೆ ಸಮಸ್ಯೆ ಉಂಟಾಗಿದೆ.
ಈ ಹಿನ್ನೆಲೆಯಲ್ಲಿ ಗ್ರಾಮಕ್ಕೆ ಪ್ರತಿದಿನ ಸಮರ್ಪಕವಾಗಿ ಕುಡಿಯುವ ನೀರು ಪೂರೈಸಲು ಪರ್ಯಾಯ ವ್ಯವಸ್ಥೆಯನ್ನು ಸಮರ್ಪಕವಾಗಿ ನಿರ್ವಹಿಸಬೇಕು. ನೀರು ಪೂರೈಕೆಯ ಪ್ರಮಾಣ ಮತ್ತು ಸಮಯವನ್ನು ಪರಿಶೀಲಿಸಿ, ಸಾರ್ವಜನಿಕರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.
ವಿಫಲವಾಗಿರುವ ಕೊಳವೆಬಾವಿಗೆ ಪರ್ಯಾಯವಾಗಿ ಶಾಶ್ವತ ನೀರಿನ ಮೂಲವನ್ನು ಗುರುತಿಸಿ, ಗ್ರಾಮದಲ್ಲಿನ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ವಾಟರ್ಮನ್ಗಳು ನೀರು ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಾಗದಂತೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ವಾಟರ್ಮನ್ಗಳ ಕೊರತೆ ಇದ್ದಲ್ಲಿ, ಒಬ್ಬ ಸಿಬ್ಬಂದಿಗೆ ಎರಡು ಅಥವಾ ಮೂರು ಗ್ರಾಮಗಳ ಜವಾಬ್ದಾರಿ ವಹಿಸಿ, ನೀರು ಪೂರೈಕೆಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡಬೇಕು ಎಂದು ತಿಳಿಸಿದರು.
ಬಳಿಕ ಗ್ರಾಮಸ್ಥರೊಂದಿಗೆ ಸಂವಾದ ನಡೆಸಿದ ಜಿಲ್ಲಾಧಿಕಾರಿಗಳು, ಅವರ ಕುಂದುಕೊರತೆಗಳನ್ನು ಆಲಿಸಿ, ಸಾರ್ವಜನಿಕರಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
