ಬೆಂಗಳೂರು: ಶಾಸಕ ಮುನಿರತ್ನ ಮೇಲೆ ಮೊಟ್ಟೆ ದಾಳಿ ನಡೆಸಿರುವ ಘಟನೆಯನ್ನು ಬಿಜೆಪಿ ನಾಯಕರು ಖಂಡಿಸಿದ್ದಾರೆ. ಇದು ಡಿ.ಕೆ.ಸಹೋದರರ ಷಡ್ಯಂತ್ರ ಎಂದು ಗಂಭೀರ ಆರೋಪ ಮಾಡಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ, ರಾಜರಾಜೇಶ್ವರಿ ನಗರ ಶಾಸಕರಾದ ಮುನಿರತ್ನ ಅವರ ಮೇಲೆ ಗೂಂಡಾಗಳು ಹಲ್ಲೆ ನಡೆಸಿರುವುದು ಖಂಡನೀಯ. ಕಾಂಗ್ರೆಸ್ ಸರ್ಕಾರದ ಆಡಳಿತಾವಧಿಯಲ್ಲಿ ಕಾನೂನು ಸುವ್ಯವಸ್ಥೆ ಪಾತಾಳಕ್ಕೆ ಕುಸಿದಿರುವುದಕ್ಕೆ ದಿನನಿತ್ಯವೂ ವರದಿಯಾಗುತ್ತಿರುವ ಪ್ರಕರಣಗಳೇ ಸಾಕ್ಷಿಯಾಗಿದೆ ಎಂದು ಹೇಳಿದೆ.
ಕೆಲವೇ ದಿನಗಳ ಹಿಂದೆ ಶಕ್ತಿಸೌಧದೊಳಗೆ ರೌಡಿಗಳನ್ನು ಒಳಬಿಟ್ಟು ಪರಿಷತ್ ಸದಸ್ಯರ ಮೇಲೆ ಹಲ್ಲೆ ಮಾಡಿಸಿದ್ದ ಕಾಂಗ್ರೆಸ್ ಸರ್ಕಾರ, ಈಗ ಜನಪ್ರತಿನಿಧಿಯೊಬ್ಬರ ಮೇಲೆ ಸಾರ್ವಜನಿಕವಾಗಿ ಹಲ್ಲೆ ಮಾಡಿಸಿದೆ. ಜನಪ್ರತಿನಿಧಿಗಳಿಗೆ ರಕ್ಷಣೆ ಇಲ್ಲವೆಂದ ಮೇಲೆ ಜನಸಾಮಾನ್ಯರ ಗತಿಯೇನು? ಸರ್ಕಾರಿ ಪ್ರಾಯೋಜಿತ ಹಲ್ಲೆ, ದಾಳಿಗಳ ಮೂಲಕ ದ್ವೇಷದ ರಾಜಕೀಯ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ ಎಂದು ವಾಗ್ದಾಳಿ ನಡೆಸಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಮಾತನಾಡಿ, ಶಾಸಕ ಸ್ಥಾನದಿಂದ ಕೆಳಗಿಳಿಸಲು ಡಿಕೆ ಸಹೋದರರ ಷಡ್ಯಂತ್ರ ರೂಪಿಸಿದ್ದಾರೆಂದು ಆರೋಪಿಸಿದ್ದಾರೆ.
ಕಾಂಗ್ರೆಸ್ ಸರ್ಕಾರದಲ್ಲಿ ಜನಪ್ರತಿನಿಧಿಗಳಿಗೆ ರಕ್ಷಣೆಯಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಕಾನೂನು ಸುವ್ಯವಸ್ಥೆಯನ್ನು ಕೈಗೆತ್ತಿಕೊಂಡಿರುವ ಗೂಂಡಾಗಳು ಬಿಜೆಪಿ ಶಾಸಕರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx