ತುಮಕೂರು: ನಗರದ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ನವೆಂಬರ್ 1ರಂದು ವೈಭವಯುತವಾಗಿ ಹಾಗೂ ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲು ಪೂರ್ವ ಸಿದ್ಧತೆ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು.
ಜಿಲ್ಲಾ ಪಂಚಾಯತ್ ಕಚೇರಿಯಲ್ಲಿಂದು ಕನ್ನಡ ರಾಜ್ಯೋತ್ಸವ ಆಚರಣೆಗೆ ಸಂಬಂಧಿಸಿದಂತೆ ಕನ್ನಡಪರ ಸಂಘಟನೆಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ರಾಜ್ಯೋತ್ಸವದ ಅಂಗವಾಗಿ ಜಿಲ್ಲಾಧಿಕಾರಿಗಳ ಕಚೇರಿಯಿಂದ ಮೆರವಣಿಗೆ ನಡೆಸುವ, ಮೆರವಣಿಗೆಯಲ್ಲಿ ವಿವಿಧ ಇಲಾಖೆಗಳ ಸ್ತಬ್ದ ಚಿತ್ರ ಪಾಲ್ಗೊಳ್ಳುವಿಕೆ, ಕನ್ನಡ ನಾಡು-ನುಡಿಗಾಗಿ ಸೇವೆ ಸಲ್ಲಿಸಿದ ಸಾಧಕರನ್ನು ಗುರುತಿಸಿ ಸನ್ಮಾನಿಸುವ ಬಗ್ಗೆ ಸಭೆಯಲ್ಲಿ ಚರ್ಚಿಸಿದರು.
ರಾಜ್ಯೋತ್ಸವದ ಪ್ರಯುಕ್ತ ನಗರದ ಪ್ರಮುಖ ಬೀದಿಗಳಲ್ಲಿ ಕನ್ನಡ ಬಾವುಟ, ಕನ್ನಡ ಕವಿ, ಸಾಹಿತಿಗಳ ಭಾವಚಿತ್ರ, ಬ್ಯಾನರ್‌ಗಳ ಅಳವಡಿಕೆಗೆ ಅನುಮತಿ ನೀಡಬೇಕು. ಕನ್ನಡ ನಾಡು–ನುಡಿಗಾಗಿ ಸೇವೆ ಸಲ್ಲಿಸಿದವರನ್ನು ಮಾತ್ರ ಸನ್ಮಾನಿಸಬೇಕು. ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು, ಅಧೀನ ಅಧಿಕಾರಿಗಳು, ಸಿಬ್ಬಂದಿ ತಪ್ಪದೇ ಹಾಜರಾಗುವಂತೆ ಕ್ರಮ ಕೈಗೊಳ್ಳಬೇಕೆಂದು ಕನ್ನಡಪರ ಸಂಘಟನೆಗಳು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಎನ್. ತಿಪ್ಪೇಸ್ವಾಮಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಸ್.ಸಿದ್ಧಲಿಂಗಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಈಶ್ವರ್ ಕು. ಮಿರ್ಜಿ, ಕನ್ನಡ ಸಂಘಟನೆಗಳ ವಿವಿಧ ಮುಖಂಡರು ಸೇರಿದಂತೆ ಇನ್ನಿತರರು ಇದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q