ಗುಬ್ಬಿ: ತಾಲ್ಲೂಕಿನಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ‘ಜನಸ್ಪಂದನ’ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಅಹವಾಲುಗಳ ಸುರಿಮಳೆಯೇ ಬಂದಿದೆ. ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಕಾರ್ಯಕ್ರಮದ ಚಾಲನೆ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿದರು.
ಸಭೆಯ ಆರಂಭದಿಂದಲೇ ಸಾರ್ವಜನಿಕರು ಸಾಲು ಸಾಲು ಅರ್ಜಿಗಳನ್ನು ಸಲ್ಲಿಸಿದರು. ಮುಖ್ಯವಾಗಿ ಕಂದಾಯ ಇಲಾಖೆಗೆ ಸಂಬಂಧಿಸಿದ ಪೌತಿ ಖಾತೆ, ದುರಸ್ತಿ ಹಾಗೂ ಸಾಗುವಳಿ ಚೀಟಿ ಇದ್ದರೂ ಖಾತೆ ಆಗದಿರುವ ಬಗ್ಗೆ ಅನೇಕರು ದೂರಿದರು. ಪಿಂಚಣಿ ಸಮಸ್ಯೆ ಹಾಗೂ ಕಂದಾಯ ಗ್ರಾಮಗಳ ಘೋಷಣೆಯಲ್ಲಿ ಆಗುತ್ತಿರುವ ವಿಳಂಬವನ್ನು ಬಗೆಹರಿಸುವಂತೆ ಮನವಿ ಮಾಡಿದರು.
ಪಟ್ಟಣ ಪಂಚಾಯಿತಿ ಮತ್ತು ಗ್ರಾಮ ಪಂಚಾಯಿತಿಗಳಲ್ಲಿ ಸರ್ವರ್ ಸಮಸ್ಯೆಯಿಂದಾಗಿ ಇ-ಸ್ವತ್ತು ಮತ್ತು ಇ–ಖಾತೆ ಆಗುತ್ತಿಲ್ಲ. ಇದರಿಂದ ಸರ್ಕಾರದ ಸೌಲಭ್ಯ ಪಡೆಯಲು ಸಾಧ್ಯವಾಗುತ್ತಿಲ್ಲ ಎಂದು ಸಾರ್ವಜನಿಕರು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು.
ಪಟ್ಟಣದ ಸರ್ಕಾರಿ ಶಾಲೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದ್ದು, ಕೂಡಲೇ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಬೇಕು ಎಂದು ಒತ್ತಾಯಿಸಿದರು.
ಆಧಾರ್ ತಿದ್ದುಪಡಿ ಮತ್ತು ಪಡಿತರ ಚೀಟಿ ಸಮಸ್ಯೆಗಳ ಬಗ್ಗೆ ಸ್ಥಳದಲ್ಲೇ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು. ಕೆಲವು ಫಲಾನುಭವಿಗಳಿಗೆ ಸ್ಥಳದಲ್ಲೇ ಪಡಿತರ ಚೀಟಿಗಳನ್ನು ವಿತರಿಸಲಾಯಿತು.
ಈ ಜನಸ್ಪಂದನ ಸಭೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕಿ ಸೌಮ್ಯಾ, ತಹಶೀಲ್ದಾರ್ ಆರತಿ ಬಿ., ತಾಲ್ಲೂಕು ಪಂಚಾಯಿತಿ ಇಒ ರಂಗನಾಥ್ ಸೇರಿದಂತೆ ವಿವಿಧ ಇಲಾಖೆಯ ತಾಲ್ಲೂಕು ಮಟ್ಟದ ಅಧಿಕಾರಿಗಳು, ಕಂದಾಯ ನಿರೀಕ್ಷಕರು ಮತ್ತು ಉಪ ತಹಶೀಲ್ದಾರ್‌ಗಳು ಉಪಸ್ಥಿತರಿದ್ದರು. ಸಾರ್ವಜನಿಕರ ಅಹವಾಲುಗಳನ್ನು ಶೀಘ್ರವಾಗಿ ವಿಲೇವಾರಿ ಮಾಡುವಂತೆ ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


