ಗುಬ್ಬಿ (ತುಮಕೂರು): ಜಿಲ್ಲೆಯ ಗುಬ್ಬಿ ತಾಲೂಕಿನ ನಿಟ್ಟೂರು ಬಳಿ ಸೋಮವಾರ ಬೆಳಿಗ್ಗೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸೈಕಲ್ ನಲ್ಲಿ ಹೋಗುತ್ತಿದ್ದ ಬಾಲಕನೋರ್ವ ಮೃತಪಟ್ಟಿದ್ದಾನೆ.
ನಿಟ್ಟೂರಿನ ಮೈಸೂರು ರಸ್ತೆಯಲ್ಲಿ ಈ ಘಟನೆ ಸಂಭವಿಸಿದೆ. ಮೃತ ಬಾಲಕನನ್ನು ಶೋಬಿತ್ ರಾಘವ್ (12) ಎಂದು ಗುರುತಿಸಲಾಗಿದೆ. ಸೋಮವಾರ ಬೆಳಿಗ್ಗೆ ಶೋಬಿತ್ ತನ್ನ ಸೈಕಲ್ ನಲ್ಲಿ ರಸ್ತೆ ಪಕ್ಕದಲ್ಲಿ ಹೋಗುತ್ತಿದ್ದಾಗ, ಅತಿ ವೇಗವಾಗಿ ಬಂದ ಎಲೆಕ್ಟ್ರಿಕ್ ಕಾರೊಂದು ನಿಯಂತ್ರಣ ತಪ್ಪಿ ಆತನಿಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ತೀವ್ರವಾಗಿ ಗಾಯಗೊಂಡಿದ್ದ ಬಾಲಕನನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ಮಾಡಲಾಯಿತಾದರೂ, ದಾರಿ ಮಧ್ಯೆಯೇ ಆತ ಕೊನೆಯುಸಿರೆಳೆದಿದ್ದಾನೆ ಎಂದು ತಿಳಿದುಬಂದಿದೆ.
ಅಪಘಾತ ಸಂಭವಿಸಿದ ಕೂಡಲೇ ಕಾರು ಚಾಲಕ ವಾಹನವನ್ನು ಸ್ಥಳದಲ್ಲಿಯೇ ಬಿಟ್ಟು ಪರಾರಿಯಾಗಿದ್ದ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಗುಬ್ಬಿ ಪೊಲೀಸರು ಕಾರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ತನಿಖೆ ಮುಂದುವರಿಸಿದ ಪೊಲೀಸರು ಸದ್ಯ ಚಾಲಕನನ್ನು ಪತ್ತೆಹಚ್ಚಿದ್ದಾರೆ ಎನ್ನಲಾಗಿದೆ.
ಹಬ್ಬದ ಸಡಗರದಲ್ಲಿದ್ದ ಕುಟುಂಬಕ್ಕೆ ಬಾಲಕನ ಸಾವು ಬರಸಿಡಿಲು ಬಡಿದಂತಾಗಿದೆ. ಮಗನನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಇನ್ನು ಅಪಘಾತಕ್ಕೆ ಕಾರಣನಾದ ಚಾಲಕನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ಮೃತ ಬಾಲಕನ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂದು ಸ್ಥಳೀಯರು ಹಾಗೂ ಸಾರ್ವಜನಿಕರು ಆಗ್ರಹಿಸಿದ್ದಾರೆ. ಗುಬ್ಬಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


