ಗುಬ್ಬಿ: ವಿಧಾನ ಪರಿಷತ್ ಚುನಾವಣೆ ನೀತಿ ಸಂಹಿತೆ ಜಾರಿಯಾದ ಬಳಿಕ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ ಪ್ರಜಾಸೇವಾ ಅಭಿಯಾನಕ್ಕೆ ಮತ್ತೆ ಚಾಲನೆ ದೊರೆತಿದ್ದು, ತಾಲ್ಲೂಕಿನ ನಿಟ್ಟೂರು ಗ್ರಾಮದಲ್ಲಿ ಐದನೇ ಪ್ರಜಾಸೇವಾ ಅಭಿಯಾನವನ್ನು ತಹಶೀಲ್ದಾರ್ ಆರತಿ ಬಿ. ಅವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.
ನಿಟ್ಟೂರು ಗ್ರಾಮದ ಗುಹೇಶ್ವರ ಸಮುದಾಯ ಭವನದಲ್ಲಿ ನಡೆದ ಅಭಿಯಾನದಲ್ಲಿ ಸಾರ್ವಜನಿಕರಿಂದ ವಿವಿಧ ಇಲಾಖೆಗಳ ಅಹವಾಲು ಹಾಗೂ ಅರ್ಜಿಗಳನ್ನು ಸ್ವೀಕರಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ತಹಶೀಲ್ದಾರ್ ಆರತಿ ಬಿ. ಅವರು, ಈ ಬಾರಿಯ ಅಭಿಯಾನದಲ್ಲಿ ನಿವೇಶನ ಕೋರಿ ಹೆಚ್ಚಿನ ಅರ್ಜಿಗಳು ಸಲ್ಲಿಕೆಯಾಗಿವೆ. ಉಳಿದಂತೆ ವಿವಿಧ ಇಲಾಖೆಗಳಿಗೂ ಸಂಬಂಧಿಸಿದ ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಶಾಸಕರು ತುರ್ತು ಕಾರ್ಯಕ್ರಮದ ನಿಮಿತ್ತ ಗೈರಾಗಿದ್ದ ಹಿನ್ನೆಲೆಯಲ್ಲಿ ಅವರ ಅನುಪಸ್ಥಿತಿಯಲ್ಲಿಯೇ ಕಾರ್ಯಕ್ರಮ ನಡೆಸಲಾಗಿದೆ ಎಂದು ತಿಳಿಸಿದರು.
ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರ ನೇತೃತ್ವದಲ್ಲಿ ಪ್ರಜಾಸೇವಾ ಅಭಿಯಾನ ಆರಂಭಿಸಲಾಗಿದ್ದು, ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಇದೀಗ ಚುನಾವಣೆ ಬಳಿಕ ಮೊದಲ ಬಾರಿಗೆ ಅಭಿಯಾನವನ್ನು ಪುನರಾರಂಭಿಸಲಾಗಿದೆ. ಈ ಹಿಂದೆ ನಡೆದ ನಾಲ್ಕು ಅಭಿಯಾನಗಳಲ್ಲಿ ಸ್ವೀಕರಿಸಿದ ಅರ್ಜಿಗಳ ಪೈಕಿ ಬಹುತೇಕ ಅರ್ಜಿಗಳನ್ನು ಇತ್ಯರ್ಥಪಡಿಸಲಾಗಿದೆ. ಕಾನೂನು ಮತ್ತು ವ್ಯಾಜ್ಯಗಳಿಗೆ ಸಂಬಂಧಿಸಿದ ಅರ್ಜಿಗಳನ್ನು ನಿಯಮಾನುಸಾರ ಪರಿಹರಿಸಿಕೊಳ್ಳಬೇಕಿದೆ. ಈ ಬಾರಿಯೂ ಫಲಾನುಭವಿಗಳಿಗೆ ಪಿಂಚಣಿ ಆದೇಶದ ಪ್ರತಿಗಳನ್ನು ಸ್ಥಳದಲ್ಲಿಯೇ ವಿತರಿಸಲಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ತಾಲ್ಲೂಕು ಪಂಚಾಯಿತಿ ಇಒ ರಂಗನಾಥ್, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಜಗನ್ನಾಥ್ ಗೌಡ, ಎಇಇ ಜಲಜೇಶ್, ನಾಗೇಂದ್ರಪ್ಪ, ಸಿಡಿಪಿಒ ಕೃಷ್ಣಮೂರ್ತಿ, ಎಡಿಎಲ್ಆರ್ ತಿಮ್ಮಯ್ಯ, ಉಪತಹಶೀಲ್ದಾರ್ ಪ್ರಶಾಂತ್, ಕಂದಾಯ ನಿರೀಕ್ಷಕ ಮೋಹನ್ ಸೇರಿದಂತೆ ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
