ಕೊರಟಗೆರೆ: ಮಳೆಯಿಲ್ಲದೆ ಕಂಗೆಟ್ಟಿರುವ ಜನ-ಜಾನುವಾರುಗಳು ಹಾಗೂ ಮೂಕಪ್ರಾಣಿಗಳಿಗೆ ಕುಡಿಯುವ ನೀರಿಗೂ ತೀವ್ರ ತೊಂದರೆ ಉಂಟಾಗಿರುವಂತೆಯೇ, ರಾತ್ರಿ ವೇಳೆಯಲ್ಲಿ ಕೆರೆಯ ನೀರನ್ನು ಖಾಸಗಿ ತೋಟಗಳಿಗೆ ಅಕ್ರಮವಾಗಿ ಹರಿಸಿಕೊಳ್ಳಲಾಗುತ್ತಿದೆ ಎಂದು ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ನವಿಲುಕುರಿಕೆ ಗ್ರಾಮಸ್ಥರು ಗಂಭೀರ ಆರೋಪ ಮಾಡಿದ್ದಾರೆ.
ಸಿ.ಎನ್.ದುರ್ಗ ಹೋಬಳಿಯ ನವಿಲುಕುರಿಕೆ ಗ್ರಾಮದ ವ್ಯಕ್ತಿಯೊಬ್ಬರು ಕಳೆದ 20 ದಿನಗಳಿಂದ ಪಂಪ್ ಮೂಲಕ ನಿರಂತರವಾಗಿ ಕೆರೆ ನೀರನ್ನು ತಮ್ಮ ಖಾಸಗಿ ತೋಟಕ್ಕೆ ಹರಿಸಿಕೊಳ್ಳುತ್ತಿದ್ದಾರೆ. ಬೇಸಿಗೆಯ ಈ ಸಂದರ್ಭದಲ್ಲಿ ಮೂಕಪ್ರಾಣಿಗಳು, ಪಕ್ಷಿಗಳು ಮತ್ತು ಜಾನುವಾರುಗಳಿಗೆ ಕೆರೆಯ ನೀರೇ ಏಕೈಕ ಆಧಾರವಾಗಿದ್ದು, ನೀರಿನ ಮಟ್ಟ ತೀವ್ರವಾಗಿ ಕುಸಿಯುತ್ತಿದೆ. ಅಷ್ಟೇ ಅಲ್ಲದೆ, ಕೆರೆಯ ತೂಬನ್ನು ಹಾಳು ಮಾಡಿರುವುದರಿಂದ ನೀರು ಕೂಡ ಪೋಲಾಗುತ್ತಿದೆ ಎಂದು ಸ್ಥಳೀಯ ರೈತ ಮರಿಯಪ್ಪ ಆತಂಕ ವ್ಯಕ್ತಪಡಿಸಿದ್ದಾರೆ.
ಅಕ್ರಮವಾಗಿ ನೀರು ಬಳಸುತ್ತಿರುವುದನ್ನು ಪ್ರಶ್ನಿಸಲು ಹೋದ ರೈತರ ಮೇಲೆಯೇ ಸದರಿ ವ್ಯಕ್ತಿಯು ತನ್ನ ತಪ್ಪು ಮುಚ್ಚಿಕೊಳ್ಳಲು ಕೊರಟಗೆರೆ ಪೊಲೀಸ್ ಠಾಣೆಗೆ ದೂರು ನೀಡಿರುವುದಾಗಿ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆರೆಯನ್ನು ಮೀನು ಸಾಕಾಣಿಕೆಗಾಗಿ ಗುತ್ತಿಗೆ ಪಡೆದಿರುವ ರೈತ ಮುಖಂಡ ಶ್ರೀರಂಗಯ್ಯ ಮಾತನಾಡಿ, ಲಕ್ಷಾಂತರ ರೂಪಾಯಿ ಬಂಡವಾಳ ಹಾಕಿ ವ್ಯವಹಾರ ಮಾಡುತ್ತಿದ್ದು, ಹೀಗೆ ನೀರು ಖಾಲಿಯಾದರೆ ತಾವು ಬೀದಿಗೆ ಬೀಳಬೇಕಾಗುತ್ತದೆ ಎಂದು ತಮ್ಮ ಅಳಲು ತೋಡಿಕೊಂಡಿದ್ದಾರೆ.
ಯಾವುದೇ ವ್ಯಕ್ತಿಯ ಮೇಲೆ ವೈಯಕ್ತಿಕ ದ್ವೇಷವಿಲ್ಲವಾದರೂ ಕೆರೆಯ ನೀರು ಉಳಿಯಬೇಕು ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿಗೆ ತೊಂದರೆಯಾಗಬಾರದು ಎಂಬುದು ನಮ್ಮ ಒತ್ತಾಯವಾಗಿದೆ ಎಂದು ರೈತ ರವಿ ತಿಳಿಸಿದ್ದಾರೆ. ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಕೆರೆಯ ನೀರನ್ನು ಅಕ್ರಮವಾಗಿ ಬಳಸುತ್ತಿರುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಮತ್ತು ರೈತರು ಆಗ್ರಹಿಸಿದ್ದಾರೆ.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
