ಶಿರಾ (ತುಮಕೂರು): ಜಿಲ್ಲೆಯ ಶಿರಾ ತಾಲ್ಲೂಕಿನ ದ್ವಾರಾಳು ಬಳಿ ರಾಷ್ಟ್ರೀಯ ಹೆದ್ದಾರಿ–48ರಲ್ಲಿ ಮಂಗಳವಾರ ಬೆಳಿಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕೆಎಸ್ ಆರ್ ಟಿಸಿ ಬಸ್ ಚಾಲಕ ಸೇರಿದಂತೆ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಬೆಂಗಳೂರಿನಿಂದ ಚಿತ್ರದುರ್ಗದ ಕಡೆಗೆ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಕೆಎಸ್ ಆರ್ ಟಿಸಿ ಬಸ್, ದ್ವಾರಾಳು ಸೇತುವೆಯ ಮೇಲೆ ತಾಂತ್ರಿಕ ಕಾರಣದಿಂದ ಕೆಟ್ಟು ನಿಂತಿದ್ದ ಲಾರಿಗೆ ಹಿಂದಿನಿಂದ ಬಲವಾಗಿ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಬಸ್ ನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಬಸ್ ಚಾಲಕ ಶ್ರೀಕಾಂತ್ (50) ಮತ್ತು ಇನ್ನೊಬ್ಬ ಪ್ರಯಾಣಿಕ ಮೃತಪಟ್ಟಿದ್ದಾರೆ. ಮೃತಪಟ್ಟ ಮತ್ತೊಬ್ಬ ವ್ಯಕ್ತಿಯ ವಿವರಗಳು ಇನ್ನು ಲಭ್ಯವಾಗಿಲ್ಲ.
ಈ ಅಪಘಾತದಲ್ಲಿ ಬಸ್ ನಲ್ಲಿದ್ದ ಸುಮಾರು 33 ಪ್ರಯಾಣಿಕರು ಗಾಯಗೊಂಡಿದ್ದಾರೆ. ಇವರಲ್ಲಿ 23 ಮಂದಿಯ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ತುಮಕೂರು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂವರನ್ನು ಚಿತ್ರದುರ್ಗ ಆಸ್ಪತ್ರೆಗೆ ಹಾಗೂ ಉಳಿದ ಗಾಯಾಳುಗಳನ್ನು ಶಿರಾ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿದ ತಾವರೆಕೆರೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಅಪಘಾತದಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರ ವ್ಯತ್ಯಯ ಉಂಟಾಗಿತ್ತು. ಪ್ರಸ್ತುತ ತಾವರೆಕೆರೆ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


