ಬೆಂಗಳೂರು : ನಿಗಮ ಮಂಡಳಿಗಳಿಗೆ ನಿರ್ದೇಶಕರು ಹಾಗೂ ಸದಸ್ಯರಗಳನ್ನು ಆಯ್ಕೆ ಮಾಡಲು ಮುಖ್ಯಮಂತ್ರಿಯವರು ವಹಿಸಿರುವ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುತ್ತೇನೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ತಿಳಿಸಿದರು.
ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಂಟುವರೆ ವರ್ಷ ಕೆಪಿಸಿಸಿ ಅಧ್ಯಕ್ಷನಾಗಿ ಕೆಲಸ ಮಾಡಿ, ಚುನಾವಣೆಗಳಿಗೆ ಅಭ್ಯರ್ಥಿಗಳ ಆಯ್ಕೆ ಮತ್ತು ನಿಗಮ ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಿದ ಅನುಭವವಿದೆ. ಆದ್ದರಿಂದ ಯಾವ ತೊಂದರೆಯಾಗುವುದಿಲ್ಲ. ಒಂದು ತಿಂಗಳೊಳಗಾಗಿ ಆಯ್ಕೆ ಮಾಡಿ, ಪಟ್ಟಿ ನೀಡುತ್ತೇನೆ ಎಂದು ಹೇಳಿದರು.
ತುರ್ತುಪರಿಸ್ಥಿತಿ 49 ವರ್ಷ ಆದ ಹಿನ್ನೆಲೆಯಲ್ಲಿ ಬಿಜೆಪಿಯವರ ಹೇಳಿಕೆಗಳ ಕುರಿತ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿ, ದೇಶದಲ್ಲಿ ಜ್ವಲಂತ ಸಮಸ್ಯೆಗಳಿವೆ. ಜನರ ಸಮಸ್ಯೆಗಳಿಗೆ ಪರಿಹಾರ ಸಿಗಬೇಕು. ದೇಶದಲ್ಲಿ ಬಡತನ ಇನ್ನೂ ಇದೆ. ಮತ್ತಷ್ಟು ಅಭಿವೃದ್ಧಿಯಾಗಬೇಕು, ಉದ್ಯೋಗ ಸಿಗಬೇಕಿದೆ. ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಳ್ಳಲು ನೀಟ್ ಸಂಸ್ಥೆಗಳನ್ನು ಮಾಡಿ ಸರಿಯಾಗಿ ಕೆಲಸ ಮಾಡದಿರುವುದು, ಮಕ್ಕಳ ಭವಿಷ್ಯ ಹಾಳು ಮಾಡುತ್ತಿರುವುದು ದೊಡ್ಡ ಸಮಸ್ಯೆಯಾಗಿದೆ. ಇದನ್ನೆಲ್ಲ ಬಿಟ್ಟು 49 ವರ್ಷದ ಹಿಂದೆ ತುರ್ತು ಪರಿಸ್ಥಿತಿ ಹೇರಿರುವುದನ್ನು ಮಾತನಾಡಲು ಹೊರಟಿರುವ ಬಿಜೆಪಿಯವರಿಗೆ ದೇಶದ ಅಭಿವೃದ್ಧಿ, ಭವಿಷ್ಯ, ಜನರ ಬಗ್ಗೆ ಕಾಳಾಜಿ ಇಲ್ಲದಿರುವುದನ್ನು ತೋರಿಸುತ್ತದೆ ಎಂದು ತಿರುಗೇಟು ನೀಡಿದರು.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳನ್ನು ತುಮಕೂರು ಜೈಲಿಗೆ ಸ್ಥಳಾಂತರದ ಕುರಿತು ಮಾತನಾಡಿ, ಎಲ್ಲರು ಒಂದೇ ಜೈಲಿನಲ್ಲಿ ಇರುವುದು ಸೂಕ್ತವಲ್ಲ ಎಂಬ ಕಾರಣದಿಂದ ಬಂಧಿಖಾನೆ ಅಧಿಕಾರಿಗಳು ಮತ್ತು ಪೊಲೀಸರು ಈ ತೀರ್ಮಾನ ತೆಗೆದುಕೊಂಡಿದ್ದಾರೆ. ಹೀಗಾಗಿ ತುಮಕೂರು ಜೈಲಿಗೆ ಸ್ಥಳಾಂತರಿಸಿದ್ದಾರೆ ಎಂದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


