ಗುಬ್ಬಿ: ತಾಲೂಕಿನ ಬಂಡನಹಳ್ಳಿ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಸಮರ್ಪಕವಾಗಿ ವಿದ್ಯುತ್ ಪೂರೈಸುವಂತೆ ಒತ್ತಾಯಿಸಿ ನೂರಾರು ರೈತರು ಸೋಮವಾರ ಹೊಸಕೆರೆಯ ಬೆಸ್ಕಾಂ (BESCOM) ಕಚೇರಿ ಮುಂದೆ ಬೃಹತ್ ಪ್ರತಿಭಟನೆ ನಡೆಸಿದರು.
ಬೇಸಿಗೆಯ ಸಮಯದಲ್ಲಿ ಬೆಸ್ಕಾಂ ಅಧಿಕಾರಿಗಳು ಸರಿಯಾಗಿ ವಿದ್ಯುತ್ ನೀಡದೆ ರೈತರನ್ನು ಸತಾಯಿಸುತ್ತಿದ್ದಾರೆ. ವಿದ್ಯುತ್ ಯಾವಾಗ ಬರುತ್ತದೆ ಮತ್ತು ಯಾವಾಗ ಹೋಗುತ್ತದೆ ಎಂಬುದು ತಿಳಿಯದಂತಾಗಿದೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದರು.
ಪ್ರಸ್ತುತ ಶಾಲಾ ಮಕ್ಕಳಿಗೆ ವಾರ್ಷಿಕ ಪರೀಕ್ಷೆಗಳು ನಡೆಯುತ್ತಿದ್ದು, ವಿದ್ಯುತ್ ಇಲ್ಲದೆ ವಿದ್ಯಾರ್ಥಿಗಳ ಓದಿಗೆ ತೀವ್ರ ತೊಂದರೆಯಾಗುತ್ತಿದೆ. ಅಲ್ಲದೇ ತೋಟದ ಮನೆಗಳಲ್ಲಿ ವಾಸಿಸುವ ರೈತರು ಕುಡಿಯುವ ನೀರಿಗೂ ಪರದಾಡುವಂತಾಗಿದೆ. ಬೆಳೆಗಳಿಗೆ ನೀರು ಹರಿಸಲು ಸಾಧ್ಯವಾಗದೆ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ, ಕಳೆದ ಹಲವು ವರ್ಷಗಳಿಂದ ಈ ಸಮಸ್ಯೆ ಬಗ್ಗೆ ಮನವಿ ಮಾಡುತ್ತಿದ್ದರೂ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಪ್ರತಿಭಟನಾಕಾರರು ದೂರಿದರು.
ಸ್ಥಳಕ್ಕೆ ಭೇಟಿ ನೀಡಿದ ಬೆಸ್ಕಾಂ ಎಇಇ ರಾಜೇಶ್ ಅವರು ರೈತರ ಅಹವಾಲುಗಳನ್ನು ಆಲಿಸಿದರು. “ಪ್ರಸ್ತುತ ಲಿಂಕ್ ಲೈನ್ ಕಾಮಗಾರಿ ನಡೆಯುತ್ತಿದ್ದು, ಅದನ್ನು ಶೀಘ್ರವಾಗಿ ಮುಗಿಸಲು ಗುತ್ತಿಗೆದಾರರಿಗೆ ಸೂಚಿಸಲಾಗಿದೆ. ಶೀಘ್ರದಲ್ಲೇ ರೈತರಿಗೆ ತೊಂದರೆಯಾಗದಂತೆ ಕ್ರಮ ಕೈಗೊಂಡು ವಿದ್ಯುತ್ ಪೂರೈಸಲಾಗುವುದು” ಎಂದು ಭರವಸೆ ನೀಡಿದರು.
ಈ ಪ್ರತಿಭಟನೆಯಲ್ಲಿ ಬಂಡನಹಳ್ಳಿ, ಭೋವಿಕಾಲೋನಿ, ಭೋಗಸಂದ್ರ, ಹರದಗೆರೆ, ಕಳನಹಳ್ಳಿ ಸೇರಿದಂತೆ ವಿವಿಧ ಗ್ರಾಮಗಳ ರೈತರಾದ ಮಹಾ ರುದ್ರಸ್ವಾಮಿ, ಶಿವರಾಜು, ಮಧು, ಪ್ರಭಾಕರ್ ಹಾಗೂ ಇತರರು ಭಾಗವಹಿಸಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


