ರೈತರ ನ್ಯಾಯಯುತ ಬೇಡಿಕೆಗಳು ಈಡೇರುವವರೆಗೆ ಸಕ್ಕರೆ ಸೇವಿಸುವುದಿಲ್ಲ ಎಂದು ಶಿರಹಟ್ಟಿಯ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಘೋಷಿಸಿದ್ದಾರೆ. ರೈತರ ಸಮಸ್ಯೆಗಳಿಗೆ ಸೂಕ್ತವಾಗಿ ಸ್ಪಂದಿಸದ ಕೇಂದ್ರ ಸರ್ಕಾರದ ಧೋರಣೆಯನ್ನು ಖಂಡಿಸಿದ ಅವರು, ರೈತರ ಹೋರಾಟಕ್ಕೆ ಮಠಾಧೀಶರು, ಧರ್ಮಗುರುಗಳು, ಸಾಹಿತಿಗಳು ಹಾಗೂ ಚಲನಚಿತ್ರ ಕಲಾವಿದರು ಬೆಂಬಲ ನೀಡಬೇಕು ಎಂದು ಕರೆ ನೀಡಿದ್ದಾರೆ.
ಕಬ್ಬಿಗೆ ಸೂಕ್ತ ಬೆಲೆ ನಿಗದಿಪಡಿಸುವ ವಿಚಾರದಲ್ಲಿ ಮತ್ತೊಂದು ಸಮಿತಿ ರಚಿಸುವ ಬದಲು, ಸ್ವಾಮಿನಾಥನ್ ಆಯೋಗದ ಶಿಫಾರಸುಗಳನ್ನು ಜಾರಿಗೊಳಿಸಬೇಕು ಎಂದು ಸ್ವಾಮೀಜಿ ಒತ್ತಾಯಿಸಿದ್ದಾರೆ. ಕಬ್ಬು ಕಟಾವಿನಲ್ಲಿ ವಿಳಂಬವಾದರೆ ತೂಕ ಕಡಿಮೆಯಾಗಿ ರೈತರಿಗೆ ಆರ್ಥಿಕ ನಷ್ಟ ಉಂಟಾಗುತ್ತದೆ. ಮತ್ತೊಂದೆಡೆ, ರಸಗೊಬ್ಬರ, ವಿದ್ಯುತ್ ಹಾಗೂ ಕೃಷಿ ಕಾರ್ಮಿಕರ ವೆಚ್ಚ ಹೆಚ್ಚುತ್ತಿರುವುದರಿಂದ ರೈತರ ಸಂಕಷ್ಟ ಮತ್ತಷ್ಟು ಹೆಚ್ಚಾಗಿದೆ ಎಂದು ಅವರು ತಿಳಿಸಿದ್ದಾರೆ.
ಕೈಗಾರಿಕೆಗಳು ತಮ್ಮ ಉತ್ಪನ್ನಗಳ ಬೆಲೆಯನ್ನು ತಾವೇ ನಿರ್ಧರಿಸಿಕೊಳ್ಳುವ ಅವಕಾಶ ಹೊಂದಿದ್ದರೂ, ರೈತರಿಗೆ ತಮ್ಮ ಬೆಳೆಗಳಿಗೆ ಸೂಕ್ತ ಬೆಲೆ ನಿಗದಿಪಡಿಸುವ ಸ್ವಾತಂತ್ರ್ಯವಿಲ್ಲದಿರುವುದು ಅನ್ಯಾಯ ಎಂದು ಸ್ವಾಮೀಜಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.ರೈತರ ಹಿತಾಸಕ್ತಿಯನ್ನು ಕಡೆಗಣಿಸುವ ಸರ್ಕಾರಗಳು ಹೆಚ್ಚು ಕಾಲ ಅಧಿಕಾರದಲ್ಲಿ ಉಳಿಯುವುದಿಲ್ಲ ಎಂದು ಎಚ್ಚರಿಸಿದ ಅವರು, ರೈತರ ಬೇಡಿಕೆಗಳನ್ನು ಈಡೇರಿಸಲು ಕೇಂದ್ರ ಸಚಿವರು ಮುಂದಾಗಬೇಕು. ಇಲ್ಲವಾದರೆ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಇದೇ ವೇಳೆ, ರಾಜ್ಯ ಸರ್ಕಾರವು ಗ್ಯಾರಂಟಿ ಯೋಜನೆಗಳನ್ನು ಒಂದು ವರ್ಷ ಸ್ಥಗಿತಗೊಳಿಸಿ, ಆ ಹಣವನ್ನು ರೈತರ ನೆರವಿಗೆ ಬಳಸಬೇಕು ಎಂದು ಸ್ವಾಮೀಜಿ ಒತ್ತಾಯಿಸಿದ್ದಾರೆ. ರೈತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಿ, ಕೃಷಿ ಕ್ಷೇತ್ರವನ್ನು ಸಂಕಷ್ಟದಿಂದ ಪಾರು ಮಾಡಲು ಸರ್ಕಾರಗಳು ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕು ಎಂಬುದು ಅವರ ಆಗ್ರಹವಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
