ಚಿಕ್ಕನಾಯಕನಹಳ್ಳಿ: ತಾಲೂಕಿನ ಕಸಬಾ ಹೋಬಳಿಯ ಮುದ್ದೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜೋಡಿ ಕಲ್ಲೇನಹಳ್ಳಿ ಗ್ರಾಮದಲ್ಲಿ ಖಾಸಗಿ ಬೋರ್ವೆಲ್ನಿಂದ ಗ್ರಾಮಸ್ಥರಿಗೆ ಕುಡಿಯುವ ನೀರಿನ ಸಂಪರ್ಕ ಕಲ್ಪಿಸಿರುವ ಕುರಿತು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪರಿಶೀಲನೆ ವೇಳೆ ಸ್ಥಳೀಯ ಸಾರ್ವಜನಿಕರು ಗ್ರಾಮದ ಚರಂಡಿ ವ್ಯವಸ್ಥೆ ಸೇರಿದಂತೆ ವಿವಿಧ ಮೂಲ ಸೌಕರ್ಯಗಳಿಗೆ ಸಂಬಂಧಿಸಿದ ಕುಂದು ಕೊರತೆಗಳ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಿದರು.
ಜೋಡಿ ಕಲ್ಲೇನಹಳ್ಳಿ ಗ್ರಾಮದಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಕುಡಿಯುವ ನೀರಿನ ಪೂರೈಕೆ ವ್ಯವಸ್ಥೆಗೆ ಹೊಸ ಕೊಳವೆಬಾವಿ ಕೊರೆಯಲು ಅನುಮೋದನೆಯಾಗಿದ್ದು ಗುರುವಾರ ಕೊಳವೆ ಬಾವಿ ಕೋರೆಸಲಾಗುವುದು ಎಂದು ಜನರಿಗೆ ತಿಳಿಸಿದರು. ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಶೀಘ್ರ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಬಳಿಕ ಗ್ರಾಮದಲ್ಲಿರುವ ಅಂಗನವಾಡಿ ಕೇಂದ್ರ ಹಾಗೂ ಶಾಲೆಗೆ ಭೇಟಿ ನೀಡಿ ಸ್ವಚ್ಛತೆ, ಸಮವಸ್ತ್ರ ವಿತರಣೆ, ಪಠ್ಯಪುಸ್ತಕ ವಿತರಣೆ ಹಾಗೂ ಹೆಚ್ಚುವರಿ ಪೌಷ್ಟಿಕ ಆಹಾರ ವಿತರಣೆ ಕುರಿತು ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಮುಖ್ಯೋಪಾಧ್ಯಾಯರು KMERC–CEPMIZ ಯೋಜನೆಯಡಿ ವಿದ್ಯಾರ್ಥಿಗಳಿಗೆ ವಿತರಿಸಲಾಗುತ್ತಿರುವ ಹೆಚ್ಚುವರಿ ಪೌಷ್ಟಿಕ ಆಹಾರ ಹಾಗೂ ಪ್ರತಿ ಶನಿವಾರ ನೀಡಲಾಗುವ ಹಣ್ಣಿನ ವಿತರಣೆ ಕುರಿತು ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಿದರು. ಜಿಲ್ಲಾಧಿಕಾರಿಗಳು ಶಾಲೆ ಹಾಗೂ ಅಂಗನವಾಡಿ ಕೇಂದ್ರಗಳಲ್ಲಿ ಸ್ವಚ್ಛತೆಯನ್ನು ಕಾಪಾಡಿಕೊಳ್ಳುವಂತೆ ಹಾಗೂ KMERC-CEPMIZ ಯೋಜನೆಯಡಿ ನಿಗದಿತ ಪ್ರಮಾಣದಲ್ಲಿ ಹೆಚ್ಚುವರಿ ಪೌಷ್ಟಿಕ ಆಹಾರವನ್ನು ವಿತರಿಸುವಂತೆ ಮುಖ್ಯೋಪಾಧ್ಯಾಯರಿಗೆ ಸೂಚಿಸಲಾಯಿತು.
ನಂತರ ಲಕ್ಷೇನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಹೊಸದಾಗಿ ಕೊರೆದಿರುವ ಬೋರ್ವೆಲ್ ಸ್ಥಳ ಪರಿಶೀಲನೆ ನಡೆಸಿದರು. ಬೋರ್ವೆಲ್ನಲ್ಲಿ ನೀರಿನ ಲಭ್ಯತೆ ಹಾಗೂ ಗ್ರಾಮಸ್ಥರಿಗೆ ಸಮರ್ಪಕವಾಗಿ ಕುಡಿಯುವ ನೀರಿನ ಸೌಲಭ್ಯ ಒದಗಿಸುವ ಕುರಿತು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಹಾಗೂ ಗ್ರಾಮ ಪಂಚಾಯಿತಿ ಅಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ನಿರ್ದೇಶನ ನೀಡಲಾಯಿತು.
ಈ ಸಂದರ್ಭದಲ್ಲಿ ತಿಪಟೂರು ಉಪವಿಭಾಗದ ಉಪವಿಭಾಗಾಧಿಕಾರಿಗಳು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಸಿಬ್ಬಂದಿ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


