ಮಧುಗಿರಿ: ಇಂದಿನ ಒತ್ತಡದ ಜೀವನಶೈಲಿಯಲ್ಲಿ ಜನರು ಹಣ ಸಂಪಾದನೆಯ ಹಿಂದೆ ಓಡುತ್ತಾ ಆರೋಗ್ಯದ ಕಡೆ ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಆರೋಗ್ಯದ ನಿರ್ಲಕ್ಷ್ಯ ಜೀವಕ್ಕೆ ಮಾರಕವಾಗಬಹುದು ಎಂಬುದನ್ನು ಪ್ರತಿಯೊಬ್ಬರೂ ಅರಿತುಕೊಳ್ಳಬೇಕು. ಆರೋಗ್ಯವೇ ನಿಜವಾದ ಭಾಗ್ಯ ಎಂಬ ಮನೋಭಾವ ಎಲ್ಲರಲ್ಲೂ ಮೂಡಿದಾಗ ಮಾತ್ರ ಆರೋಗ್ಯವಂತ ಸಮಾಜ ನಿರ್ಮಾಣ ಸಾಧ್ಯ ಎಂದು ಎಲೆರಾಂಪುರದ ಕೊಂಚಿಟಿಗ ಮಠದ ಪೀಠಾಧ್ಯಕ್ಷರಾದ ಡಾ.ಶ್ರೀ ಹನುಮಂತನಾಥ ಸ್ವಾಮೀಜಿ ಅಭಿಪ್ರಾಯಪಟ್ಟರು.
ತಾಲೂಕಿನ ಕಸಬಾ ಬಸವನಹಳ್ಳಿಯಲ್ಲಿ ಕೊಂಚಶ್ರೀ ಗಿರಿಬಳಗ ಟ್ರಸ್ಟ್ ಹಾಗೂ ಆಯುಷ್ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಇಂದು ಪಟ್ಟಣ, ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿಯೂ ಜನರು ಹಣದ ಹಿಂದೆ ಓಡುವ ಭರದಲ್ಲಿ ತಮ್ಮ ಆರೋಗ್ಯವನ್ನು ಕಡೆಗಣಿಸುತ್ತಿದ್ದಾರೆ. ಇದು ಸರಿಯಾದ ಬೆಳವಣಿಗೆಯಲ್ಲ. ಉತ್ತಮ ಪರಿಸರ, ಸ್ನೇಹ, ಸಹಬಾಳ್ವೆ ಹಾಗೂ ಪರಸ್ಪರ ಪ್ರೀತಿಯ ಮಹತ್ವವನ್ನು ಅರಿಯಬೇಕು. ದ್ವೇಷ ಮತ್ತು ಅಸೂಯೆಗಳನ್ನು ಬದಿಗಿಟ್ಟು ಪ್ರತಿಯೊಬ್ಬರೂ ಪ್ರೀತಿ, ವಿಶ್ವಾಸದಿಂದ ಬದುಕಿದಾಗ ನೆಮ್ಮದಿಯ ಜೀವನ ಸಾಧ್ಯವಾಗುತ್ತದೆ ಎಂದರು.
ಇಂತಹ ಆರೋಗ್ಯ ತಪಾಸಣಾ ಶಿಬಿರಗಳು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ನಿರಂತರವಾಗಿ ನಡೆಯಬೇಕು. ಸರ್ಕಾರ ಹಾಗೂ ಸಂಘ-ಸಂಸ್ಥೆಗಳು ಗ್ರಾಮೀಣ ಜನರ ಆರೋಗ್ಯ ತಪಾಸಣೆ ನಡೆಸಿ, ಅಗತ್ಯವಿರುವವರಿಗೆ ಉಚಿತ ಚಿಕಿತ್ಸೆ ದೊರೆಯುವಂತಹ ವ್ಯವಸ್ಥೆ ಕಲ್ಪಿಸಬೇಕು. ವಿಶೇಷವಾಗಿ ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಕೈಗೆಟುಕುವ ದರದಲ್ಲಿ ಗುಣಮಟ್ಟದ ಆರೋಗ್ಯ ಸೇವೆ ದೊರೆಯುವಂತೆ ಎಲ್ಲರೂ ಶ್ರಮಿಸಬೇಕು. ಸಮಾಜ ಸೇವೆಯಲ್ಲಿ ಸಂಘ-ಸಂಸ್ಥೆಗಳು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ತಾಲೂಕು ಆಯುರ್ವೇದ ವೈದ್ಯಾಧಿಕಾರಿಗಳಾದ ಡಾ. ನವೀನ್, ಡಾ. ತಿಪ್ಪೇಸ್ವಾಮಿ, ತಾಲೂಕು ಆಯುರ್ವೇದ ಆಸ್ಪತ್ರೆಯ ಸಿಬ್ಬಂದಿ, ಕುಂಚಶ್ರೀ ಗಿರಿಬಳಗದ ಅಧ್ಯಕ್ಷ ರವಿಶಂಕರ್, ಕಾರ್ಯದರ್ಶಿ ಕೊಂಡವಾಡಿ ಶಿವರಾಮ್, ನಿರ್ದೇಶಕರಾದ ವಿಜಯಕುಮಾರ್, ರಂಗನಾಥ್, ಕೃಷ್ಣಮೂರ್ತಿ, ಕಿತ್ತಗಳಿ ಮಂಜುನಾಥ್, ಗುಟ್ಟೇ ವೀರೇಂದ್ರ, ಕಾರ್ಮರಡಿ ಮಹೇಶ್, ಅನಿಲ್ ಕುಮಾರ್ ಹಾಗೂ ಸ್ಥಳೀಯರಾದ ರಮೇಶ್ ಉಪಸ್ಥಿತರಿದ್ದರು.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
