ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ಮತ್ತು ಬಿಜೆಪಿಯ ಒಕ್ಕಲಿಗ ನಾಯಕರನ್ನು ವ್ಯವಸ್ಥಿತವಾಗಿ ಮುಗಿಸಲು ಹೊರಟ್ಟಿದ್ದಾರೆ ಎಂದು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಗಂಭೀರ ಆರೋಪ ಮಾಡಿದ್ದಾರೆ.
ಚನ್ನಪಟ್ಟಣ ವಿಧಾನ ಸಭಾ ಉಪ ಚುನಾವಣೆ ಹಿನ್ನೆಲೆ ಜೆಡಿಎಸ್ ಹಾಗೂ ಬಿಜೆಪಿ ನಡುವೆ ಜಟಾಪಟಿ ಆರಂಭಗೊಂಡಿದ್ದು, ಹೆಚ್ ಡಿಕೆ ಪುತ್ರ ಪ್ರೇಮ ಇದೀಗ ಮೈತ್ರಿ ನಾಯಕರಿಗೆ ಸಂಕಟ ತಂದಿಟ್ಟಿದೆ. ಈ ನಡುವೆ ಟಿಕೆಟ್ ಆಕಾಂಕ್ಷಿಯಾಗಿದ್ದ ಬಿಜೆಪಿ ನಾಯಕ ಸಿ.ಪಿ.ಯೋಗೇಶ್ವರ್ ಕುಮಾರಸ್ವಾಮಿ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.
ಬಿಜೆಪಿಗೆ ಜೆಡಿಎಸ್ ಅನಿವಾರ್ಯವಲ್ಲ. ಆದರೆ, ಜೆಡಿಎಸ್‌ಗೆ ಬಿಜೆಪಿ ಆನಿವಾರ್ಯ ಎನ್ನುವುದನ್ನು ಮನಗಾಣಬೇಕು ಎಂದೂ ತೀಕ್ಷ್ಯವಾಗಿ ಯೋಗೇಶ್ವರ್ ಪ್ರತಿಕ್ರಿಯಿಸಿದ್ದಾರೆ. ನಾನು ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ. ಕುಮಾರಸ್ವಾಮಿ ನನಗೆ ಮೋಸ ಮಾಡಿದ ಮೇಲೆ ನಾನು ಸ್ಪರ್ಧಿಸಲೇಬೇಕು. ಬುಧವಾರ ಚನ್ನಪಟ್ಟಣದಲ್ಲಿ ಪಕ್ಷದ ಪ್ರಮುಖರ ಸಭೆ ಕರೆದಿದ್ದೇನೆ. ಅಲ್ಲಿ ನನ್ನ ಮುಂದಿನ ರಾಜಕೀಯ ಹೆಜ್ಜೆಯ ಬಗ್ಗೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತೇನೆ ಎಂದು ತಿಳಿಸಿದರು.
ಹಳೆ ಮೈಸೂರು ಭಾಗದಲ್ಲಿ ಬಿಜೆಪಿಯನ್ನು ಮತ್ತು ಬಿಜೆಪಿಯ ಒಕ್ಕಲಿಗ ಸಮುದಾಯದ ನಾಯಕರನ್ನು ಮುಗಿಸಬೇಕು ಎಂಬುದೇ ಕುಮಾರಸ್ವಾಮಿ ಅವರ ಮುಖ್ಯ ಉದ್ದೇಶವಾಗಿದೆ. ಮಂಡ್ಯದಲ್ಲಿ ಸುಮಲತಾ ಅಂಬರೀಷ್, ಹಾಸನದಲ್ಲಿ ಪ್ರೀತಂಗೌಡ, ಮೈಸೂರಿನಲ್ಲಿ ಪ್ರತಾಪ್ ಸಿಂಹ, ಚಿಕ್ಕಮಗಳೂರಿನಲ್ಲಿ ಸಿ.ಟಿ.ರವಿ ಮುಗಿಸಿದ ಮೇಲೆ ಈಗ ರಾಮನಗರದಲ್ಲಿ ನನ್ನನ್ನು ಮುಗಿಸಲು ಮುಂದಾಗಿದ್ದಾರೆ ಎಂದು ಸಿ.ಪಿ.ಯೋಗೇಶ್ವರ್ ಅವರು ಗಂಭೀರವಾಗಿ ಆರೋಪಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296