ಸರಗೂರು: ಹಳೇ ಮೈಸೂರು ಪ್ರಾಂತ್ಯದ ಪರಿಶಿಷ್ಟ ಪಂಗಡ (ST) ಸಮಾಜದ ರಾಜಕೀಯ ನಾಯಕರಿಗೆ ಪ್ರಸ್ತುತ ಸರ್ಕಾರದಲ್ಲಿ ಯಾವುದೇ ಸಚಿವ ಸ್ಥಾನ ನೀಡಿಲ್ಲ. ಆದ್ದರಿಂದ ಈ ಪ್ರಾಂತ್ಯದ ಯುವ ನಾಯಕರಾಗಿರುವ ಹೆಗ್ಗಡದೇವನಕೋಟೆ ಕ್ಷೇತ್ರದ ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಮುಂದಿನ ಎರಡನೇ ಸುತ್ತಿನ ಸಚಿವ ಸಂಪುಟ ವಿಸ್ತರಣೆಯಲ್ಲಿ ಸಚಿವ ಸ್ಥಾನ ನೀಡಬೇಕು ಎಂದು ಪಪಂ ಸದಸ್ಯ ಹಾಗೂ ನಾಯಕ ಸಮಾಜದ ತಾಲೂಕು ಉಪಾಧ್ಯಕ್ಷ ಶ್ರೀನಿವಾಸ್ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಶಾಸಕ ಅನಿಲ್ ಚಿಕ್ಕಮಾದು ಅವರು ಹೆಗ್ಗಡದೇವನಕೋಟೆ ಕ್ಷೇತ್ರದಿಂದ ಸತತ ಎರಡನೇ ಬಾರಿಗೆ ವಿಧಾನಸಭಾ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಹಳೇ ಮೈಸೂರು ಭಾಗದ ಏಕೈಕ ಪರಿಶಿಷ್ಟ ಪಂಗಡದ ಶಾಸಕರಾಗಿರುವ ಇವರು, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳ ನಾಯಕ ಸಮಾಜದ ಪ್ರಭಾವಿ ಮುಖಂಡರಾಗಿದ್ದಾರೆ. ಕಳೆದ ಚುನಾವಣೆಯಲ್ಲಿ ನಾಯಕ ಸಮಾಜದ ಮತದಾರರನ್ನು ಕಾಂಗ್ರೆಸ್ ಪಕ್ಷದತ್ತ ಸೆಳೆಯುವಲ್ಲಿ ಮತ್ತು ಪಕ್ಷದ ಗೆಲುವಿನಲ್ಲಿ ಇವರು ಪ್ರಮುಖ ಪಾತ್ರ ವಹಿಸಿದ್ದರು” ಎಂದು ತಿಳಿಸಿದರು.
“ತಮ್ಮ ಅಧಿಕಾರ ಅವಧಿಯಲ್ಲಿ ಯಾವುದೇ ಕಪ್ಪು ಚುಕ್ಕೆ ಇಲ್ಲದೆ, ಪ್ರಾಮಾಣಿಕವಾಗಿ ಕರ್ತವ್ಯ ನಿಭಾಯಿಸುತ್ತಿರುವ ಅನಿಲ್ ಚಿಕ್ಕಮಾದು ಅವರು ಸದ್ಯ ಕರ್ನಾಟಕ ಸರ್ಕಾರದ ಅರಣ್ಯ ವಸತಿ ಮತ್ತು ವಿಹಾರಧಾಮಗಳ ಸಂಸ್ಥೆಯ (JLR) ಅಧ್ಯಕ್ಷರಾಗಿಯೂ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರಿಗೆ ಸಚಿವ ಸ್ಥಾನ ನೀಡಿದರೆ ಜವಾಬ್ದಾರಿಯನ್ನು ಪರಿಪೂರ್ಣವಾಗಿ ನಿಭಾಯಿಸಲಿದ್ದಾರೆ.”
— ಶ್ರೀನಿವಾಸ್, ನಾಯಕ ಸಮಾಜದ ತಾಲೂಕು ಉಪಾಧ್ಯಕ್ಷ
ಕಾಂಗ್ರೆಸ್ ಪಕ್ಷದ ವರಿಷ್ಠರು ಹಾಗೂ ರಾಜ್ಯದ ನಾಯಕರಾದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಈ ಬಗ್ಗೆ ಶಿಫಾರಸು ಮಾಡುವಂತೆ ಮೈಸೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಿ.ಜೆ. ವಿಜಯಕುಮಾರ್ ಹಾಗೂ ಮೈಸೂರು ಜಿಲ್ಲಾ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಪಂಗಡ ವಿಭಾಗದ ಅಧ್ಯಕ್ಷ ಮಹೇಶ್ ನಾಗವಾಲ ಅವರಿಗೆ ಶ್ರೀನಿವಾಸ್ ಅವರು ಇದೇ ಸಂದರ್ಭದಲ್ಲಿ ಮನವಿ ಮಾಡಿಕೊಂಡರು.
ವರದಿ: ಹಾದನೂರು ಚಂದ್ರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


