ಗುಬ್ಬಿ: ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಹರದಗೆರೆ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಚಿರತೆಯೊಂದು ಬಿದ್ದಿದ್ದರೂ, ಅದನ್ನು ಸ್ಥಳಾಂತರಿಸಲು ಅಧಿಕಾರಿಗಳು ಬಾರದಿರುವುದು ಸಾರ್ವಜನಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
ಘಟನೆಯ ಹಿನ್ನೆಲೆ:
ಹರದಗೆರೆ ಗ್ರಾಮದ ಸುತ್ತಮುತ್ತ ಕಳೆದ ಕೆಲವು ದಿನಗಳಿಂದ ಚಿರತೆ ಹಾವಳಿ ಹೆಚ್ಚಾಗಿತ್ತು. ಈ ಹಿನ್ನೆಲೆಯಲ್ಲಿ ಗ್ರಾಮಸ್ಥರ ಮನವಿಯ ಮೇರೆಗೆ ಅರಣ್ಯ ಇಲಾಖೆಯು ಹರದಗೆರೆಯ ಬೋವಿ ಕಾಲೋನಿಯ ಗೋವಿಂದಪ್ಪ ಎಂಬುವವರ ಜಮೀನಿನಲ್ಲಿ ಚಿರತೆ ಸೆರೆಗಾಗಿ ಬೋನು ಅಳವಡಿಸಿತ್ತು. ನಿನ್ನೆ ರಾತ್ರಿ ಈ ಬೋನಿಗೆ ಚಿರತೆಯು ಯಶಸ್ವಿಯಾಗಿ ಲಾಕ್ ಆಗಿದೆ.
ಅಧಿಕಾರಿಗಳ ನಡೆಗೆ ಆಕ್ರೋಶ:
ಚಿರತೆ ಬೋನಿಗೆ ಬಿದ್ದ ವಿಷಯ ತಿಳಿದರೂ ಗುಬ್ಬಿ ವಲಯ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿಲ್ಲ ಎಂಬ ಆರೋಪ ಕೇಳಿಬಂದಿದೆ. ಚಿರತೆ ಸೆರೆಯಾಗಿ ಒಂದು ದಿನ ಕಳೆದರೂ ಅದನ್ನು ಕಾಡಿಗೆ ಬಿಡುವ ಅಥವಾ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸುವ ಗೋಜಿಗೆ ಅಧಿಕಾರಿಗಳು ಹೋಗಿಲ್ಲ.
ಸಾರ್ವಜನಿಕರು ಫೋನ್ ಮೂಲಕ ಸಂಪರ್ಕಿಸಲು ಪ್ರಯತ್ನಿಸಿದರೂ ಅಧಿಕಾರಿಗಳು ಲಭ್ಯವಾಗುತ್ತಿಲ್ಲ. ಸೆರೆಯಾದ ಚಿರತೆಯನ್ನು ನೋಡಲು ಜನ ಜಮಾಯಿಸುತ್ತಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಲು ಅಧಿಕಾರಿಗಳ ಅನುಪಸ್ಥಿತಿ ಎದ್ದು ಕಾಣುತ್ತಿದೆ.
ಅರಣ್ಯ ಇಲಾಖೆಯ ಈ ‘ಡೋಂಟ್ ಕೇರ್’ ಪ್ರವೃತ್ತಿಯಿಂದ ಹರದಗೆರೆ ಗ್ರಾಮಸ್ಥರು ಸಿಟ್ಟಿಗೆದ್ದಿದ್ದು, ಕೂಡಲೇ ಚಿರತೆಯನ್ನು ಸ್ಥಳಾಂತರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.
ವರದಿ: ಚೇತನ್ ಗೌಡ, ಗುಬ್ಬಿ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


