ಕರ್ನಾಟಕದ ಶಕ್ತಿ ಕೇಂದ್ರ ವಿಧಾನಸೌಧ ನಿರ್ಮಾತೃ ಕೆಂಗಲ್ ಹನುಮಂತಯ್ಯ ಅವರ ಸ್ಮರಣಾರ್ಥ ಸ್ವಾತಂತ್ರೋತ್ಸವದ ಫಲಪುಷ್ಪ ಪ್ರದರ್ಶನವು ಆಗಸ್ಟ್ 4 ರಿಂದ ಆಗಸ್ಟ್ 15ರವರೆಗೂ ಲಾಲ್ ಬಾಗ್ ನಲ್ಲಿ ನಡೆಯಲಿದೆ’ ಎಂದು ತೋಟಗಾರಿಕೆ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ತಿಳಿಸಿದರು.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನಾಡಿನ ಕೀರ್ತಿಯನ್ನು ದೇಶದಲ್ಲಿ ಪಸರಿಸಿದ ಕೆಂಗಲ್ ಹನುಮಂತಯ್ಯ ಅವರ ಜೀವನ, ಸಾಧನೆ, ಹೋರಾಟಗಳನ್ನು ಈ ವರ್ಷ ನಡೆಯುವ ಫಲಪುಷ್ಪ ಪ್ರದರ್ಶನದಲ್ಲಿ ಪುಷ್ಪ ಗೌರವ ಸಲ್ಲಿಸಲು ತಯಾರಿ ಮಾಡಿಕೊಳ್ಳಲಾಗುತ್ತಿದೆ. ಈ ಬಾರಿ ಫಲಪುಷ್ಪ ಪ್ರದರ್ಶನಕ್ಕೆ 10 ಲಕ್ಷಕ್ಕೂ ಹೆಚ್ಚು ಜನ ಆಗಮಿಸುವ ನಿರೀಕ್ಷೆ ಇದೆ’ ಎಂದು ವಿವರಿಸಿದರು.
‘ತೋಟಗಾರಿಕೆ ಇಲಾಖೆ ಸ್ವಾತಂತ್ರೋತ್ಸವದ ಅಂಗವಾಗಿ ಹಮ್ಮಿಕೊಂಡಿರುವ 214ನೇ ಫಲಪುಷ್ಪ ಪ್ರದರ್ಶನ ಇದಾಗಿದೆ. ಹಚ್ಚ ಹಸಿರಿನಿಂದ ಕಂಗೊಳಿಸುತ್ತಿರುವ ಸಸ್ಯಕಾಶಿ ಲಾಲ್ ಬಾಗ್ ನಲ್ಲಿ ಫಲಪುಷ್ಪ ಪ್ರದರ್ಶನಕ್ಕೆ ವೇದಿಕೆ ಸಜ್ಜಾಗುತ್ತಿದೆ. ಆಗಸ್ಟ್ 4ರಂದು ಸಂಜೆ 6ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ ನೀಡಲಿದ್ದಾರೆ’ ಎಂದರು.
‘ಗಾಜಿನ ಮನೆಯ ಕೇಂದ್ರ ಭಾಗದಲ್ಲಿ 18 ಅಡಿ ಅಗಲ, 36 ಅಡಿ ಉದ್ದ ಮತ್ತು 18 ಅಡಿ ಎತ್ತರದ ವಿಧಾನಸೌಧವು 7.2 ಲಕ್ಷ ವಿವಿಧ ತಳಿಯ ಪುಷ್ಪಗಳಲ್ಲಿ ಅರಳಲಿದೆ. ಕೆಂಗಲ್ ಹನುಮಂತಯ್ಯ ಅವರ 14 ಅಡಿ ಎತ್ತರದ ಬೃಹತ್ ಪ್ರತಿಮೆಯು ಅನಾವರಣಗೊಳ್ಳಲಿದ್ದು, ನೋಡಗರ ಕಣ್ಮನ ಸೆಳೆಯಲಿದೆ. ಆಗಸ್ಟ್ 5ರಂದು ನಡೆಯುವ ಇಕೆಬಾನ, ತರಕಾರಿ ಕೆತ್ತನೆ, ಪುಷ್ಪಭಾರತಿ, ಬೋನ್ಸಾಯ್, ಡಚ್ ಹೂವಿನ ಜೋಡಣೆ, ಥಾಯ್ ಆರ್ಟ್, ಜಾನೂರು ಒಣಹೂವಿನ ಜೋಡಣೆಯ ಕಲೆಗಳ ಸ್ಪರ್ಧೆಯ ಪ್ರದರ್ಶನವನ್ನು ಹೈಕೋರ್ಟ್ ನ್ಯಾಯಮೂರ್ತಿ ಎಚ್. ಪಿ. ಸಂದೇಶ್ ಉದ್ಘಾಟಿಸಲಿದ್ದಾರೆ. ಚಲನಚಿತ್ರ ನಟಿ ಉಮಾಶ್ರೀ ಭಾಗವಹಿಸಲಿದ್ದಾರೆ.
ಇಕೆಬಾನ ಸೇರಿ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದವರಿಗೆ ಆಗಸ್ಟ್ 14ರಂದು ಸಾಹಿತಿ ಶೂದ್ರ ಶ್ರೀನಿವಾಸ್, ಜಾನಪದ ತಜ್ಞೆ ಕೆ. ಆರ್. ಸಂಧ್ಯಾ ರೆಡ್ಡಿ, ಚಲನಚಿತ್ರ ನಟಿ ರಚಿತಾ ರಾಮ್ ಬಹುಮಾನಗಳನ್ನು ವಿತರಿಸಲಿದ್ದಾರೆ. ತೋಟಗಾರಿಕೆ ನಿರ್ದೇಶಕ ರಮೇಶ್ ಡಿ. ಎಸ್., ಜಂಟಿ ನಿರ್ದೇಶಕ ಎಂ. ಜಗದೀಶ್, ಉಪನಿರ್ದೇಶಕಿ ಜಿ. ಕುಸುಮಾ ಇದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


