ಬೆಂಗಳೂರು: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಹೃದಯದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಇದೀಗ ಅವರು ಚೇತರಿಸಿಕೊಳ್ಳುತ್ತಿದ್ದಾರೆ.
ಬನ್ನೇರುಘಟ್ಟ ರಸ್ತೆಯ ಫೋರ್ಟಿಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬೊಮ್ಮಾಯಿ ಅವರನ್ನು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ ಮಾಡಿ, ಆರೋಗ್ಯ ವಿಚಾರಿಸಿದ್ದಾರೆ.
ಆಸ್ಪತ್ರೆಯ ಅಧಿಕೃತ ಹೇಳಿಕೆ ಪ್ರಕಾರ, ಪ್ರಾಥಮಿಕ ಆರೋಗ್ಯ ತನಿಖೆಯಲ್ಲಿ ಬೊಮ್ಮಾಯಿ ಅವರ ಹೃದಯದಲ್ಲಿ ಅನೇಕ ತೊಂದರೆ ಇರುವುದು ಕಂಡುಬಂತು. ನಂತರ ಅವರನ್ನು ಅಕ್ಟೋಬರ್ 15 ರಂದು ಹೃದ್ರೋಗ ತಜ್ಞ ಡಾ. ವಿವೇಕ್ ಜವಳಿ ನೇತೃತ್ವದಲ್ಲಿ ಸಂಪೂರ್ಣ ತಪಾಸಣೆಗಾಗಿ ಫೋರ್ಟಿಸ್ ಆಸ್ಪತ್ರೆಗೆ ಕರೆದೊಯ್ಯಲಾಯಿತು.
ಆಂಜಿಯೋಗ್ರಾಮ್ ಸೇರಿದಂತೆ ವಿವಿಧ ಪರೀಕ್ಷೆಗಳನ್ನು ನಡೆಸಿದಾಗ ಪರಿಧಮನಿಯಲ್ಲಿ ಸಮಸ್ಯೆ ಇರುವುದು ಪತ್ತೆಯಾಯಿತು. ಇದು ಮುಂದಿನ ದಿನಗಳಲ್ಲಿ ಸಂಭವನೀಯ ಹೃದಯಾಘಾತಕ್ಕೆ ಕಾರಣವಾಗುತ್ತಿತ್ತು. ಇದನ್ನು ಬೈಪಾಸ್ ಮಾಡಲು, ಡಾ. ಜವಳಿ ನೇತೃತ್ವದ ತಂಡವು ಸಿಎಬಿಜಿ ಶಸ್ತ್ರಚಿಕಿತ್ಸೆಯನ್ನು ನಡೆಸಿತು. ಸದ್ಯ ಬೊಮ್ಮಾಯಿ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ಆಸ್ಪತ್ರೆ ತಿಳಿಸಿದೆ.


