ಬೆಂಗಳೂರು: ಮಹಿಳೆಯರು ಮತ್ತು ಮಂಗಳಮುಖಿಯರನ್ನು ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿ ಮಾಡುವ ಉದ್ದೇಶದಿಂದ ಹಮ್ಮಿಕೊಳ್ಳಲಾಗಿರುವ ಉಚಿತ ಆಟೋ ಚಾಲನಾ ತರಬೇತಿ ಕಾರ್ಯಕ್ರಮಕ್ಕೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಚಾಲನೆ ನೀಡಿದರು.
ಬಿ.ಪ್ಯಾಕ್ (B.PAC) ಹಾಗೂ ಸಿಜಿಐ (CGI) ಸಹಯೋಗದಲ್ಲಿ ಬಿಟಿಎಂ ಲೇಔಟ್‌ನಲ್ಲಿ ಆಯೋಜಿಸಲಾಗಿದ್ದ ಈ ‘ಕೌಶಲ್ಯ ಮತ್ತು ಆಟೋ ಚಾಲನಾ ತರಬೇತಿ’ ಕಾರ್ಯಕ್ರಮದಲ್ಲಿ ಸಚಿವರು ಮಾತನಾಡಿದರು.
ಮಹಿಳೆಯರು ಮತ್ತು ಮಂಗಳಮುಖಿಯರನ್ನು ಆರ್ಥಿಕವಾಗಿ ಬಲಪಡಿಸಲು ಇಂತಹ ತರಬೇತಿಗಳು ಅಗತ್ಯವಾಗಿದ್ದು, ಸಂಘಟಕರು ಕೈಗೊಂಡಿರುವ ಈ ಕಾರ್ಯ ಶ್ಲಾಘನೀಯ ಎಂದು ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು.
ಆಟೋ ಚಾಲಕರು ಬೆಂಗಳೂರಿನ ಸಾರಿಗೆ ವ್ಯವಸ್ಥೆಯ ಬೆನ್ನೆಲುಬಾಗಿದ್ದಾರೆ. ಈ ಸಮುದಾಯಕ್ಕೆ ಹೆಚ್ಚಿನ ಸೌಲಭ್ಯ ಒದಗಿಸುವ ಕುರಿತು ಬಜೆಟ್ ನಂತರ ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಈ ಯೋಜನೆಯಡಿ ಈಗಾಗಲೇ ಒಂಬತ್ತು ವಿಧಾನಸಭಾ ಕ್ಷೇತ್ರಗಳಲ್ಲಿ ಸುಮಾರು 500ಕ್ಕೂ ಹೆಚ್ಚು ಮಹಿಳೆಯರು ಮತ್ತು ಮಂಗಳಮುಖಿಯರಿಗೆ ತರಬೇತಿ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಈ ಕಾರ್ಯಕ್ರಮವನ್ನು ನಗರದ ಎಲ್ಲಾ ವಿಧಾನಸಭಾ ಕ್ಷೇತ್ರಗಳಿಗೂ ವಿಸ್ತರಿಸುವ ಗುರಿ ಇದೆ ಎಂದು ಆಯೋಜಕರು ತಿಳಿಸಿದ್ದಾರೆ.
ಕಾರ್ಯಕ್ರಮದ ನಂತರ ಸಚಿವ ರಾಮಲಿಂಗಾರೆಡ್ಡಿ ಅವರು ಮಹಿಳಾ ಚಾಲಕಿಯೊಬ್ಬರು ಚಾಲನೆ ಮಾಡಿದ ಆಟೋದಲ್ಲಿ ಪ್ರಯಾಣಿಸುವ ಮೂಲಕ ಚಾಲಕಿಯರನ್ನು ಹುರಿದುಂಬಿಸಿದರು.
ಮಹಿಳೆಯರು ಸಮಾಜದ ಎಲ್ಲಾ ಕ್ಷೇತ್ರಗಳಲ್ಲಿ ಮುನ್ನುಗ್ಗುತ್ತಿರುವುದು ಹೆಮ್ಮೆಯ ವಿಷಯವಾಗಿದ್ದು, ಸಾರಿಗೆ ಇಲಾಖೆಯು ಇಂತಹ ಸ್ವಯಂ ಉದ್ಯೋಗದ ಪ್ರಯತ್ನಗಳಿಗೆ ಸಂಪೂರ್ಣ ಸಹಕಾರ ನೀಡಲಿದೆ ಎಂದು ಸಚಿವರು ಈ ಸಂದರ್ಭದಲ್ಲಿ ಪುನರುಚ್ಚರಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


