ಔರಾದ: ಸಾರ್ವಜನಿಕರೊಂದಿಗೆ ನೇರ ಸಂಪರ್ಕ ಸಾಧಿಸುವ ಮತ್ತು ಪೊಲೀಸ್ ಇಲಾಖೆ ಹಾಗೂ ಜನರ ನಡುವಿನ ಬಾಂಧವ್ಯವನ್ನು ಬಲಪಡಿಸುವ ಉದ್ದೇಶದಿಂದ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಮಹಾರಾಜವಾಡಿ ಗ್ರಾಮದಲ್ಲಿ ಬುಧವಾರ ಸಂಜೆ “ಮನೆ ಮನೆಗೆ ಪೊಲೀಸ್” ಎಂಬ ವಿನೂತನ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಸಂತಪುರ ಪೊಲೀಸ್ ಇಲಾಖೆಯ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಈ ಕಾರ್ಯಕ್ರಮದಡಿ ಪೊಲೀಸ್ ಅಧಿಕಾರಿಗಳು ಗ್ರಾಮದ ಪ್ರತಿ ಮನೆಗೆ ಭೇಟಿ ನೀಡಿ, ಸಾರ್ವಜನಿಕರ ಸಮಸ್ಯೆಗಳನ್ನು ಖುದ್ದಾಗಿ ಆಲಿಸಿದರು. ಇದೇ ವೇಳೆ ವಿವಿಧ ಕಾನೂನು ವಿಷಯಗಳ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯವನ್ನೂ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಅಧಿಕಾರಿಗಳು, ಮಹಿಳೆಯರು ಮತ್ತು ಮಕ್ಕಳ ರಕ್ಷಣೆಗೆ ಇಲಾಖೆ ನೀಡುವ ಆದ್ಯತೆಯ ಬಗ್ಗೆ ತಿಳಿಸಿದರು. ಹೆಚ್ಚುತ್ತಿರುವ ಆನ್ಲೈನ್ ವಂಚನೆಗಳ ಬಗ್ಗೆ ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಯಿತು. ಯುವಜನತೆ ಮಾದಕ ವ್ಯಸನಕ್ಕೆ ಬಲಿಯಾಗದಂತೆ ಜಾಗೃತಿ ಮೂಡಿಸಲಾಯಿತು. ರಸ್ತೆ ಸುರಕ್ಷತೆಗಾಗಿ ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಮನವಿ ಮಾಡಲಾಯಿತು.
ಸಂತಪುರ ಪೊಲೀಸ್ ಠಾಣೆಯ ಪಿ.ಎಸ್.ಐ ದಿನೇಶ್ ಅವರು ಮಾತನಾಡಿ, “ಪೊಲೀಸ್ ಮತ್ತು ಸಾರ್ವಜನಿಕರ ನಡುವೆ ನಂಬಿಕೆಯನ್ನು ವೃದ್ಧಿಸುವುದೇ ಈ ಯೋಜನೆಯ ಮೂಲ ಗುರಿ. ಗ್ರಾಮದಲ್ಲಿ ಯಾವುದೇ ಅನುಮಾನಾಸ್ಪದ ಚಟುವಟಿಕೆಗಳು ಅಥವಾ ಅಪರಿಚಿತ ವ್ಯಕ್ತಿಗಳು ಕಂಡುಬಂದಲ್ಲಿ ತಕ್ಷಣವೇ ಪೊಲೀಸ್ ಇಲಾಖೆಗೆ ಮಾಹಿತಿ ನೀಡಬೇಕು” ಎಂದು ಕೋರಿದರು.
ಪೊಲೀಸರೇ ನೇರವಾಗಿ ಮನೆ ಬಾಗಿಲಿಗೆ ಬಂದು ಸಮಸ್ಯೆ ಆಲಿಸುತ್ತಿರುವುದಕ್ಕೆ ಗ್ರಾಮಸ್ಥರು ಸಂತಸ ವ್ಯಕ್ತಪಡಿಸಿದ್ದಾರೆ. ಈ ಕ್ರಮದಿಂದ ಜನರಲ್ಲಿ ಭದ್ರತಾ ಭಾವನೆ ಹೆಚ್ಚಾಗಿದ್ದು, ಇಲಾಖೆಯ ಮೇಲಿನ ಗೌರವ ಇಮ್ಮಡಿಗೊಂಡಿದೆ ಎಂದು ಸಾರ್ವಜನಿಕರು ಅಭಿಪ್ರಾಯಪಟ್ಟಿದ್ದಾರೆ.
ಈ ಸಂದರ್ಭದಲ್ಲಿ ಗ್ರಾಮದ ಮುಖಂಡರಾದ ಭಗವನರಾವ್ ಪಾಟೀಲ್, ಮಾಜಿ ತಾ.ಪಂ. ಸದಸ್ಯ ದಿಗಂಬರ ಮಾಲೇಕರ್, ಸಂದೀಪ್ ಪಾಟೀಲ್, ನಾಗಗೊಂಡ, ಇಸ್ಮಾಯಿಲ್ ಸಾಬ್, ಮಕ್ಸುದ್ ಸೇರಿದಂತೆ ಹಲವಾರು ಗ್ರಾಮಸ್ಥರು ಉಪಸ್ಥಿತರಿದ್ದರು.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


