ತುಮಕೂರು: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಸಾರ್ವಜನಿಕರ ಮಾಹಿತಿಗಾಗಿ ಜನವರಿ 6ರಂದು ಜಿಲ್ಲೆಯ ಎಲ್ಲಾ 2627 ಮತಗಟ್ಟೆ, ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಗಳ ಕಚೇರಿ ಹಾಗೂ ಸಹಾಯಕ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದೆಂದು ತುಮಕೂರು ಜಿಲ್ಲಾ ಮತದಾರರ ಪಟ್ಟಿ ವೀಕ್ಷಕ ಶಿವಕುಮಾರ್ ಕೆ.ಬಿ. ತಿಳಿಸಿದರು.
ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ–2025ರ ಸಂಬಂಧ ಜಿಲ್ಲಾಧಿಕಾರಿಗಳ ನ್ಯಾಯಾಲಯ ಸಭಾಂಗಣದಲ್ಲಿ ಶನಿವಾರ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಅಂತಿಮ ಮತದಾರರ ಪಟ್ಟಿಯನ್ನು ceo.karnataka.gov.in ಮತ್ತು tumkur.nic.in ವೆಬ್ ಸೈಟ್‌ಗಳಲ್ಲಿಯೂ ಪ್ರಚುರಪಡಿಸಲಾಗುವುದು ಎಂದು ತಿಳಿಸಿದರು.
ಅಂತಿಮ ಮತದಾರರ ಪಟ್ಟಿಯನ್ವಯ ಜಿಲ್ಲೆಯಲ್ಲಿ 11,40,384 ಪುರುಷ, 11,65,030 ಮಹಿಳೆ ಹಾಗೂ 88 ಇತರೆ ಸೇರಿ ಒಟ್ಟು 23,05,502 ಮತದಾರರಿದ್ದಾರೆ. ರಾಜ್ಯದ ಜೆಂಡರ್ ರೇಷಿಯೋ 1001 ಇದ್ದು, ಜಿಲ್ಲೆಯ ಜೆಂಡರ್ ರೇಷಿಯೋ 1022 ಇರುವುದನ್ನು ಗಮನಿಸಿದ ಅವರು, ಜಿಲ್ಲೆಯ ಶಿರಾ ಹಾಗೂ ಪಾವಗಡ ವಿಧಾನಸಭಾ ಕ್ಷೇತ್ರಗಳನ್ನು ಹೊರತುಪಡಿಸಿ ಉಳಿಕೆ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲೂ ಜೆಂಡರ್ ರೇಷಿಯೋ ರಾಜ್ಯದ ಜೆಂಡರ್ ರೇಷಿಯೋಗಿಂತ ಹೆಚ್ಚಾಗಿರುವುದರಿಂದ ಚುನಾವಣಾಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿಗಳು ಈ ಬಗ್ಗೆ ವಿಶೇಷ ಗಮನಹರಿಸಬೇಕು. ಮತಗಟ್ಟೆ ಮಟ್ಟದ ಅಧಿಕಾರಿಗಳು ಹಾಗೂ ಮೇಲ್ವಿಚಾರಕರ ಮೂಲಕ ಮತಗಟ್ಟೆ ವ್ಯಾಪ್ತಿಯಲ್ಲಿ ಪರಿಶೀಲನೆ ನಡೆಸಬೇಕು. ಮದುವೆಯಾಗಿ ಗಂಡನ ಮನೆಗೆ ಹೋಗಿರುವ, ವಿದ್ಯಾಭ್ಯಾಸ/ನೌಕರಿ ಕಾರಣಗಳಿಂದ ವರ್ಗಾವಣೆಗೊಂಡಿರುವ, ಮರಣ ಹೊಂದಿರುವ ಮಹಿಳಾ ಮತದಾರರನ್ನು ಗುರುತಿಸಬೇಕು. ಅಂತಹ ಮತದಾರರ ಹೆಸರುಗಳನ್ನು ನಿಯಮಾನುಸಾರ ಮತದಾರರ ಪಟ್ಟಿಯಿಂದ ತೆಗೆದುಹಾಕಲು ಕ್ರಮಕೈಗೊಂಡು ಜೆಂಡರ್ ರೇಷಿಯೋ ಕಡಿಮೆ ಮಾಡುವಂತೆ ಸೂಚನೆ ನೀಡಿದರು.
ಯುವ ಮತದಾರರ ನೋಂದಣಿಗಾಗಿ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳನ್ನು Dedicated AEROs for registration of young voters ಎಂದು ನಿಯೋಜಿಸಲಾಗಿದ್ದು, ಆಯಾ ತಾಲ್ಲೂಕು ವ್ಯಾಪ್ತಿಯ ಮತಗಟ್ಟೆಗಳಲ್ಲಿ ಯುವ ಮತದಾರರ ನೋಂದಣಿಗೆ ಹೆಚ್ಚಿನ ಆದ್ಯತೆ ನೀಡಲು ಕ್ರಮವಹಿಸಬೇಕೆಂದು ಸೂಚಿಸಿದರಲ್ಲದೆ, ಯಾವುದೇ ಅರ್ಹ ಮತದಾರರನ್ನು ಮತದಾರರ ಪಟ್ಟಿಯಿಂದ ಕೈಬಿಡದಂತೆ ಕ್ರಮಕೈಗೊಳ್ಳಬೇಕೆಂದು ಸೂಚಿಸಿದರು.
ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಶುಭ ಕಲ್ಯಾಣ್ ಮಾತನಾಡಿ, ಭಾರತ ಚುನಾವಣಾ ಆಯೋಗ ನೀಡಿರುವ ನಿರ್ದೇಶನಗಳಂತೆ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯವನ್ನು ಕೈಗೊಳ್ಳಲಾಗುವುದು ಎಂದು ವೀಕ್ಷಕರ ಗಮನಕ್ಕೆ ತಂದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಿ.ಪ್ರಭು, ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ, ಪಾಲಿಕೆ ಆಯುಕ್ತ ಬಿ.ವಿ. ಅಶ್ವಿಜ, ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿಗಳು, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಮತ್ತಿತರರು ಹಾಜರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx