ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ತಲೆದೂರಿರುವ ತೀವ್ರ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸಲು ತಕ್ಷಣವೇ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿರುವ ಆರ್. ಅಶೋಕ, ಸರ್ಕಾರವು ಕೂಡಲೇ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 10 ಕೋಟಿ ರೂ. ವಿಶೇಷ ಅನುದಾನ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬರಗಾಲದ ಹಿನ್ನೆಲೆಯಲ್ಲಿ ಹಳ್ಳಿಗಳಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಎದ್ದಿದೆ. ಕೊಳವೆಬಾವಿಗಳು ಬತ್ತಿ ಹೋಗುತ್ತಿದ್ದು, ಜನ ಜಾನುವಾರುಗಳು ಸಂಕಷ್ಟಕ್ಕೆ ಸಿಲುಕಿವೆ. ಈ ತುರ್ತು ಪರಿಸ್ಥಿತಿಯನ್ನು ನಿಭಾಯಿಸಲು ಶಾಸಕರಿಗೆ ಹೆಚ್ಚಿನ ಅನುದಾನದ ಅಗತ್ಯವಿದೆ.
ರಾಜ್ಯ ಸರ್ಕಾರವು ವರ್ಗಾವಣೆ ಮತ್ತು ಭ್ರಷ್ಟಾಚಾರದಲ್ಲಿ ಮುಳುಗಿದ್ದು, ಜನರ ಮೂಲಭೂತ ಸಮಸ್ಯೆಗಳಾದ ಕುಡಿಯುವ ನೀರಿನ ಬಗ್ಗೆ ಗಮನ ಹರಿಸುತ್ತಿಲ್ಲ ಎಂದು ಅವರು ಟೀಕಿಸಿದರು.
ಹಲವೆಡೆ ಟ್ಯಾಂಕರ್ ಮೂಲಕ ನೀರು ಪೂರೈಕೆಯಾಗುತ್ತಿದೆಯಾದರೂ, ಅದರಲ್ಲಿ ಅವ್ಯವಹಾರ ನಡೆಯುತ್ತಿದೆ. ಶಾಶ್ವತ ಪರಿಹಾರಕ್ಕಾಗಿ ಹೊಸ ಕೊಳವೆಬಾವಿಗಳನ್ನು ಕೊರೆಯಲು ಮತ್ತು ಪಂಪ್‌ಸೆಟ್‌ಗಳ ದುಸ್ತಿಗೆ ಹಣದ ಕೊರತೆಯಿದೆ ಎಂದು ಅವರು ದೂರಿದರು.
ಸರ್ಕಾರವು ಕೇವಲ ಭರವಸೆಗಳನ್ನು ನೀಡದೆ, ಕೂಡಲೇ ಜಿಲ್ಲಾಧಿಕಾರಿಗಳ ಖಾತೆಗೆ ಹಣ ಜಮೆ ಮಾಡಿ ಕುಡಿಯುವ ನೀರಿನ ಕಾಮಗಾರಿಗಳನ್ನು ಯುದ್ಧೋಪಾದಿಯಲ್ಲಿ ಕೈಗೊಳ್ಳಬೇಕು ಎಂದು ಅವರು ಈ ಸಂದರ್ಭದಲ್ಲಿ ಒತ್ತಾಯಿಸಿದರು. ಒಂದು ವೇಳೆ ಸರ್ಕಾರ ಸ್ಪಂದಿಸದಿದ್ದರೆ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


