ಕಲಬುರಗಿ: ‘ಅಯೋಧ್ಯೆಯ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ನಾನು ಹೋಗುವುದಿಲ್ಲ. ಮುಂದೆ ಯಾವಾಗಲಾದರೂ ಹೋಗುವೆ. ನಾನೇ ಲಕ್ಷ್ಮಣ ಇದ್ದೇನೆ’ ಎಂದು ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಹೇಳಿದರು.
ಕಲಬುರಗಿ ಏರ್ ಪೋರ್ಟ್ನಲ್ಲಿ ಮಾತನಾಡಿದ ಅವರು, ಅಯೋಧ್ಯೆ ರಾಮ ಮಂದಿರ ಉದ್ಘಾಟನೆ, ಸಿಎಂ ಸಿದ್ದರಾಮಯ್ಯ, ಲೋಕಸಭೆ ಚುನಾವಣೆ, ಸಿಎಂ ವಿರುದ್ಧ ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ಹೇಳಿಕೆ ಮತ್ತಿತರ ವಿಚಾರಗಳ ಬಗ್ಗೆ ಪ್ರತಿಕ್ರಿಯಿಸಿದರು.
ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆದ್ದರೆ 5 ವರ್ಷ ಸಿದ್ದರಾಮಯ್ಯ ಅವರೇ ಸಿಎಂ ಎಂಬ ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಸವದಿ, ಅದು ಅವರ ವೈಯಕ್ತಿಕ ಅಭಿಪ್ರಾಯ ಎಂದರು. ಕಾಂಗ್ರೆಸ್ ಹೈಕಮಾಂಡ್ ಮನಸ್ಸು ಮಾಡಿದರೆ 5 ವರ್ಷವೂ ಅವರೇ ಸಿಎಂ ಆಗಬಹುದು. ಸಿಎಂ ಸ್ಥಾನದ ಬಗ್ಗೆ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳಲಿದೆ. ಅದು ಐದು ವರ್ಷವೋ ಎರಡು ವರ್ಷವೋ ಎಂಬುದನ್ನೂ ಹೈಕಮಾಂಡೇ ನಿರ್ಧರಿಸಲಿದೆ ಎಂದು ಸವದಿ ಹೇಳಿದರು.


