ಹುಬ್ಬಳ್ಳಿ: ಐದು ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ, ಕೊಲೆ ಮಾಡಿದ್ದ ಬಿಹಾರ ಮೂಲದ ಆರೋಪಿ ಪೊಲೀಸರ ಗುಂಡೇಟಿಗೆ ಬಲಿಯಾಗಿದ್ದಾನೆ.
ಹುಬ್ಬಳ್ಳಿಯ ಅಧ್ಯಾಪಕ್ ನಗರದಲ್ಲಿ ಈ ಘಟನೆ ನಡೆದಿತ್ತು. ಐದು ವರ್ಷದ ಬಾಲಕಿಯ ಕೊಲೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಹುಬ್ಬಳ್ಳಿ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಆರೋಪಿಯ ಪತ್ತೆಗಾಗಿ ಹಲವು ತಂಡಗಳನ್ನು ರಚಿಸಿದ್ದರು.
ಇನ್ನು ತನಿಖೆಗೆ ಇಳಿದ ಪೊಲೀಸರಿಗೆ ಆರೋಪಿ ಬಿಹಾರ ಮೂಲದ ರಿತೇಶ್ ಕುಮಾರ್ ಇರುವ ಜಾಗ ಪತ್ತೆಯಾಗಿತ್ತು. ಈ ವೇಳೆ ಪೊಲೀಸರು ಆರೋಪಿಯನ್ನು ಬಂಧಿಸಲು ಮುಂದಾದರು. ಆದರೆ ಪೊಲೀಸರ ಮೇಲೆ ರಿತೇಶ್ ಕುಮಾರ್ ಹಲ್ಲೆಗೆ ಯತ್ನಿಸಿದ್ದು ಆತ್ಮರಕ್ಷಣೆಗಾಗಿ ಪೊಲೀಸರು ಗುಂಡು ಹಾರಿಸಿದರು. ಪೊಲೀಸರು ಹಾರಿಸಿದ ಗುಂಡುಗಳು ಆರೋಪಿಯ ಕಾಲು ಮತ್ತು ಎದೆಯ ಭಾಗಕ್ಕೆ ನುಗ್ಗಿದ್ದರಿಂದ ಅಲ್ಲೆ ಕುಸಿದುಬಿದ್ದಿದ್ದಾನೆ.
ತಕ್ಷಣ ಪೊಲೀಸರು ಆರೋಪಿಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲು ಮುಂದಾದರು. ಆದರೆ ಆತ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು.
ರಿತೇಶ್ ಕುಮಾರ್ ಚಾಕಲೇಟ್ ಕೊಡುವ ಆಸೆ ತೋರಿಸಿ ಬಾಲಕಿಯನ್ನು ಅಪಹರಿಸಿದ್ದ. ಆರೋಪಿಯ ಚಲನವಲನಗಳು ಸಿಸಿಟಿವಿಯಲ್ಲಿ ಸೆರೆಯಾಗಿತ್ತು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4