ಬೆಳಗಾವಿ: ಈ ಬಾರಿಯೂ ಹೊಸ ವರ್ಷಾಚರಣೆಗೆ ಕೊರೊನಾದ ಕರಿನೆರಳು ಬಿದ್ದಿದ್ದು, ರಾಜ್ಯದಾದ್ಯಂತ ಹೊಸ ವರ್ಷಾಚರಣೆಗೆ ಕೆಲವು ನಿರ್ಬಂಧ ಹೇರಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಕೋವಿಡ್ ನಿಯಂತ್ರಣ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಂಗಳವಾರ ಇಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ನಿರ್ಧಾರ ಕೈಗೊಂಡಿದ್ದು, ಕೊವಿಡ್ ಹರಡುವಿಕೆ ತಡೆಯಲು ಸರ್ಕಾರ ಹಲವು ನಿರ್ಬಂಧಗಳನ್ನು ಹೇರುವ ಬಗ್ಗೆ ತಿಳಿಸಿದ್ದಾರೆ.
ಡಿಸೆಂಬರ್ 30ರಿಂದ ಜನವರಿ 2ರವರೆಗೂ ರಾಜ್ಯದಾದ್ಯಂತ ನಿರ್ಬಂಧ ಜಾರಿಯಲ್ಲಿರಲಿದೆ. ಈ ಅವಧಿಯಲ್ಲಿ ಬಹಿರಂಗ ಸಂಭ್ರಮಾಚರಣೆಗೆ ಅವಕಾಶ ಇರುವುದಿಲ್ಲ. ಬಾರ್, ರೆಸ್ಟೋರೆಂಟ್ ಮತ್ತಿತರ ಸ್ಥಳಗಳಲ್ಲಿ ಒಟ್ಟು ಸಾಮರ್ಥ್ಯದ ಶೇಕಡ 50ರಷ್ಟು ಮಂದಿಗೆ ಮಾತ್ರ ಪ್ರವೇಶ ನೀಡಬೇಕು. ಅಲ್ಲಿನ ಎಲ್ಲ ಸಿಬ್ಬಂದಿ ಎರಡು ಡೋಸ್ ಕೋವಿಡ್ ಲಸಿಕೆ ಪಡೆದಿರುವುದು ಕಡ್ಡಾಯ ಎಂದರು.
ಬೆಂಗಳೂರಿನ ಎಂ.ಜಿ. ರಸ್ತೆ ಮತ್ತು ಬ್ರಿಗೇಡ್ ರಸ್ತೆಯಲ್ಲಿ ಈ ಹಿಂದೆ ನಡೆಯುತ್ತಿದ್ದ ಮಾದರಿಯ ಹೊಸ ವರ್ಷಾಚರಣೆಗೆ ರಾಜ್ಯದ ಯಾವುದೇ ಭಾಗದಲ್ಲೂ ಅವಕಾಶ ಇರುವುದಿಲ್ಲ ಎಂದು ತಿಳಿಸಿದರು.