ತುಮಕೂರು: ಭಾರತ ಚುನಾವಣಾ ಆಯೋಗವು ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ–2025ಕ್ಕೆ ಸಂಬಂಧಿಸಿದಂತೆ ವೇಳಾಪಟ್ಟಿಯನ್ನು ಪ್ರಕಟಿಸಿದೆ.
ವೇಳಾಪಟ್ಟಿಯನ್ವಯ ಆಗಸ್ಟ್ 20 ರಿಂದ ಅಕ್ಟೋಬರ್ 18ರವರೆಗೆ ಸಂಬಂಧಿಸಿದ ಮತಗಟ್ಟೆ ಮಟ್ಟದ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಮನೆಗಳಿಗೆ ಭೇಟಿ ನೀಡಿ ಪರಿಶೀಲಿಸಲಿದ್ದಾರೆ. ಪರಿಶೀಲನಾ ವೇಳೆಯಲ್ಲಿ ಮತಗಟ್ಟೆ ವ್ಯಾಪ್ತಿಯಲ್ಲಿ ಮರಣ ಹೊಂದಿದ/ 18 ವರ್ಷ ತುಂಬಿದ / ಸ್ಥಳಾಂತರಗೊಂಡ ಮತದಾರರ ಬಗ್ಗೆ ಹಾಗೂ ಮತದಾರರ ಪಟ್ಟಿಯಲ್ಲಿ ತಿದ್ದುಪಡಿ ಇದ್ದಲ್ಲಿ ನಿಗದಿತ ನಮೂನೆಯಲ್ಲಿ ಮಾಹಿತಿ ಪಡೆಯಲಿದ್ದಾರೆ.
ಮತಗಟ್ಟೆ ಮಟ್ಟದ ಅಧಿಕಾರಿಗಳು ಮನೆ–ಮನೆ ಭೇಟಿ ನೀಡಿದ ಸಂದರ್ಭದಲ್ಲಿ ಸಾರ್ವಜನಿಕರು ತಮ್ಮ ಹಾಗೂ ತಮ್ಮ ಮನೆಯ ಸದಸ್ಯರ ಹೆಸರುಗಳು ಮತದಾರರ ಪಟ್ಟಿಯಲ್ಲಿ ನಮೂದಾಗಿರುವ ಬಗ್ಗೆ ಖಾತ್ರಿ ಪಡಿಸಿಕೊಳ್ಳಬೇಕು.
ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ–2025ಕ್ಕೆ ಸಂಬಂಧಿಸಿದಂತೆ ಅಕ್ಟೋಬರ್ 29ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು.
ಮತದಾರರ ಪಟ್ಟಿಗೆ ಹೊಸದಾಗಿ ಹೆಸರು ಸೇರ್ಪಡೆಗಾಗಿ ನಮೂನೆ 6; ಅನಿವಾಸಿ ಭಾರತೀಯರ ಹೆಸರು ಸೇರ್ಪಡೆಗೆ ನಮೂನೆ 6ಎ; ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯಲ್ಲಿ ಉದ್ದೇಶಿತ ಹೆಸರಿನ ಸೇರ್ಪಡೆಗೆ ಆಕ್ಷೇಪಣೆ/ ಹೆಸರು ತೆಗೆದು ಹಾಕಲು ನಮೂನೆ 7; ಮತದಾರರ ನಿವಾಸ ಬದಲಾವಣೆ ಅಥವಾ ಪ್ರಸ್ತುತ ಮತದಾರರ ಪಟ್ಟಿಯಲ್ಲಿನ ನಮೂದುಗಳ ತಿದ್ದುಪಡಿ ಅಥವಾ ಯಾವುದೇ ತಿದ್ದುಪಡಿಗಳಿಲ್ಲದೆ ಬದಲಿ ಎಪಿಕ್ ಪಡೆಯುವಿಕೆ ಅಥವಾ ವಿಕಲಚೇತನ ವ್ಯಕ್ತಿ ಗುರುತಿಸಲು ಮನವಿಗಾಗಿ ನಮೂನೆ 8ನ್ನು ಭರ್ತಿ ಮಾಡಿ ಅಕ್ಟೋಬರ್ 29 ರಿಂದ ನವೆಂಬರ್ 28ರೊಳಗೆ ಸಲ್ಲಿಸಬಹುದಾಗಿದೆ.
ಸ್ವೀಕೃತ ಹಕ್ಕು ಮತ್ತು ಆಕ್ಷೇಪಣೆಗಳನ್ನು ಡಿಸೆಂಬರ್ 24ರೊಳಗಾಗಿ ವಿಲೇವಾರಿ ಮಾಡಲಾಗುವುದು. ಅಂತಿಮ ಮತದಾರರ ಪಟ್ಟಿಯನ್ನು 2025ರ ಜನವರಿ 6ರಂದು ಪ್ರಕಟಿಸಲಾಗುವುದು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q


