ಬೆಂಗಳೂರು: ಸುಳ್ಳುಗಾರ ಪ್ರಧಾನಿ ಮೋದಿ ಹಸಿಹಸಿ ಸುಳ್ಳು ಹೇಳಿದ್ದಾರೆ, ಅಬಕಾರಿ ಇಲಾಖೆಯಿಂದ 700 ಕೋಟಿ ತಂದು ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಚುನಾವಣೆ ಮಾಡುತ್ತಿದೆ ಎಂದು ಹೊಸ ಸುಳ್ಳಿನ ಆರೋಪ ಮಾಡಿದ್ದಾರೆ. ಅವರು ಆರೋಪ ಸಾಬೀತು ಮಾಡಿದರೆ, ನಾನು ರಾಜಕೀಯ ನಿವೃತ್ತಿ ಘೋಷಿಸ್ತೀನಿ, ನೀವು ನಿವೃತ್ತಿ ಘೋಷಿಸ್ತೀರಾ? ಎಂದು ಸಿಎಂ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.
ಕುಟುಂಬ ರಾಜಕಾರಣದ ಬಗ್ಗೆ ಮೋದಿ ಭಯಾನಕ ಭಾಷಣ ಬಿಗಿಯುತ್ತಾರೆ. ಆದ್ರೆ ಎಸ್.ಆರ್.ಬೊಮ್ಮಾಯಿ ಅವರ ಮೊಮ್ಮಗ, ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅವರ ಮಗನಿಗೆ ಟಿಕೆಟ್ ನೀಡಿದ್ದೀರಲ್ಲ ಇದು ಕುಟುಂಬ ರಾಜಕಾರಣ ಅಲ್ವಾ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಮಾಜಿ ಪ್ರಧಾನಿ ದೇವೇಗೌಡರು, ಇವರ ಮಕ್ಕಳಾದ ಕುಮಾರಸ್ವಾಮಿ, ರೇವಣ್ಣ, ಕುಮಾರಸ್ವಾಮಿ ಅವರ ಪತ್ನಿ ಅನಿತಾ ಕುಮಾರಸ್ವಾಮಿ, ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಅವರೆಲ್ಲಾ ಆಯ್ತು. ಈಗ ಕುಮಾರಸ್ವಾಮಿ ದಂಪತಿ ಪುತ್ರ ನಿಖಿಲ್ ಕುಮಾರಸ್ವಾಮಿ, ರೇವಣ್ಣ ದಂಪತಿ ಪುತ್ರರಾದ ಪ್ರಜ್ವಲ್ ರೇವಣ್ಣ, ಸೂರಜ್ ರೇವಣ್ಣ…ಇವರೆಲ್ಲಾ ಏನು ಮೋದಿಯವರೇ? ಇವರೆಲ್ಲಾ ಕುಟುಂಬ ರಾಜಕಾರಣ ಮಾಡ್ತಿಲ್ವಾ ಎಂದು ಸಿಎಂ ಪ್ರಶ್ನಿಸಿದರು.
ಕೊರೋನಾ ಸಂದರ್ಭದಲ್ಲಿ ಇಡೀ ರಾಜ್ಯದ ಜನರ ಪರಿಸ್ಥಿತಿ ಹೇಗಿತ್ತು ಅಂತ ನಮಗೂ ಗೊತ್ತು, ನಿಮಗೂ ಗೊತ್ತು. ಇಂಥಾ ಸಂದರ್ಭದಲ್ಲೂ ಮುಖ್ಯಮಂತ್ರಿ ಯಡಿಯೂರಪ್ಪ, ಸಚಿವರಾದ ಶ್ರೀರಾಮುಲು, ಸುಧಾಕರ್ ಚೀನಾ ಜೊತೆಗೆ ವ್ಯವಹಾರ ಮಾಡಿ ಪಿಪಿಇ ಕಿಟ್ ಖರೀದಿ ಸೇರಿ ಕಮಿಷನ್ ತಿಂದಿದ್ದು, ದುಡ್ಡು ಲೂಟಿ ಮಾಡಿದ್ದು ವರದಿ ಆಗಿದೆ. ಚಾಮರಾಜನಗರದಲ್ಲಿ ಆಕ್ಸಿಜನ್ ಕೊಡದೆ 39 ಜನರ ಸಾವಿಗೆ ಕಾರಣರಾದ ಇವರಿಗೆಲ್ಲಾ ಕ್ಷಮೆ ಇದೆಯಾ? ಇವರನ್ನು ಕ್ಷಮಿಸಿ ಮತ ಹಾಕಿದ್ರೆ ನಿಮ್ಮ ಮತಗಳಿಗೆ ಗೌರವ ಬರುತ್ತದಾ ಯೋಚಿಸಿ ಎಂದು ಸಿದ್ದರಾಮಯ್ಯ ಹೇಳಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q