ತುಮಕೂರು: ಕಬಡ್ಡಿ ಪಂದ್ಯದಲ್ಲಿ ವಿಜಯಪುರ ತಂಡ ಗೆಲ್ಲುತ್ತದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಜತೆಗೆ ಬೆಟ್ಟಿಂಗ್ ಕಟ್ಟಿದ ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ 500 ರೂಪಾಯಿ ಕಳೆದುಕೊಂಡಿದ್ದಾರಂತೆ!
ನಗರದಲ್ಲಿ ಭಾನುವಾರ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾವಳಿ ಫೈನಲ್ ಪಂದ್ಯಗಳು ನಡೆದವು. ಬಾಲಕರ ವಿಭಾಗದ ಅಂತಿಮ ಪಂದ್ಯದಲ್ಲಿ ದಕ್ಷಿಣ ಕನ್ನಡ ಮತ್ತು ವಿಜಯಪುರ ತಂಡಗಳು ಮುಖಾಮುಖಿಯಾದವು. ದಕ್ಷಿಣ ಕನ್ನಡ ತಂಡವು 36–26 ಅಂಕಗಳಿಂದ ವಿಜಯಪುರ ತಂಡಕ್ಕೆ ಸೋಲುಣಿಸಿತು.
ವಿಜೇತ ತಂಡಕ್ಕೆ ಪ್ರಶಸ್ತಿ ವಿತರಿಸಿದ ನಂತರ ಪರಮೇಶ್ವರ ಮಾತನಾಡಿದರು. ನಾನು 500 ಕಳೆದುಕೊಂಡು ಬಿಟ್ಟೆ. ವಿಜಯಪುರ ತಂಡ ಗೆಲ್ಲುತ್ತದೆ ಎಂದು ಜಿಲ್ಲಾಧಿಕಾರಿ ಜತೆ ಬೆಟ್ಟಿಂಗ್ ಮಾಡಿಕೊಂಡಿದ್ದೆ ಎಂದು ಗೃಹ ಸಚಿವರು ಹೇಳಿದರು.
ರಾಜ್ಯದ ವಿವಿಧ ಜಿಲ್ಲೆಗಳಿಂದ 62 ತಂಡಗಳು ಈ ಕಬಡ್ಡಿ ಪಂದ್ಯಾವಳಿಯಲ್ಲಿ ಭಾಗವಹಿಸಿ, ಉತ್ತಮ ಪ್ರದರ್ಶನ ನೀಡಿವೆ. ಈ ಕಬಡ್ಡಿ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದ ಎಲ್ಲ ತಂಡಗಳಿಗೆ ಅಭಿನಂದನೆಗಳು. ಕ್ರೀಡೆಯಲ್ಲಿ ಸೋಲು-ಗೆಲುವು ಸಾಮಾನ್ಯ. ಆದರೆ ಕ್ರೀಡಾಕೂಟದಲ್ಲಿ ಭಾಗವಹಿಸುವುದು ಬಹುಮುಖ್ಯ ಎಂದರು.
ಡಿಸೆಂಬರ್ ತಿಂಗಳಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪುರುಷ ಮತ್ತು ಮಹಿಳಾ ತಂಡಗಳು ಭಾಗವಹಿಸಿ ಉತ್ತಮ ಪ್ರದರ್ಶನ ನೀಡುವ ಮೂಲಕ ಜಯಗಳಿಸಿ ರಾಜ್ಯಕ್ಕೆ ಕೀರ್ತಿ ತರಬೇಕು ಎಂದು ಶುಭ ಹಾರೈಸಿದರು.
ಜನವರಿ 15 ರಿಂದ 7 ದಿನಗಳವರೆಗೆ ತುಮಕೂರು ನಗರದಲ್ಲಿ ರಾಜ್ಯಮಟ್ಟದ ಒಲಂಪಿಕ್ಸ್ ಕ್ರೀಡಾಕೂಟ ನಡೆಯಲಿದೆ. ಅಥ್ಲೆಟಿಕ್ಸ್, ಟೆನ್ನಿಸ್, ಕಬಡ್ಡಿ, ಸ್ವಿಮ್ಮಿಂಗ್ ಸೇರಿದಂತೆ ಸುಮಾರು 27 ಕ್ರೀಡಾಕೂಟಗಳು ನಡೆಯಲಿವೆ. ಈ ಕ್ರೀಡಾಕೂಟದಲ್ಲಿ ರಾಜ್ಯದ ವಿವಿಧೆಡೆಗಳಿಂದ 4600 ತಂಡಗಳು ಭಾಗವಹಿಸುವ ನಿರೀಕ್ಷೆ ಇದೆ. ಎಲ್ಲವನ್ನು ಅಚ್ಚುಕಟ್ಟಾಗಿ ನಡೆಸಿಕೊಡಲಾಗುವುದು ಎಂದು ತಿಳಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC