ತುಮಕೂರು: ಸರ್ಕಾರವೇ ನೇರವಾಗಿ ಜನರ ಬಳಿಗೆ ಬಂದು ಅವರ ಸಮಸ್ಯೆಗಳಿಗೆ ಪರಿಹಾರ ದೊರಕಿಸಿಕೊಡುವ ನಿಟ್ಟಿನಲ್ಲಿ ಸರ್ಕಾರ ಜನ ಸ್ಪಂದನ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಿದ್ದು, ರೈತರನ್ನು ಸರ್ಕಾರಿ ಕಚೇರಿಗಳಿಗೆ ಅಲೆದಾಡಿಸದೆ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸುವಂತೆ ತಿಪಟೂರು ಶಾಸಕ ಕೆ. ಷಡಕ್ಷರಿ ಅಧಿಕಾರಿಗಳಿಗೆ ತಿಳಿಸಿದರು.
ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ವತಿಯಿಂದ ತಿಪಟೂರು ತಾಲ್ಲೂಕು ನೊಣವಿನಕೆರೆ ಗ್ರಾಮದ ಉಡಿಸಲ ಕೆಂಪಮ್ಮದೇವಿ ಸಮುದಾಯ ಭವನದಲ್ಲಿ ಆಯೋಜಿಸಿದ್ದ ತಾಲ್ಲೂಕು ಮಟ್ಟದ ಜನಸ್ಪಂದನಾ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಸಾರ್ವಜನಿಕರ ಸಮಸ್ಯೆಗಳನ್ನು ತಳಮಟ್ಟದಲ್ಲೇ ಬಗೆಹರಿಸುವ ನಿಟ್ಟಿನಲ್ಲಿ ಸರ್ಕಾರ ಕೈಗೊಂಡಿರುವ ಮಹತ್ವದ ಕಾರ್ಯಕ್ರಮ ಇದಾಗಿದ್ದು, ಸಾರ್ವಜನಿಕರು ತಮ್ಮ ಕುಂದು ಕೊರತೆಗಳನ್ನು ತಿಳಿಸುವ ಮೂಲಕ ಅವುಗಳಿಗೆ ಪರಿಹಾರ ಕಂಡುಕೊಳ್ಳಬೇಕು ಎಂದು ತಿಳಿಸಿದರು.
ತಾಲ್ಲೂಕಿನಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿದ ಪವತಿ ಖಾತೆ, ಪಹಣಿ, ನಕಾಶೆ ರಸ್ತೆ, ವಾಡಿಕೆ ರಸ್ತೆ, ಜಮೀನು ಒತ್ತುವರಿಯಂತಹ ಪ್ರಕರಣಗಳು ಹೆಚ್ಚಾಗಿ ಕಂಡು ಬರುತ್ತಿದ್ದು, ಅವುಗಳನ್ನು ಶೀಘ್ರವಾಗಿ ಪರಿಹರಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.
ನಂತರ ಮಾತನಾಡಿದ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು, ಈಗಾಗಲೇ 8 ತಾಲ್ಲೂಕುಗಳಲ್ಲಿ ಜನಸ್ಪಂದನ ಕಾರ್ಯಕ್ರಮ ನಡೆಸಲಾಗಿದ್ದು, ಸಾರ್ವಜನಿಕರು ತಮ್ಮ ಕುಂದು ಕೊರತೆಗಳ ಅರ್ಜಿ ಸಲ್ಲಿಸುವ ಮೂಲಕ ಜಿಲ್ಲಾಡಳಿತದ ಗಮನಕ್ಕೆ ತಂದಿದ್ದಾರೆ. ಮುಖ್ಯವಾಗಿ ಎಲ್ಲಾ ತಾಲ್ಲೂಕುಗಳಲ್ಲಿ ಕಂದಾಯ ಇಲಾಖೆ ಮತ್ತು ಗ್ರಾಮ ಪಂಚಾಯತಿಗಳಿಗೆ ಸಂಬಂಧಿಸಿದ ಅರ್ಜಿಗಳು ಹೆಚ್ಚಾಗಿ ಕಂಡು ಬರುತ್ತಿದ್ದು, ಸಮಸ್ಯೆಗಳನ್ನು ಪರಿಹರಿಸಲು ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಲಾಗಿದೆ ಎಂದರು.
ಸಾರ್ವಜನಿಕರು ಸಲ್ಲಿಸಿರುವ ಅರ್ಜಿಗಳನ್ನು ಪರಿಶೀಲಿಸಿ ಅವುಗಳಿಗೆ ಪರಿಹಾರ ದೊರಕಿಸಿಕೊಡುವ ನಿಟ್ಟಿನಲ್ಲಿ ಅಧಿಕಾರಿಗಳು ತಮ್ಮ ಶಕ್ತಿ ಮೀರಿ ಕೆಲಸ ಮಾಡುತ್ತಿದ್ದು, ಕಾನೂನು ಸಮಸ್ಯೆಗಳ ಅರ್ಜಿಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಅರ್ಜಿಗಳನ್ನು ಶೀಘ್ರವಾಗಿ ವಿಲೇವಾರಿ ಮಾಡಲಾಗುವುದು ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಬೆಳೆ ಸಮೀಕ್ಷೆಯನ್ನು ೩ ಹಂತದಲ್ಲಿ ಮಾಡಲಾಗುತ್ತಿದ್ದು, ಇದರಲ್ಲಿ ಪ್ರಮುಖ ಹಂತ ರೈತರೇ ತಮ್ಮ ಸ್ಮಾರ್ಟ್ ಫೋನ್ ಗಳಲ್ಲಿ “ರೈತರ ಬೆಳೆ ಸಮೀಕ್ಷೆ ೨೦೨೪–೨೫”ರ ತಂತ್ರಾಂಶವನ್ನು ಡೌನ್ ಲೋಡ್ ಮಾಡಿಕೊಂಡು ಬೆಳೆ ವಿವರವನ್ನು ನಮೂದಿಸಬಹುದಾಗಿದೆ. ಇದು ಹೆಚ್ಚು ನಿಖರತೆಯಿಂದ ಕೂಡಿದ್ದು, ಅಧಿಕಾರಿಗಳು ರೈತರಲ್ಲಿ ಈ ಕುರಿತು ಜಾಗೃತಿ ಮೂಡಿಬೇಕು ಎಂದರಲ್ಲದೆ, ಎಲ್ಲಾ ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ರೈತರಿಗೆ ಮನವಿ ಮಾಡಿದರು.
೨೩೫ ಅರ್ಜಿ ಸ್ವೀಕಾರ:
ಈ ಕಾರ್ಯಕ್ರಮದಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿದ ೧೯೮, ಬೆಸ್ಕಾಂ-೬, ತಾಲ್ಲೂಕು ಪಂಚಾಯತಿ-೧೪, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ-೧, ಕೃಷಿ ಇಲಾಖೆ-೨, ಹೇಮಾವತಿ ನಾಲಾ ವಿಭಾಗ-೨, ಭೂ ದಾಖಲೆಗಳ ಇಲಾಖೆ-೧೧, ಪಶುಪಾಲನ ಇಲಾಖೆ-೧ ಸೇರಿದಂತೆ ಒಟ್ಟು ೨೩೫ ಅರ್ಜಿಗಳನ್ನು ಸ್ವೀಕರಿಸಲಾಗಿದೆ.
ಈ ಸಂದರ್ಭದಲ್ಲಿ ನೊಣವಿನಕೆರೆ ಕಾಡಸಿದ್ದೇಶ್ವರ ಮಠದ ಶಿವಯೋಗೀಶ್ವರ ಸ್ವಾಮೀಜಿ, ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ಉಪ ವಿಭಾಗಾಧಿಕಾರಿ ಸಪ್ತಶ್ರೀ, ತಹಶೀಲ್ದಾರ್ ಪವನ್ ಕುಮಾರ್, ತಾಲ್ಲೂಕ್ ಪಂಚಾಯ್ತಿ ಕಾರ್ಯ ನಿರ್ವಹಣಾಧಿಕಾರಿ ಸುದರ್ಶನ್, ಡಿ.ವೈ.ಎಸ್.ಪಿ. ವಿನಾಯಕ ಶೆಟ್ಟಿಗೇರಿ, ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಜಂಟಿ ನಿರ್ದೇಶಕ ಮಂಟೇಸ್ವಾಮಿ ಸೇರಿದಂತೆ ಮತ್ತಿತರ ಅಧಿಕಾರಿ-ಸಿಬ್ಬಂದಿಗಳು ಹಾಜರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA