ಚಾಮರಾಜನಗರ: ಮುಂದಿನ ಚುನಾವಣೆಯಲ್ಲೂ ಜನರ ಶಕ್ತಿ ಹಾಗೂ ಸ್ಪೂರ್ತಿಯಿಂದ ನಮ್ಮದೇ ಸರ್ಕಾರ ಅಧಿಕಾರಕ್ಕೆ ಬರಲಿದೆ ಮತ್ತು 2028ಕ್ಕೂ ಗ್ಯಾರಂಟಿ ಯೋಜನೆಗಳು ಮುಂದುವರೆಯಲಿವೆ ಎಂದು ಡಿ.ಕೆ.ಶಿವಕುಮಾರ್ ಅವರು ಸ್ಪಷ್ಟಪಡಿಸಿದ್ದಾರೆ.
ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಹಾಗೂ ಹನೂರು ಕ್ಷೇತ್ರಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಮುಂದಿನ ಚುನಾವಣೆಯಲ್ಲಿ ಜನರ ಬೆಂಬಲದಿಂದ ನಮ್ಮದೇ ಸರ್ಕಾರ ಬರುತ್ತದೆ ಮತ್ತು 2028ಕ್ಕೂ ಕೂಡ ಗ್ಯಾರಂಟಿ ಯೋಜನೆಗಳು ತಪ್ಪದೆ ಮುಂದುವರೆಯುತ್ತವೆ ಎಂದು ತಿಳಿಸಿದರು.
ಆಕ್ಸಿಜನ್ ದುರಂತ ಸಂತ್ರಸ್ತರಿಗೆ ಸರ್ಕಾರಿ ನೌಕರಿ ನೀಡಿರುವುದು ಒಂದು ಐತಿಹಾಸಿಕ ಕಾರ್ಯವಾಗಿದ್ದು, ಕಾಂಗ್ರೆಸ್ ಪಕ್ಷವು ತಾನು ನುಡಿದಂತೆ ನಡೆದಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಮಲೆ ಮಹದೇಶ್ವರ ಬೆಟ್ಟದಲ್ಲಿ ಸಂಪುಟ ಸಭೆ ನಡೆಸಿ ಮೂರು ಸಾವಿರ ಕೋಟಿ ರೂ.ಗಳಿಗೂ ಹೆಚ್ಚು ಅಭಿವೃದ್ಧಿ ಕೆಲಸಗಳಿಗೆ ತೀರ್ಮಾನ ಕೈಗೊಳ್ಳಲಾಗಿದೆ ಹಾಗೂ ಇಡೀ ರಾಜ್ಯ ಸರ್ಕಾರ ಜನತೆಯ ಜೊತೆಗಿದೆ ಎಂಬ ಸಂದೇಶವನ್ನು ರವಾನಿಸಲಾಗಿದೆ ಎಂದರು.
ಚಾಮರಾಜನಗರ ಜಿಲ್ಲೆಯ ನೀರಾವರಿಗಾಗಿ ಒಂದು ಸಾವಿರ ಕೋಟಿ ರೂ.ಗಳಿಗೂ ಅಧಿಕ ಅನುದಾನ ನೀಡಲಾಗಿದ್ದು, ಗಿರಿಜನರಿಗೆ ಪೌಷ್ಟಿಕ ಆಹಾರ ಕಿಟ್ ಒದಗಿಸುವ ಬಗ್ಗೆಯೂ ಸರ್ಕಾರ ಗಮನಹರಿಸಲಿದೆ ಎಂದು ತಿಳಿಸಿದರು.
ಜತೆಗೆ, ಕೈಮಗ್ಗಗಳಿಗೆ ಕೈಗಾರಿಕಾ ಸ್ಥಾನಮಾನ ನೀಡಲು ತೀರ್ಮಾನಿಸಿರುವುದಾಗಿ ಹಾಗೂ ರೇಷ್ಮೆ ಕೃಷಿಯನ್ನು ಶಾಶ್ವತವಾಗಿ ಉಳಿಸಲು ಸರ್ಕಾರ ಉದ್ದೇಶಿಸಿದೆ ಎಂದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
