ವಿಧಾನಪರಿಷತ್ ಹಾಗೂ ರಾಜ್ಯಸಭೆ ಚುನಾವಣೆ ಸಂಬಂಧ ಇಂದು ಕೋರ್ ಕಮಿಟಿ ಸಭೆ ನಡೆಯಲಿದ್ದು, ಅಭ್ಯರ್ಥಿಗಳ ಆಯ್ಕೆ ಮಾಡುವ ಕುರಿತು ಚರ್ಚಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕೋರ್ ಕಮಿಟಿ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪಕ್ಷದ ಸಂಘಟನಾ ಸಹಕಾರ್ಯದರ್ಶಿ ಬಿ.ಎಲ್.ಸಂತೋಷ್, ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್‍ಕುಮಾರ್ ಕಟೀಲ್, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಸೇರಿದಂತೆ ಹಲವು ಪ್ರಮುಖರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ರಾಜ್ಯಸಭಾ ಚುನಾವಣೆ ಹಾಗೂ ಪರಿಷತ್ ಚುನಾವಣೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಕೇಂದ್ರ ವರಿಷ್ಠರಿಗೆ ಕಳುಹಿಸಿಕೊಡಲಾಗುವುದು. ಎರಡು ಪದವೀಧರ ಮತ್ತು ಎರಡು ಶಿಕ್ಷಕರ ಕ್ಷೇತ್ರಕ್ಕೂ ಅಭ್ಯರ್ಥಿಗಳ ಹೆಸರನ್ನು ಪಕ್ಷದ ವೇದಿಕೆಯಲ್ಲಿ ಚರ್ಚಿಸಿ ನಂತರ ತೀರ್ಮಾನ ಮಾಡುತ್ತೇವೆ ಎಂದರು.
ಆಕಾಂಕ್ಷಿಗಳ ಪಟ್ಟಿ ಸಾಕಷ್ಟಿದ್ದರೂ ಅಂತಿಮವಾಗಿ ಯಾರಿಗೆ ನೀಡಬೇಕು ಎಂಬುದನ್ನು ಪಕ್ಷದ ಪ್ರಮುಖರು ತೀರ್ಮಾನಿಸುತ್ತಾರೆ. ಹೈಕಮಾಂಡ್ ನಿರ್ಧಾರಕ್ಕೆ ಎಲ್ಲರೂ ಬದ್ದರಾಗಿರಬೇಕಾಗುತ್ತದೆ ಎಂದು ಸಿಎಂ ಸೂಚಿಸಿದರು.ದಾವೋಸ್ ಪ್ರವಾಸ ಕುರಿತಂತೆ ಪ್ರತಿಕ್ರಿಯಿಸಿದ ಸಿಎಂ ಬೊಮ್ಮಾಯಿ ಅವರು ಇಡೀ ದೇಶದಲ್ಲಿ ನನ್ನನ್ನು ಸೇರಿದಂತೆ ಇಬ್ಬರಿಗೆ ಮಾತ್ರ ಆಹ್ವಾನ ನೀಡಿದ್ದಾರೆ. ಪ್ರಸ್ತುತ ರಾಜ್ಯದಲ್ಲಿ ಚುನಾವಣೆ ಎದುರಾಗಿರುವುದರಿಂದ ಹೋಗಬೇಕೆ ಬೇಡವೇ ಎಂಬುದರ ಬಗ್ಗೆ ನಾನು ಇನ್ನೂ ತೀರ್ಮಾನಿಸಿಲ್ಲ ಎಂದು ಸ್ಪಷ್ಟಪಡಿಸಿದರು.ದಾವೋಸ್‍ಗೆ ನಾನೇ ಹೋಗಬೇಕೆ ಇಲ್ಲವೇ ಸಂಬಂಧಪಟ್ಟ ಸಚಿವರು ಹಾಗೂ ಅಧಿಕಾರಿಗಳನ್ನು ಕಳುಹಿಸಿಕೊಡಬೇಕೆ ಎಂಬುದರ ಬಗ್ಗೆ ಇಂದು ನಿರ್ಧಾರ ಮಾಡುತ್ತೇನೆ. ಸಂಜೆಯೊಳಗೆ ಅಂತಿಮ ನಿರ್ಧಾರ ಕೈಗೊಳ್ಳುವುದಾಗಿ ಹೇಳಿದರು.
ಸಚಿವ ಸಂಪುಟ ವಿಸ್ತರಣೆ/ಪುನಾರಚನೆ ಬಗ್ಗೆ ದೆಹಲಿಯಿಂದ ಮೂರು ದಿನದೊಳಗೆ ಸಂದೇಶ ಬರಲಿಲ್ಲವೇ ಎಂಬ ಮತ್ತೊಂದು ಪ್ರಶ್ನೆಗೆ ರಾಜಕಾರಣದಲ್ಲಿ ಸಮಯ ಮತ್ತು ದಿನಗಳನ್ನು ಪರಿಗಣನೆ ಮಾಡಲು ಬರುವುದಿಲ್ಲ ಎಂದು ಸೂಚ್ಯವಾಗಿ ಹೇಳಿದರು.
ವರದಿ ಆಂಟೋನಿ ಬೇಗೂರು


