ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಸಂಬಂಧ 20 ಶಾಸಕರ ನೂತನ ಪಟ್ಟಿ ಬಿಡುಗಡೆಯಾಗುತ್ತಿದ್ದಂತೆ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಭಾರೀ ಅಸಮಾಧಾನ ಸ್ಫೋಟಗೊಂಡಿದೆ. ಮಂತ್ರಿಗಿರಿ ಸಿಗದಿದ್ದಕ್ಕೆ ಮುನಿಸಿಕೊಂಡಿರುವ ಕೆಲ ಹಿರಿಯ ಶಾಸಕರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಬಹಿರಂಗವಾಗಿ ಬೆದರಿಕೆ ಹಾಕಿದ್ದಾರೆ.
ಈ ರಾಜೀನಾಮೆ ಬೆದರಿಕೆಗಳನ್ನು ಕಾಂಗ್ರೆಸ್ ಹೈಕಮಾಂಡ್ ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ಅಸಮಾಧಾನಗೊಂಡ ಶಾಸಕರಿಗೆ ಶಮನ ಮಾಡಲು ಕಠಿಣ ನಿಲುವು ತಳೆದಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಕರೆ ಮಾಡಿ ಮಾಹಿತಿ ಪಡೆದಿರುವ ಪಕ್ಷದ ವರಿಷ್ಠರು, ಮಂತ್ರಿಗಿರಿ ಸಿಗದ ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡುವಂತೆ ಸೂಚಿಸಿದ್ದಾರೆ. ಒಂದು ವೇಳೆ ನಿಗಮ ಮಂಡಳಿಯನ್ನೂ ನಿರಾಕರಿಸಿ ಯಾರಾದರೂ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದರೆ, ಅದನ್ನು ತಕ್ಷಣವೇ ಅಂಗೀಕರಿಸುವಂತೆ ಸಿಎಂಗೆ ಸ್ಪಷ್ಟ ನಿರ್ದೇಶನ ನೀಡಿ ಭರ್ಜರಿ ಶಾಕ್ ನೀಡಿದ್ದಾರೆ.
ಈ ಬೆಳವಣಿಗೆಯ ನಡುವೆ ಇಂಡಿ ಕ್ಷೇತ್ರದ ಶಾಸಕ ಯಶವಂತರಾಯಗೌಡ ಪಾಟೀಲ್ ಈಗಾಗಲೇ ಸ್ಪೀಕರ್ ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಕೆ ಮಾಡಿದ್ದಾರೆ. ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಶಾಸಕ ಸ್ಥಾನ ಹಾಗೂ ನಿಗಮ ಮಂಡಳಿ ಹುದ್ದೆಗೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ. ಭದ್ರಾವತಿಯ ಶಾಸಕ ಬಿ.ಕೆ. ಸಂಗಮೇಶ್ ಅವರು ಪಕ್ಷದ ನಿರ್ಧಾರಕ್ಕೆ ತೀವ್ರ ಬೇಸರ ವ್ಯಕ್ತಪಡಿಸಿದ್ದು, ಕ್ಷೇತ್ರದ ಜನರೊಂದಿಗೆ ಸಭೆ ನಡೆಸಿ ರಾಜೀನಾಮೆ ಕೊಡುವ ಕುರಿತು ತೀರ್ಮಾನಿಸುವುದಾಗಿ ತಿಳಿಸಿದ್ದಾರೆ.
ನರಸಿಂಹರಾಜ ಕ್ಷೇತ್ರದ ಶಾಸಕ ತನ್ವೀರ್ ಸೇಠ್ ಕೂಡ ಸಚಿವರ ಪಟ್ಟಿಯ ಬಗ್ಗೆ ತೀವ್ರ ನಿರಾಶೆ ವ್ಯಕ್ತಪಡಿಸಿದ್ದಾರೆ. ಹೈಕಮಾಂಡ್‌ನ ಈ ಕಠಿಣ ನಿರ್ಧಾರ ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
